SOCIAL MEDIA

Newsletter

PARTNER SITES
Select Language Select State

ಹಾವೇರಿಯಲ್ಲಿ ಬಸ್-ಲಾರಿ ಡಿಕ್ಕಿ, ಇಬ್ಬರು ಸಾವು, 11ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಧಾವಿಸಿ ಬಂದು ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆಯಲು ನೆರವಾದರು. ಗಾಯಾಳುಗಳ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಸದ್ಯದ ಮಾಹಿತಿ ಪ್ರಕಾರ 11ಕ್ಕೂ ಹೆಚ್ಚು ಜನರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.

Reported By Manjunath Naragund Written By Manjunath Naragund
Published: Sep 23, 2026, 03:57 PM IST | Updated: Sep 23, 2026, 04:05 PM IST
Image Credit: Haveri Accident
Join

ಹಾವೇರಿ: ಜಿಲ್ಲೆಯ ಹೊರವಲಯದ ಹೊಸರಿತ್ತಿ ಮಾರ್ಗದಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKSRTC) ಸೇರಿದ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಈ ದುರಂತದಲ್ಲಿ ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 11ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣವಾಗಿ ನುಜ್ಜಾಗಿದ್ದು, ರಕ್ತಸಿಕ್ತ ವಾತಾವರಣ ನಿರ್ಮಾಣವಾಗಿತ್ತು.

ದಿನನಿತ್ಯದಂತೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ NWKSRTC ಬಸ್, ಹೊಸರಿತ್ತಿ ಮಾರ್ಗದಲ್ಲಿ ಚಲಿಸುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಸರಕು ಲಾರಿ ನೇರವಾಗಿ ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ನಡೆದ ಈ ಭೀಕರ ಅಪಘಾತದ ಸದ್ದಿಗೆ ಸುತ್ತಮುತ್ತಲ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗದಲ್ಲಿದ್ದ ಆಸನಗಳಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಕಿರುಚಾಟ, ಚೀರಾಟ ಮುಗಿಲು ಮುಟ್ಟಿತ್ತು. ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಧಾವಿಸಿ ಬಂದು ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆಯಲು ನೆರವಾದರು. ಗಾಯಾಳುಗಳ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಸದ್ಯದ ಮಾಹಿತಿ ಪ್ರಕಾರ 11ಕ್ಕೂ ಹೆಚ್ಚು ಜನರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.

ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ತಕ್ಷಣವೇ ಹಾವೇರಿ ಜಿಲ್ಲಾಸ್ಪತ್ರೆ, ಗುತ್ತಲ ಹಾಗೂ ಹೊಸರಿತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ, ತೀವ್ರವಾಗಿ ಗಾಯಗೊಂಡು ಪರಿಸ್ಥಿತಿ ಚಿಂತಾಜನಕವಾಗಿದ್ದ ಇಬ್ಬರು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಗುತ್ತಲ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಹೊಸರಿತ್ತಿ ಮಾರ್ಗದಲ್ಲಿ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. 

ಈ ಸಂಬಂಧ ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೇ ಅಥವಾ ತಾಂತ್ರಿಕ ದೋಷವೇ ಎಂಬ ಆಯಾಮದಲ್ಲಿ ತನಿಖೆ ಮುಂದುವರಿದಿದೆ. ಅಪಘಾತದ ಕುರಿತು ಇನ್ನಷ್ಟು ನಿಖರ ಮಾಹಿತಿ ಹಾಗೂ ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES