SOCIAL MEDIA

Newsletter

PARTNER SITES
Select Language Select State

ಬೆಂಗಳೂರಿಗರ ಗಮನಕ್ಕೆ..! ದೀಪಾವಳಿ ಹಬ್ಬಕ್ಕೆ ಕಟ್ಟನಿಟ್ಟಿನ ಮಾರ್ಗಸೂಚಿ ಬಿಡುಗಡೆ

ದೀಪಾವಳಿ ಹಬ್ಬಕ್ಕೆ ಕೆಲವೇ ಕೆಲವು ದಿನಗಳು ಬಾಕಿ ಇವೆ. ಇದರ ನಡುವೆ ಸಾರ್ವಜನಿಕರ ಸುರಕ್ಷತೆ ಹಾಗೂ ಪರಿಸರ ಕಾಳಜಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬೆಂಗಳೂರು ನಗರ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..

Written By Krishna NK
Published: Oct 31, 2026, 06:03 PM IST | Updated: Oct 31, 2026, 06:05 PM IST
Image Credit: Deepavali 2026
Join

ಬೆಂಗಳೂರು : ದೀಪಾವಳಿ ಹಬ್ಬದ ಹಿನ್ನೆಲೆ ಸಾರ್ವಜನಿಕರಿಗೆ ಬೆಂಗಳೂರು ಪೊಲೀಸ್ ಇಲಾಖೆ ಮಹತ್ವದ ಹಾಗೂ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹಬ್ಬದ ಖುಷಿಯಲ್ಲಿ ಯಾರೂ ಕೂಡ ಕಾನೂನು ಮೀರಿ ವರ್ತಿಸದಂತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ, ಹಬ್ಬದ ದಿನಗಳಲ್ಲಿ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ. ಈ ನಿಗದಿತ ಸಮಯವನ್ನು ಮೀರಿ ಯಾರಾದರೂ ಪಟಾಕಿ ಸಿಡಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ವಾಯು ಮತ್ತು ಶಬ್ದ ಮಾಲಿನ್ಯವನ್ನು ತಡೆಯುವ ದೃಷ್ಟಿಯಿಂದ ಸಾರ್ವಜನಿಕರು ಕೇವಲ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು (Green Crackers) ಮಾತ್ರ ಬಳಸುವಂತೆ ವಿಶೇಷವಾಗಿ ಕೋರಲಾಗಿದೆ.

ನಗರದಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅದರಂತೆ ಆಸ್ಪತ್ರೆಗಳು, ಪೆಟ್ರೋಲ್ ಬಂಕ್‌ಗಳು, ಗ್ಯಾಸ್ ಸ್ಟೇಷನ್‌ಗಳು, ಧಾರ್ಮಿಕ ಸ್ಥಳಗಳು, ವೃದ್ಧಾಶ್ರಮಗಳು ಮತ್ತು ಮಕ್ಕಳ ಆರೈಕೆ ಕೇಂದ್ರಗಳ ಹತ್ತಿರ ಪಟಾಕಿಗಳನ್ನು ಒಡೆಯುವಂತಿಲ್ಲ. ಜೊತೆಗೆ, ಜನನಿಬಿಡ ಪ್ರದೇಶಗಳು, ಮುಖ್ಯ ರಸ್ತೆಗಳು ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳಗಳಲ್ಲೂ ಸಹ ಪಟಾಕಿ ಸಿಡಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಪಟಾಕಿ ಖರೀದಿಯ ವಿಚಾರದಲ್ಲೂ ಎಚ್ಚರಿಕೆ ವಹಿಸುವಂತೆ ಪೊಲೀಸರು ತಿಳಿಸಿದ್ದಾರೆ. ಕೇವಲ ಅಧಿಕೃತ ಪರವಾನಗಿ ಹೊಂದಿರುವ ಅಂಗಡಿಗಳಿಂದ ಮಾತ್ರ ಪಟಾಕಿಗಳನ್ನು ಖರೀದಿಸಬೇಕು. ಖರೀದಿಸುವ ಮುನ್ನ ಪೆಟ್ಟಿಗೆಯ ಮೇಲಿರುವ ಕ್ಯೂಆರ್ ಕೋಡ್ (QR Code) ಸ್ಕ್ಯಾನ್ ಮಾಡಿ ಅದು ಅಸಲಿಯೇ ಅಥವಾ ಹಸಿರು ಪಟಾಕಿಯೇ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಒಳ್ಳೆಯದು. ಹೆಚ್ಚು ಶಬ್ದ ಹಾಗೂ ವಾಯುಮಾಲಿನ್ಯ ಉಂಟುಮಾಡುವ ನಿಷೇಧಿತ ಪಟಾಕಿಗಳನ್ನು ಮಾರುಕಟ್ಟೆಯಿಂದ ಖರೀದಿಸದಂತೆ ಎಚ್ಚರಿಸಲಾಗಿದೆ. ಅಕ್ರಮವಾಗಿ ಪಟಾಕಿ ಮಾರಾಟ ಮಾಡುವವರ ಬಗ್ಗೆಯೂ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ಮನೆಗಳಲ್ಲಿ ಮಕ್ಕಳು ಪಟಾಕಿ ಸಿಡಿಸುವಾಗ ಪೋಷಕರು ಕಡ್ಡಾಯವಾಗಿ ಅವರ ಜೊತೆಯಲ್ಲೇ ಇರಬೇಕು. ಸುರಕ್ಷತೆಯ ಮುನ್ನೆಚ್ಚರಿಕೆಯಾಗಿ ಕೈಗವಸುಗಳನ್ನು ಧರಿಸುವುದು, ಹತ್ತಿರದಲ್ಲಿ ನೀರು, ಮರಳು ಅಥವಾ ಅಗ್ನಿಶಾಮಕ ಉಪಕರಣಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಸುರಕ್ಷಿತ. ಒಂದುವೇಳೆ ಆಕಸ್ಮಿಕವಾಗಿ ಯಾವುದೇ ಅವಘಡ ಸಂಭವಿಸಿದರೆ, ಕೂಡಲೇ ತುರ್ತು ಸಹಾಯಕ್ಕಾಗಿ 112 ಅಥವಾ 108 ಸಂಖ್ಯೆಗೆ ಕರೆ ಮಾಡುವಂತೆ ಮನವಿ ಮಾಡಲಾಗಿದೆ.

ಈ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS), ಸ್ಫೋಟಕ ಕಾಯ್ದೆ ಹಾಗೂ ಮಾಲಿನ್ಯ ನಿಯಂತ್ರಣ ಕಾಯ್ದೆಯಡಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಎಲ್ಲರೂ ಎಚ್ಚರಿಕೆಯಿಂದಿದ್ದು, ಸುರಕ್ಷಿತವಾಗಿ ಹಾಗೂ ಸಂತೋಷದಿಂದ ದೀಪಾವಳಿ ಹಬ್ಬವನ್ನು ಆಚರಿಸಬೇಕೆಂದು ನಗರ ಪೊಲೀಸ್ ಇಲಾಖೆ ಕೋರಿದೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES