SOCIAL MEDIA

Newsletter

PARTNER SITES
Select Language Select State

ರೇಣುಕಾಸ್ವಾಮಿ ಮೃ*ದೇಹ ಎಲ್ಲಿ ಹೇಗೆ ಎಸೆಯ ಬೇಕೆಂವ ಮಾಸ್ಟರ್‌ ಪ್ಲ್ಯಾನ್‌ ಕೊಟ್ಟಿದ್ದೇ ಈ PSI ಮತ್ತು ACP !?

ತನಿಖೆಯಲ್ಲಿ ಲೋಪಗಳಾಗಿವೆ, ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.

Written By Chetana Devarmani
Published: Oct 10, 2026, 02:10 PM IST | Updated: Oct 10, 2026, 02:20 PM IST
Join

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಆರೋಪಿಗಳ ಕಾನೂನು ಹೋರಾಟ ಮುಂದುವರಿದಿರುವ ಬೆನ್ನಲ್ಲೇ, ಇದೀಗ ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ತನಿಖೆಯಲ್ಲಿ ಲೋಪಗಳಾಗಿವೆ, ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಮತ್ತು ಪಿಎಸ್‌ಐ ವಿನಯ್ ವಿರುದ್ಧದ ಆರೋಪಗಳ ಕುರಿತು ಪರಿಶೀಲನೆ ನಡೆಸಲು ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಹಲವು ಬೆಳವಣಿಗೆಗಳು ನಡೆದಿವೆ. ಈ ನಡುವೆ ಪ್ರಕರಣದ ತನಿಖಾ ಪ್ರಕ್ರಿಯೆಯನ್ನೇ ಪ್ರಶ್ನಿಸಿ ದೂರು ಸಲ್ಲಿಕೆಯಾಗಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಅವರ ಹೇಳಿಕೆಯ ವಿಚಾರ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲೇ ತನಿಖಾ ತಂಡದ ವಿರುದ್ಧ ಇಲಾಖಾ ತನಿಖೆಗೆ ಸೂಚನೆ ನೀಡಲಾಗಿದೆ. ತನಿಖೆಯಲ್ಲಿನ ಲೋಪದೋಷಗಳ ಕುರಿತು ಸ್ನೇಹಮಯಿ ಕೃಷ್ಣ ಅವರು ದೂರು ಸಲ್ಲಿಸಿದ್ದರು. ತನಿಖೆಯ ವೇಳೆ ಕೆಲವು ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ ಹಾಗೂ ಪಿಎಸ್‌ಐ ವಿನಯ್ ಅವರನ್ನು ಆರೋಪಿಗಳ ಪಟ್ಟಿಯಿಂದ ದೂರವಿಡಲಾಗಿದೆ ಎಂಬ ಆರೋಪಗಳನ್ನು ಅವರು ಮಾಡಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯ ಕುರಿತು ಆಂತರಿಕ ಪರಿಶೀಲನೆ ನಡೆಸುವಂತೆ ಮನವಿ ಮಾಡಲಾಗಿತ್ತು.

ಪ್ರಕರಣದ ತನಿಖಾಧಿಕಾರಿಯಾಗಿದ್ದ ಎಸಿಪಿ ಚಂದನ್ ಮತ್ತು ಪಿಎಸ್‌ಐ ವಿನಯ್ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಇಲಾಖಾ ತನಿಖೆ ನಡೆಸಲು ಸೂಚಿಸಲಾಗಿದೆ. ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಅವರು ತನಿಖೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರು ಡಿಜಿ ಮತ್ತು ಐಜಿಪಿ ಡಾ. ಎಂ. ಸಲೀಂ ಅವರಿಗೆ ದೂರು ಸಲ್ಲಿಸಿದ್ದರು. ದೂರಿನ ಕುರಿತು ಪರಿಶೀಲನೆ ನಡೆಸುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ರೇಣುಕಾಸ್ವಾಮಿ ಮೃತದೇಹವನ್ನು ಎಸೆಯುವ ವಿಚಾರದಲ್ಲಿಯೂ ಪಿಎಸ್‌ಐ ವಿನಯ್ ಅವರ ಪಾತ್ರದ ಕುರಿತು ಆರೋಪಗಳು ಕೇಳಿಬಂದಿವೆ. ಪಿಎಸ್‌ಐ ವಿನಯ್ ಅವರ ಸೂಚನೆಯಂತೆ ಆರೋಪಿಗಳು ಮೃತದೇಹವನ್ನು ಎಸೆದಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಹೀಗಾಗಿ ಅವರನ್ನು ಕೂಡ ಪ್ರಕರಣದ ಆರೋಪಿಗಳ ಪಟ್ಟಿಗೆ ಸೇರಿಸಬೇಕು ಎಂದು ಮನವಿ ಮಾಡಲಾಗಿದೆ. ಅಲ್ಲದೆ, ಪ್ರಕರಣದ ತನಿಖಾಧಿಕಾರಿ ಎಸಿಪಿ ಚಂದನ್ ಅವರು ತನಿಖೆಯಲ್ಲಿ ಲೋಪ ಎಸಗಿದ್ದಾರೆ ಹಾಗೂ ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿದ್ದಾರೆ ಎಂಬ ಆರೋಪಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಆರೋಪಗಳ ಕುರಿತು ಇಲಾಖಾ ಮಟ್ಟದಲ್ಲಿ ತನಿಖೆ ನಡೆಸಬೇಕೆಂದು ದೂರುದಾರರು ಆಗ್ರಹಿಸಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧದ ವಿಚಾರಣೆ ಮುಂದುವರಿಯುತ್ತಿರುವಾಗಲೇ, ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿರುವುದು ಪ್ರಕರಣದ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದೆ. ಸದ್ಯ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ನಡೆಯಲಿರುವ ಇಲಾಖಾ ತನಿಖೆಯಲ್ಲಿ ಎಸಿಪಿ ಚಂದನ್ ಮತ್ತು ಪಿಎಸ್‌ಐ ವಿನಯ್ ವಿರುದ್ಧದ ಆರೋಪಗಳ ಕುರಿತು ಪರಿಶೀಲನೆ ನಡೆಯಲಿದೆ. ತನಿಖೆಯಲ್ಲಿ ನಿಜವಾಗಿಯೂ ಲೋಪಗಳಾಗಿವೆಯೇ, ಸಾಕ್ಷಿಗಳ ವಿಚಾರದಲ್ಲಿ ನಿಯಮ ಉಲ್ಲಂಘನೆಯಾಗಿದೆಯೇ ಹಾಗೂ ಪಿಎಸ್‌ಐ ವಿನಯ್ ಅವರ ಪಾತ್ರದ ಕುರಿತು ಮಾಡಲಾಗಿರುವ ಆರೋಪಗಳಲ್ಲಿ ಎಷ್ಟು ಸತ್ಯಾಂಶವಿದೆ ಎಂಬುದು ಇಲಾಖಾ ತನಿಖೆಯ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ.

ಗಮನಿಸಿ: ಈ ಸುದ್ದಿಯನ್ನು ವಿವಿಧ ವರದಿಗಳನ್ನು ಮತ್ತು ವೈರಲ್‌ ಸಂಗತಿಗಳನ್ನು ಆಧರಿಸಿ ಬರೆಯಲಾಗಿದೆ. ಪೊಲೀಸ್‌ ತನಿಖೆಯ ಬಳಿಕವೇ ಅಸಲಿ ಸತ್ಯ ತಿಳಿಯಬೇಕಿದೆ. ಜೀ ಕನ್ನಡ ನ್ಯೂಸ್‌ ಈ ಮಾಹಿತಿಯನ್ನು ಯಾವ ರೀತಿಯಲ್ಲೂ ದೃಢೀಕರಿಸುವುದಿಲ್ಲ. ಇದು ಕೇವಲ ಮಾಹಿತಿ ಮಾತ್ರವಾಗಿದ್ದು, ಯಾವ ರೀತಿಯಲ್ಲೂ ದೃಢೀಕರಣವಲ್ಲ.

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES