SOCIAL MEDIA

Newsletter

PARTNER SITES
Select Language Select State

ಶಿಕ್ಷಕರ ನೇಮಕಾತಿ ನಿಗದಿತ ವೇಳೆಗೆ ಪೂರ್ಣಗೊಳಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ನಿಗದಿತ ವೇಳೆಗೆ ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಯನ್ನು ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದ್ದಾರೆ.

Written By Yashaswini V
Published: Nov 26, 2026, 13:57 IST | Updated: Nov 26, 2026, 14:00 IST
Join

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಜನವರಿಯೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಮಾರ್ಚ್–ಏಪ್ರಿಲ್ ತಿಂಗಳೊಳಗೆ ನೇಮಕಾತಿ ಆದೇಶಗಳನ್ನು ನೀಡಬೇಕು. ಜೂನ್‌ನಲ್ಲಿ ಶಾಲೆಗಳು ಆರಂಭವಾಗುವ ವೇಳೆಗೆ ಹೊಸ ಶಿಕ್ಷಕರು ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವಂತಾಗಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಗುರುವಾರ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಿಧಾನ ಪರಿಷತ್ ಸದಸ್ಯರೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಷ್ಮಿ ಮಹೇಶ್ ಅವರಿಗೆ ನೇಮಕಾತಿ ಪ್ರಕ್ರಿಯೆಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಶಿಕ್ಷಕರು ಮತ್ತು ಸಿಬ್ಬಂದಿ ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಅನುದಾನಿತ ನೌಕರರ ಸಮಸ್ಯೆಗಳ ಬಗ್ಗೆ ಚರ್ಚೆ: 
ಸಭೆಯಲ್ಲಿ ಪ್ರಮುಖವಾಗಿ 01-04-2006ಕ್ಕೂ ಮೊದಲು ಅಧಿಸೂಚನೆಗೊಂಡು ನಂತರ ನೇಮಕಾತಿ ಆದೇಶ ಪಡೆದ ಅನುದಾನಿತ ನೌಕರರನ್ನು ಸರ್ಕಾರಿ ನೌಕರರ ಮಾದರಿಯಲ್ಲಿ ಹಳೆಯ ಪಿಂಚಣಿ ಯೋಜನೆಗೆ ಒಳಪಡಿಸುವುದು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸಂಬಂಧಿಸಿದಂತೆ ಕಾಲ್ಪನಿಕ ವೇತನ ಕುರಿತು ಹೈಕೋರ್ಟ್ ನೀಡಿರುವ ಆದೇಶ ಅನುಷ್ಠಾನಗೊಳಿಸುವುದು ಹಾಗೂ ಅನುದಾನಿತ ಶಾಲಾ-ಕಾಲೇಜುಗಳಲ್ಲಿ 2015ರ ನಂತರ ತೆರವಾಗಿರುವ ಹುದ್ದೆಗಳನ್ನು ವಿಳಂಬವಿಲ್ಲದೆ ಭರ್ತಿ ಮಾಡುವ ಕುರಿತು ಚರ್ಚಿಸಲಾಯಿತು.

ಅದೇ ರೀತಿ, ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ 1998ರಿಂದ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿ ಮಾಡುವುದು, ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಸರಳೀಕರಿಸಲು ನೇಮಕಗೊಂಡ ಸದನದ ಸಮಿತಿಯ ವರದಿ ಜಾರಿಗೊಳಿಸುವುದು ಹಾಗೂ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಪದೋನ್ನತಿ ಹೊಂದಿದ ಶಿಕ್ಷಕರು ಮತ್ತು ಉಪನ್ಯಾಸಕರಿಗೆ 15, 20 ಹಾಗೂ 25 ವರ್ಷಗಳ ಕಾಲಮಿತಿ ಬಡ್ತಿ ನೀಡುವಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಬಗ್ಗೆ ಚರ್ಚೆ ನಡೆಯಿತು.

ಸರ್ಕಾರಿ ನೌಕರರಿಗೆ ಇರುವ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುದಾನಿತ ನೌಕರರಿಗೂ ವಿಸ್ತರಿಸುವುದು, ಸರ್ಕಾರಿ ಮಹಿಳಾ ನೌಕರರಿಗೆ ನೀಡಲಾಗುತ್ತಿರುವ ಋತುಚಕ್ರ ರಜೆಯನ್ನು ಅನುದಾನಿತ ಮಹಿಳಾ ಸಿಬ್ಬಂದಿಗೂ ಕಲ್ಪಿಸುವುದು ಹಾಗೂ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ ಬೋಧನಾ ಕಾರ್ಯದ ಜತೆಗೆ ದಾಖಲೆ ನಿರ್ವಹಣೆ ಮತ್ತು ಆನ್‌ಲೈನ್ ದಾಖಲೆಗಳ ಅಪ್‌ಲೋಡ್‌ನಿಂದ ಉಂಟಾಗುತ್ತಿರುವ ಹೆಚ್ಚುವರಿ ಹೊರೆ ಕಡಿಮೆ ಮಾಡುವ ಬಗ್ಗೆಯೂ ಚರ್ಚಿಸಲಾಯಿತು.

ಇದಲ್ಲದೆ, ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿ ಮಾಡುವುದು, 1995ರ ನಂತರ ಸ್ಥಾಪನೆಯಾದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಒದಗಿಸುವುದು, ಅನುದಾನಿತ ಶಾಲೆಗಳಿಗೂ ದ್ವಿಭಾಷಾ ನೀತಿ ವಿಸ್ತರಿಸುವುದು ಹಾಗೂ ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಪ್ರವೇಶಕ್ಕೆ ವಿಧಿಸಲಾಗುವ ದಂಡವನ್ನು ರದ್ದುಗೊಳಿಸುವಂತೆ ಸದಸ್ಯರು ಮನವಿ ಮಾಡಿದರು.

ಸಭೆಯಲ್ಲಿ ಪ್ರಸ್ತಾಪವಾದ ಎಲ್ಲ ವಿಷಯಗಳಿಗೂ ಸಚಿವ ಮಧು ಬಂಗಾರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಸಂಬಂಧಪಟ್ಟ ಅಧಿಕಾರಿಗಳು ತ್ವರಿತವಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಶಿಕ್ಷಕರಿಗೆ ಆರೋಗ್ಯ ವಿಮೆ ಕಲ್ಪಿಸಲು ಮನವಿ: 
ಅನುದಾನರಹಿತ ಶಾಲಾ-ಕಾಲೇಜುಗಳ ಶಿಕ್ಷಕರಿಗೂ ಸರ್ಕಾರದಿಂದ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಎ.ಪಿ. ರಂಗನಾಥ್ ಅವರು ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಕುರಿತು ಲಿಖಿತ ಮನವಿ ಸಲ್ಲಿಸುವಂತೆ ತಿಳಿಸಿ, ಆರೋಗ್ಯ ಇಲಾಖೆಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಮಧು ಬಂಗಾರಪ್ಪ ಅವರ ಕಾರ್ಯಕ್ಕೆ ಹೊರಟ್ಟಿ ಮೆಚ್ಚುಗೆ: 
ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾತನಾಡಿ, "ಎಸ್. ಬಂಗಾರಪ್ಪ ಅವರ ಪುತ್ರರಾಗಿರುವುದು ಸಾರ್ಥಕವಾಗಿದೆ. ಶಿಕ್ಷಣ ಸಚಿವರಾಗಿ ನನಗಿಂತಲೂ ಉತ್ತಮ ಕೆಲಸಗಳನ್ನು ಮಾಡುತ್ತಿದ್ದೀರಿ. ಇಷ್ಟು ತ್ವರಿತವಾಗಿ ಸಭೆ ಕರೆದು ನಮ್ಮ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸಿರುವುದು ಅಭಿನಂದನೀಯ. ನಿಮಗೆ ತುಂಬು ಹೃದಯದ ಅಭಿನಂದನೆಗಳು" ಎಂದು ಸಚಿವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ಇಂದಿನ ಸಭೆ ಅತ್ಯಂತ ಅರ್ಥಪೂರ್ಣವಾಗಿದೆ. ನಮ್ಮ ಸಮಸ್ಯೆಗಳಿಗೆ ಸ್ಪಂದಿಸುವುದರ ಜತೆಗೆ ಕೆಲವು ವಿಚಾರಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿರುವುದು ಸಂತಸದ ಸಂಗತಿ. ಸಚಿವ ಮಧು ಬಂಗಾರಪ್ಪ ಅವರು ಎಲ್ಲ ಸಮಸ್ಯೆಗಳನ್ನು ಬಹಳ ಕಾಳಜಿಯಿಂದ ಆಲಿಸಿದ್ದಾರೆ. ಎಲ್ಲರ ಪರವಾಗಿ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸಭೆಯಲ್ಲಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಎಸ್.ಎಲ್. ಭೋಜೇಗೌಡ, ಶಶೀಲ್ ಜಿ. ನಮೋಶಿ, ಎ.ಪಿ. ರಂಗನಾಥ್, ಡಾ. ಧನಂಜಯ ಸರ್ಜಿ, ಹನಮಂತ ನಿರಾಣಿ, ಕೆ. ವಿವೇಕಾನಂದ, ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಪ್ರಭುಲಿಂಗ ಕವಳಿಕಟ್ಟಿ ಸೇರಿದಂತೆ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ZEENEWS TRENDING STORIES