ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಈಗ ಮಾಫಿ ಸಾಕ್ಷಿಯಾಗಿ ವಿಚಾರಣೆಗೆ ಸಹಕರಿಸುತ್ತಿದ್ದಾರೆ. ಪ್ರಕರಣದ ಬಗ್ಗೆ ತಮಗೆ ತಿಳಿದಿರುವ ಸಂಪೂರ್ಣ ಸತ್ಯವನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸುವುದಾಗಿ ಅವರು ಹೇಳಿದ್ದು, ಈ ಹಿನ್ನೆಲೆಯಲ್ಲಿ ಅವರ ಹೇಳಿಕೆ ಪ್ರಕರಣದಲ್ಲಿ ಮಹತ್ವ ಪಡೆದುಕೊಂಡಿದೆ.
ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರ ಈಗಾಗಲೇ ನ್ಯಾಯಾಲಯದ ಹಂತದಲ್ಲಿ ಹಲವು ಬೆಳವಣಿಗೆಗಳಿಗೆ ಕಾರಣವಾಗಿದೆ. ಬೆಂಗಳೂರಿನ ಸತ್ರ ನ್ಯಾಯಾಲಯವು ಸೆಪ್ಟೆಂಬರ್ 16ರಂದು ಹೊಸದಾಗಿ ಆದೇಶ ಹೊರಡಿಸಿ, ಷರತ್ತುಬದ್ಧ ಕ್ಷಮಾದಾನ ನೀಡಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರವಾಗಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಮಾಫಿ ಸಾಕ್ಷಿಯಾಗಲು ಆರೋಪಿಯೊಬ್ಬರು ಅರ್ಜಿ ಸಲ್ಲಿಸುವುದನ್ನು ಸಹ ಆರೋಪಿಗಳಿಗೆ ಪ್ರಶ್ನಿಸುವ ಹಕ್ಕಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಆದರೆ, ಪ್ರದೋಷ್ ಸಾಕ್ಷ್ಯ ನೀಡುವ ಸಂದರ್ಭದಲ್ಲಿ ದರ್ಶನ್ ಅವರಿಗೆ ಅವರನ್ನು ಪಾಟಿ ಸವಾಲು ಮಾಡುವ ಅವಕಾಶವಿದೆ ಎಂದು ನ್ಯಾಯಾಲಯ ತಿಳಿಸಿದೆ. ಇದೀಗ ಪ್ರದೋಷ್ ತಮ್ಮ ಕುಟುಂಬದವರೊಂದಿಗೆ ಮಾತನಾಡಲು ಅವಕಾಶ ನೀಡುವಂತೆ ಮನವಿ ಮಾಡಿರುವುದು ಪ್ರಕರಣದ ಮತ್ತೊಂದು ಬೆಳವಣಿಗೆಯಾಗಿದೆ. ಈ ಬೆಳವಣಿಗೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದಿನ ಕ್ರಮ ಕುತೂಹಲ ಮೂಡಿಸಿದೆ.
ಪ್ರದೋಷ್ ಈ ಹಿಂದೆ ಜೈಲಿನಲ್ಲಿದ್ದಾಗ ಮೊಬೈಲ್ ಬಳಕೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು. ಜೈಲಿನಲ್ಲಿದ್ದ ಮತ್ತೊಬ್ಬ ವಿಚಾರಣಾ ಕೈದಿಯ ಹೆಸರಿನಲ್ಲಿ ನೋಂದಾಯಿಸಿದ್ದ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ತಮ್ಮ ಪತ್ನಿಯೊಂದಿಗೆ ಮಾತನಾಡಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತ್ಯೇಕ ತನಿಖೆಯೂ ನಡೆಯುತ್ತಿದೆ. ಈ ವಿಚಾರವನ್ನೇ ಮುಂದಿಟ್ಟುಕೊಂಡು ದರ್ಶನ್ ಪರ ವಕೀಲರು ಪ್ರದೋಷ್ ಅವರ ಮಾಫಿ ಸಾಕ್ಷಿ ಅರ್ಜಿಯ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಹೈಕೋರ್ಟ್ ಈ ಕಾರಣದಿಂದ ಮಾತ್ರ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ.
ಮತ್ತೊಂದೆಡೆ, ಪ್ರದೋಷ್ ಅವರು ಮಾಫಿ ಸಾಕ್ಷಿಯಾಗುವ ಮೂಲಕ ಪ್ರಕರಣದ ಘಟನೆಗಳ ಕುರಿತು ಮಹತ್ವದ ಮಾಹಿತಿಯನ್ನು ನೀಡುವ ಸಾಧ್ಯತೆ ಇದೆ. ಇತ್ತೀಚೆಗೆ ನ್ಯಾಯಾಲಯದಲ್ಲಿ ದಾಖಲಾದ ಅವರ ಹೇಳಿಕೆಯಲ್ಲಿ ರೇಣುಕಾಸ್ವಾಮಿ ಮೇಲೆ ನಡೆದಿದ್ದ ಹಲ್ಲೆ ಮತ್ತು ನಂತರದ ಬೆಳವಣಿಗೆಗಳ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದಾರೆ ಎಂದು ವರದಿಯಾಗಿದೆ.
ಪ್ರದೋಷ್ ಅವರ ಸಾಕ್ಷ್ಯ ಮುಂದಿನ ದಿನಗಳಲ್ಲಿ ಪ್ರಕರಣದ ವಿಚಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ. ಆದರೆ ಅವರು ನೀಡುವ ಹೇಳಿಕೆಗಳ ವಿಶ್ವಾಸಾರ್ಹತೆಯನ್ನು ಪಾಟಿ ಸವಾಲಿನ ವೇಳೆ ಪ್ರಶ್ನಿಸುವ ಹಕ್ಕು ದರ್ಶನ್ ಸೇರಿದಂತೆ ಇತರ ಆರೋಪಿಗಳಿಗೆ ಇದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೀಗಾಗಿ ರೇಣುಕಾಸ್ವಾಮಿ ಪ್ರಕರಣದಲ್ಲಿ ಪ್ರದೋಷ್ ಅವರ ಸಾಕ್ಷ್ಯ, ಅವರ ಕುಟುಂಬದವರೊಂದಿಗೆ ಸಂಪರ್ಕಕ್ಕೆ ಸಂಬಂಧಿಸಿದ ಮನವಿ ಹಾಗೂ ಮುಂದಿನ ವಿಚಾರಣೆಗಳು ಇದೀಗ ಕುತೂಹಲದ ಕೇಂದ್ರವಾಗಿವೆ.