SOCIAL MEDIA

Newsletter

PARTNER SITES
Select Language Select State

ನಾಳೆಯಿಂದ 3 ದಿನ ಬ್ಯಾಂಕ್ ನೌಕರರ ಮುಷ್ಕರ: ಗ್ರಾಹಕರೇ ಈ ಕೆಲಸಗಳನ್ನ ಇಂದೇ ಮುಗಿಸಿಕೊಳ್ಳಿ!

ಬ್ಯಾಂಕ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ಮುಷ್ಕರಕ್ಕೆ UFBU ಕರೆ ನೀಡಿದೆ. ವಾರದಲ್ಲಿ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿ, ಕಾರ್ಯಕ್ಷಮತೆ ಪ್ರೋತ್ಸಾಹ ಯೋಜನೆ ಸೇರಿದಂತೆ ಹಲವು ಬೇಡಿಕೆಗಳನ್ನ ಮುಂದಿಟ್ಟಿದ್ದು, ಬೇಡಿಕೆ ಈಡೇರದಿದ್ದರೆ ಅಕ್ಟೋಬರ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ ನೀಡಿದೆ. ಮುಷ್ಕರದಿಂದ ಬ್ಯಾಂಕ್‌ಗಳ ನೇರ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

Written By Puttaraj K Alur
Published: Sep 27, 2026, 11:15 AM IST | Updated: Sep 27, 2026, 11:23 AM IST
Image Credit: Bank Employees Strike
Join

Bank Employees Strike: ದೇಶದಾದ್ಯಂತ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನ ಮುಂದಿಟ್ಟುಕೊಂಡು ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ಮುಷ್ಕರದಿಂದ ಬ್ಯಾಂಕ್‌ಗಳ ಶಾಖೆಗಳಲ್ಲಿ ಗ್ರಾಹಕರಿಗೆ ದೊರೆಯುವ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

ಮುಷ್ಕರದ ಹಿನ್ನೆಲೆಯಲ್ಲಿ ಗ್ರಾಹಕರು ತಮ್ಮ ಬ್ಯಾಂಕ್‌ ಸಂಬಂಧಿತ ಪ್ರಮುಖ ಕೆಲಸಗಳನ್ನ ಮುಂಚಿತವಾಗಿಯೇ ಪೂರ್ಣಗೊಳಿಸಿಕೊಳ್ಳುವುದು ಸೂಕ್ತ. ಈಗಾಗಲೇ ಬ್ಯಾಂಕ್ ನೌಕರರ ಸಂಘಟನೆಗಳು ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದು, ಬೇಡಿಕೆಗಳು ಈಡೇರದಿದ್ದರೆ ಅಕ್ಟೋಬರ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಎಚ್ಚರಿಕೆಯನ್ನೂ ನೀಡಿವೆ.

ಬ್ಯಾಂಕ್ ನೌಕರರ ಪ್ರಮುಖ ಬೇಡಿಕೆಗಳೇನು?

ಬ್ಯಾಂಕ್ ನೌಕರರ ಬಹುದಿನಗಳ ಬೇಡಿಕೆಯೆಂದರೆ ವಾರದಲ್ಲಿ ಐದು ದಿನಗಳ ಕಾಲ ಮಾತ್ರ ಕೆಲಸದ ದಿನಗಳೆಂದು ಪರಿಗಣಿಸಬೇಕು ಎಂಬುದು. ಪ್ರಸ್ತುತ ಬ್ಯಾಂಕ್‌ಗಳಲ್ಲಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಇರುತ್ತದೆ. ಉಳಿದ ಶನಿವಾರಗಳಲ್ಲಿಯೂ ರಜೆ ನೀಡುವ ಮೂಲಕ ವಾರಕ್ಕೆ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರಬೇಕು ಎಂದು ನೌಕರರು ಆಗ್ರಹಿಸುತ್ತಿದ್ದಾರೆ. ಈ ಬೇಡಿಕೆಗೆ ಸಂಬಂಧಿಸಿದಂತೆ 2024ರ ಮಾರ್ಚ್‌ನಲ್ಲಿ ಭಾರತೀಯ ಬ್ಯಾಂಕ್‌ಗಳ ಸಂಘ (IBA) ಮತ್ತು ಬ್ಯಾಂಕ್ ನೌಕರರ ಸಂಘಟನೆಗಳ ನಡುವೆ ಒಪ್ಪಂದವಾಗಿತ್ತು. 

ಈ ಪ್ರಸ್ತಾವನೆಗೆ ಕೇಂದ್ರ ಹಣಕಾಸು ಸಚಿವಾಲಯದ ಅನುಮೋದನೆ ಅಗತ್ಯವಿದೆ. ಆದರೆ ಎರಡು ವರ್ಷ ಕಳೆದರೂ ಬೇಡಿಕೆ ಜಾರಿಗೆ ಬಂದಿಲ್ಲ ಎಂದು UFBU ಅಸಮಾಧಾನ ವ್ಯಕ್ತಪಡಿಸಿದೆ. ವಾರದಲ್ಲಿ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಯಾದರೆ ಸೋಮವಾರದಿಂದ ಶುಕ್ರವಾರದವರೆಗೆ ಕೆಲಸದ ಅವಧಿಯನ್ನ ಹೆಚ್ಚಿಸುವ ಮೂಲಕ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆ ಒದಗಿಸಬಹುದು ಎಂಬುದು ಸಂಘಟನೆಗಳ ವಾದವಾಗಿದೆ.

ಕಾರ್ಯಕ್ಷಮತೆ ಪ್ರೋತ್ಸಾಹ ಯೋಜನೆಗೂ ವಿರೋಧ

ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯ ಜೊತೆಗೆ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಯೋಜನೆ (Performance Linked Incentive – PLI) ಬಗ್ಗೆಯೂ ನೌಕರರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. ಈ ಯೋಜನೆಯಲ್ಲಿನ ಬದಲಾವಣೆಗಳನ್ನ ಸಂಘಟನೆಗಳೊಂದಿಗೆ ಚರ್ಚಿಸಿ ನಿರ್ಧರಿಸಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ. ಇದಲ್ಲದೆ ಪಿಂಚಣಿ ಸಂಬಂಧಿತ ಸಮಸ್ಯೆಗಳ ಪರಿಹಾರ, ಹಳೆಯ ಪಿಂಚಣಿ ಯೋಜನೆಗೆ ಸಂಬಂಧಿಸಿದ ಬೇಡಿಕೆಗಳು, ಖಾಲಿ ಹುದ್ದೆಗಳ ಭರ್ತಿ ಹಾಗೂ ಇತರ ಸೇವಾ ಸೌಲಭ್ಯಗಳ ಬಗ್ಗೆಯೂ ನೌಕರರು ಒತ್ತಾಯಿಸುತ್ತಿದ್ದಾರೆ.

ಸೆಪ್ಟೆಂಬರ್ 22ರಂದು ಬ್ಯಾಂಕ್ ಸಂಘಟನೆಗಳು, ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಸಂಬಂಧಿತ ಸರ್ಕಾರಿ ಅಧಿಕಾರಿಗಳ ನಡುವೆ ನಡೆದ ಮಾತುಕತೆಯಲ್ಲಿಯೂ ಅಂತಿಮ ಒಪ್ಪಂದಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಸೆಪ್ಟೆಂಬರ್ 28ರಿಂದ 30ರವರೆಗೆ ಮುಷ್ಕರ ಮುಂದುವರಿಸಲು UFBU ನಿರ್ಧರಿಸಿದೆ.

ಗ್ರಾಹಕರಿಗೆ ಯಾವ ಸೇವೆಗಳಲ್ಲಿ ವ್ಯತ್ಯಯ?

ಮುಷ್ಕರದ ಅವಧಿಯಲ್ಲಿ ವಿಶೇಷವಾಗಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಶಾಖೆಗಳಲ್ಲಿ ನಗದು ಠೇವಣಿ, ಹಣ ಹಿಂಪಡೆಯುವುದು, ಚೆಕ್‌ ಕ್ಲಿಯರೆನ್ಸ್‌ ಹಾಗೂ ಇತರ ನೇರ ಬ್ಯಾಂಕಿಂಗ್ ಸೇವೆಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಆದರೆ ಎಟಿಎಂ, ಯುಪಿಐ, ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್‌ನಂತಹ ಡಿಜಿಟಲ್ ಸೇವೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. 

ಸೇವೆಗಳ ಲಭ್ಯತೆ ಬ್ಯಾಂಕ್‌ಗಳ ವ್ಯವಸ್ಥೆ ಮತ್ತು ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ. ಗ್ರಾಹಕರು ಹಣಕಾಸು ವ್ಯವಹಾರಗಳನ್ನ ಮುಂಚಿತವಾಗಿ ಯೋಜಿಸಿಕೊಳ್ಳುವುದು ಉತ್ತಮ. ಸೆಪ್ಟೆಂಬರ್ 30ರಂದು ಬ್ಯಾಂಕ್‌ಗಳ ಅರ್ಧವಾರ್ಷಿಕ ಹಣಕಾಸು ವಹಿವಾಟಿನ ಅಂತಿಮ ದಿನವೂ ಆಗಿರುವುದರಿಂದ ವ್ಯವಹಾರಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆಯಿದೆ.

ಅಕ್ಟೋಬರ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಸೆಪ್ಟೆಂಬರ್‌ನ ಮೂರು ದಿನಗಳ ಮುಷ್ಕರದ ಬಳಿಕವೂ ಬೇಡಿಕೆಗಳು ಈಡೇರದಿದ್ದರೆ ಅಕ್ಟೋಬರ್ 26ರಿಂದ ಅನಿರ್ದಿಷ್ಟಾವಧಿ ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ UFBU ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ನೌಕರರ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವಿನ ಮಾತುಕತೆಗಳ ಮೇಲೆ ಎಲ್ಲರ ಗಮನ ನೆಟ್ಟಿದೆ. ಒಟ್ನಲ್ಲಿ ಬ್ಯಾಂಕ್ ನೌಕರರ ಮುಷ್ಕರದಿಂದ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ನೇರ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದ್ದು, ಗ್ರಾಹಕರು ತಮ್ಮ ಅಗತ್ಯ ಬ್ಯಾಂಕಿಂಗ್ ಕೆಲಸಗಳನ್ನ ಮುಂಚಿತವಾಗಿಯೇ ಪೂರ್ಣಗೊಳಿಸಿಕೊಳ್ಳುವುದು ಉತ್ತಮ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES