ನಟ ಧನ್ವೀರ್ ಗೌಡಗೆ ಹೈಕೋರ್ಟ್ ಬಿಗ್ ಶಾಕ್ : FIR ರದ್ದತಿಗೆ ನಕಾರ, ತನಿಖೆಗೆ ಗ್ರೀನ್ ಸಿಗ್ನಲ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್‌ಗೆ ಬೆದರಿಕೆ ಹಾಕಿದ ಮತ್ತು ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್‌ಗೆ ಬೆದರಿಕೆ ಹಾಕಿದ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ಯಾಂಡಲ್‌ವುಡ್ ನಟ ಧನ್ವೀರ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ನಟ ಧನ್ವೀರ್ ಅವರಿಗೆ ಕಾನೂನು ಹೋರಾಟದಲ್ಲಿ ಭಾರಿ ಹಿನ್ನಡೆಯಾಗಿದ್ದು, ಪೊಲೀಸರ ತನಿಖೆಗೆ ನ್ಯಾಯಾಲಯ ಹಸಿರು ನಿಶಾನೆ ತೋರಿದೆ.
ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆಯ ವೇಳೆ ಅರ್ಜಿದಾರ ಧನ್ವೀರ್ ಗೌಡ ಪರವಾಗಿ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು ವಾದ ಮಂಡಿಸಿದರು. "ವಿಜಯಲಕ್ಷ್ಮಿ ಮತ್ತು ಅವರ ಬೆಂಬಲಿಗರೇ ಧನ್ವೀರ್ ಅವರ ಮನೆಗೆ ಬಂದು ಅವರ ತಂದೆಗೆ ನಿಂದಿಸಿದ್ದಾರೆ. ಆದರೆ, ಧನ್ವೀರ್ ಅವರು ವಿಜಯಲಕ್ಷ್ಮಿ ಅವರಿಗೆ ಯಾವುದೇ ರೀತಿಯಲ್ಲೂ ನಿಂದಿಸಿಲ್ಲ. ಅನಗತ್ಯವಾಗಿ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ" ಎಂದು ವಕೀಲರು ನ್ಯಾಯಪೀಠದ ಮುಂದೆ ವಾದಿಸಿದರು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಅನೂಪ್ ಕುಮಾರ್ ಅವರು, ಪ್ರಕರಣದ ಗಂಭೀರತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು. "ದೂರುದಾರರಾದ ನಾಗರಾಜ್ ಅವರಿಗೆ ಧನ್ವೀರ್ ಗೌಡ ಬೆದರಿಕೆ ಹಾಕಿರುವುದಕ್ಕೆ ಬಲವಾದ ಸಾಕ್ಷ್ಯಗಳಿವೆ. ದೂರವಾಣಿ ಕರೆ ಮತ್ತು ವಾಟ್ಸ್‌ಆ್ಯಪ್ ಸಂಭಾಷಣೆಯ ವಿವರಗಳನ್ನು ತನಿಖಾಧಿಕಾರಿಗಳು ಸಂಗ್ರಹಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ದೂರಿನಲ್ಲಿ ಮಾಡಲಾಗಿರುವ ಆರೋಪಗಳಿಗೆ ಪೂರಕವಾದ ಸಾಕ್ಷ್ಯಾಧಾರಗಳು ಲಭ್ಯವಿರುವುದರಿಂದ ಈ ಹಂತದಲ್ಲಿ ಪ್ರಕರಣವನ್ನು ರದ್ದುಗೊಳಿಸಬಾರದು" ಎಂದು ಪ್ರತಿವಾದ ಮಂಡಿಸಿದರು.
ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರ ಪೀಠವು, ಪ್ರಾಥಮಿಕ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಯುವುದು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿತು. ಅಲ್ಲದೆ, ಈ ಹಿಂದೆ ಪ್ರಕರಣದ ತನಿಖೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದ ಹೈಕೋರ್ಟ್, ತನಿಖೆಗೆ ಅನುಮತಿ ನೀಡಿ ಧನ್ವೀರ್ ಅವರ ಅರ್ಜಿಯನ್ನು ವಜಾಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.
ವಿವಾದದ ಹಿನ್ನೆಲೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ ಸಂದರ್ಭದಲ್ಲಿ ಧನ್ವೀರ್ ಗೌಡ ಅವರು ದರ್ಶನ್ ಕುಟುಂಬದ ಬೆನ್ನಿಗೆ ನಿಂತಿದ್ದರು. ವಿಜಯಲಕ್ಷ್ಮಿ ಅವರೊಂದಿಗೆ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲುಗಳಿಗೆ ಭೇಟಿ ನೀಡಿ ದರ್ಶನ್ ಅವರಿಗೆ ಧೈರ್ಯ ತುಂಬಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಹಣಕಾಸಿನ ವಿಚಾರ ಹಾಗೂ ದರ್ಶನ್ ಅವರ ಹೆಸರಿನ ಬಳಕೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ತೀವ್ರ ಭಿನ್ನಾಭಿಪ್ರಾಯ ಮೂಡಿತು ಎನ್ನಲಾಗಿದೆ. ಇದರ ಪರಿಣಾಮವಾಗಿ ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರೋಕ್ಷ ಪೋಸ್ಟ್‌ಗಳ ಮೂಲಕ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಯಿತು.
ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ಅವರು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ತೆರಳಿ, ಧನ್ವೀರ್ ತಮಗೆ ಫೋನ್ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆಡಿಯೋ ಸಾಕ್ಷ್ಯ ಸಮೇತ ದೂರು ನೀಡಿದರು. ಇದಕ್ಕೆ ಪ್ರತಿಯಾಗಿ ಧನ್ವೀರ್ ಅವರ ತಂದೆ ತಿಮ್ಮೇಗೌಡ ಅವರು ರಾಜಾಜಿನಗರ ಠಾಣೆಯಲ್ಲಿ ದೂರು ದಾಖಲಿಸಿ, ವಿಜಯಲಕ್ಷ್ಮಿ ಮತ್ತು ಬೆಂಬಲಿಗರು ತಮ್ಮ ಮನೆಗೆ ಬಂದು ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಿದರು.
ವಿವಾದ ತಾರಕಕ್ಕೇರಿದ ಬೆನ್ನಲ್ಲೇ, ತಮ್ಮ ಕುಟುಂಬದ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ಕೋರಿ ವಿಜಯಲಕ್ಷ್ಮಿ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ನಿಂದ ಪ್ರತಿಬಂಧಕಾಜ್ಞೆ ತಂದಿದ್ದಲ್ಲದೆ, ಧನ್ವೀರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನೂ ದಾಖಲಿಸಿದ್ದರು. ಇದೀಗ ಆರ್.ಆರ್. ನಗರ ಠಾಣೆಯ ಪ್ರಕರಣ ರದ್ದತಿಗೆ ಹೈಕೋರ್ಟ್ ನಿರಾಕರಿಸಿರುವುದರಿಂದ ಧನ್ವೀರ್ ಅವರಿಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.