SOCIAL MEDIA

Newsletter

PARTNER SITES
Select Language Select State

ಬೆಂಗಳೂರಿನಲ್ಲಿ ಕಾಮನ್‌ವೆಲ್ತ್ ಮಹಿಳಾ ಸಂಸದರ ರಾಷ್ಟ್ರೀಯ ಸಮ್ಮೇಳನ; ನ.14ರಂದು ಕರ್ಟನ್ ರೈಸರ್ ಕಾರ್ಯಕ್ರಮ

ಕಾಮನ್‌ವೆಲ್ತ್ ಮಹಿಳಾ ಸಂಸದರ ಭಾರತ ಪ್ರಾದೇಶಿಕ ಘಟಕದ ವಿಶೇಷ ಸಮ್ಮೇಳನವನ್ನು ನವೆಂಬರ್ 17 ಮತ್ತು 18ರಂದು ವಿಧಾನಸೌಧದಲ್ಲಿ ಆಯೋಜಿಸಲಾಗಿದೆ ಎಂದು ಸಭಾಧ್ಯಕ್ಷ ಜಿ.ಎಸ್.ಪಾಟೀಲ್ ತಿಳಿಸಿದರು.‌

Written By Chetana Devarmani
Published: Nov 09, 2026, 21:33 IST | Updated: Nov 10, 2026, 08:13 IST
Join

ಬೆಂಗಳೂರು: ದೇಶದ ವಿವಿಧ ರಾಜ್ಯಗಳ ಮಹಿಳಾ ಜನಪ್ರತಿನಿಧಿಗಳನ್ನು ಒಂದೇ ಸೂರಿನಡಿ ತರುವ ರಾಷ್ಟ್ರೀಯ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯಲಿದೆ. ಕಾಮನ್‌ವೆಲ್ತ್ ಮಹಿಳಾ ಸಂಸದರ ಭಾರತ ಪ್ರಾದೇಶಿಕ ಘಟಕದ ವಿಶೇಷ ಸಮ್ಮೇಳನವನ್ನು ನವೆಂಬರ್ 17 ಮತ್ತು 18ರಂದು ವಿಧಾನಸೌಧದಲ್ಲಿ ಆಯೋಜಿಸಲಾಗಿದೆ ಎಂದು ಸಭಾಧ್ಯಕ್ಷ ಜಿ.ಎಸ್.ಪಾಟೀಲ್ ತಿಳಿಸಿದರು.‌ ಮಹಿಳಾ ನಾಯಕತ್ವ, ಸಂಸದೀಯ ಪ್ರಜಾಪ್ರಭುತ್ವ ಹಾಗೂ ಸಮಕಾಲೀನ ಡಿಜಿಟಲ್ ಸವಾಲುಗಳ ಕುರಿತು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಸಲು ಕರ್ನಾಟಕ ಸಜ್ಜಾಗಿದೆ. ಮಹಿಳೆಯರ ರಾಜಕೀಯ ಪ್ರಾತಿನಿಧ್ಯ ಹೆಚ್ಚಿಸುವುದರ ಜೊತೆಗೆ ಶಾಸನ ರಚನೆ, ಆಡಳಿತ ಮತ್ತು ಡಿಜಿಟಲ್ ಕ್ಷೇತ್ರದಲ್ಲಿ ಅವರ ನಾಯಕತ್ವವನ್ನು ಬಲಪಡಿಸುವ ಉದ್ದೇಶದಿಂದ ಮಹತ್ವದ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಈ ಸಮ್ಮೇಳನದ ಪೂರ್ವಭಾವಿಯಾಗಿ ನವೆಂಬರ್ 14ರಂದು ಬೆಂಗಳೂರಿನಲ್ಲಿ ಕರ್ಟನ್ ರೈಸರ್ ಕಾರ್ಯಕ್ರಮ ನಡೆಯಲಿದೆ.

ಸಭಾಪತಿ ಸಲೀಂ ಅಹಮದ್ ಮಾತನಾಡಿ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನವೆಂಬರ್ 17 ಮತ್ತು 18ರಂದು ಮಹಿಳಾ ಸಮ್ಮೇಳನ ಆಯೋಜಿಸಲಾಗುತ್ತಿದೆ. ಪುರಂದರೇಶ್ವರಿ ಮಹಿಳಾ ಫೋರಂ ಅಧ್ಯಕ್ಷರ ಸಲಹೆಯಂತೆ ಸ್ಪೀಕರ್ ಹಾಗೂ ತಾವು ಈ ಸಮ್ಮೇಳನದ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಅವರು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. 

ಈ ಸಮ್ಮೇಳನದಲ್ಲಿ 155 ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಮುಖ್ಯಮಂತ್ರಿ, ಸಚಿವರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ. ನವೆಂಬರ್ 18ರಂದು ರಾಜ್ಯಪಾಲರು ಭಾಗವಹಿಸಲಿದ್ದು, ಲೋಕಸಭಾ ಸ್ಪೀಕರ್ ಕೂಡ ಆಗಮಿಸಲಿದ್ದಾರೆ. ನವೆಂಬರ್ 14ರಂದು ಕರ್ಟನ್ ರೈಸರ್ ಕಾರ್ಯಕ್ರಮ ನಡೆಯಲಿದೆ. ಮಹಿಳಾ ಸಬಲೀಕರಣ ಮತ್ತು ಮಹಿಳೆಯರಿಗೆ ಶಕ್ತಿ ತುಂಬುವ ಉದ್ದೇಶ ಹೊಂದಿರುವ ಈ ಸಮ್ಮೇಳನದ ಮೂಲಕ ಇಡೀ ದೇಶಕ್ಕೆ ಸಂದೇಶ ನೀಡಲಾಗುವುದು ಅಂತಾ ಮಾಹಿತಿ ನೀಡಿದರು.

ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿಡಬ್ಲ್ಯುಪಿ (CWP) ಭಾರತ ಪ್ರಾದೇಶಿಕ ಘಟಕದ ಅಧ್ಯಕ್ಷೆ ಡಾ. ಡಿ. ಪುರಂದೇಶ್ವರಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಮ್ಮೇಳನದ ಅಧಿಕೃತ ಪೋಸ್ಟರ್ ಅನಾವರಣಗೊಳಿಸಲಾಗುತ್ತದೆ. ಅಲ್ಲದೆ, ಸಮ್ಮೇಳನದ ಉದ್ದೇಶ, ಕಾರ್ಯಕ್ರಮದ ರೂಪುರೇಷೆ, ವಿವಿಧ ಗೋಷ್ಠಿಗಳು ಹಾಗೂ ಸಿದ್ಧತೆಗಳ ಕುರಿತು ಮಾಹಿತಿ ನೀಡಲಾಗುತ್ತದೆ.

ಮಹಿಳೆಯರಿಗೆ ರಾಜಕೀಯ ಮತ್ತು ಆಡಳಿತಾತ್ಮಕ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವುದು ಮಾತ್ರವಲ್ಲದೆ, ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು ಈ ಸಮ್ಮೇಳನದ ಪ್ರಮುಖ ಆಶಯವಾಗಿದೆ. ಸಂಸತ್ತು ಮತ್ತು ವಿಧಾನಮಂಡಲಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಿಸುವುದರ ಜೊತೆಗೆ ಶಾಸನ ರಚನೆಯಲ್ಲಿ ಅವರ ಪಾತ್ರ ಹಾಗೂ ನಾಯಕತ್ವದ ಸಾಮರ್ಥ್ಯವನ್ನು ಬಲಪಡಿಸುವ ಕುರಿತು ಚರ್ಚೆಗಳು ನಡೆಯಲಿವೆ.

ಮಹಿಳಾ ಜನಪ್ರತಿನಿಧಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳಲು, ವಿವಿಧ ರಾಜ್ಯಗಳಲ್ಲಿನ ಉತ್ತಮ ಆಡಳಿತ ಮಾದರಿಗಳನ್ನು ತಿಳಿದುಕೊಳ್ಳಲು ಮತ್ತು ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ಸವಾಲುಗಳ ಬಗ್ಗೆ ವಿಚಾರ ವಿನಿಮಯ ನಡೆಸಲು ಈ ಸಮ್ಮೇಳನ ವೇದಿಕೆಯಾಗಲಿದೆ.

ಮಹಿಳೆಯರ ಸೈಬರ್ ಸುರಕ್ಷತೆಗೂ ಒತ್ತು

ಮಾಹಿತಿ ತಂತ್ರಜ್ಞಾನದ ಪ್ರಮುಖ ಕೇಂದ್ರವಾಗಿರುವ ಬೆಂಗಳೂರಿನಲ್ಲಿ ಮಹಿಳೆಯರ ಡಿಜಿಟಲ್ ಸುರಕ್ಷತೆ ಮತ್ತು ಸಬಲೀಕರಣದ ಕುರಿತು ಚರ್ಚೆ ನಡೆಯುತ್ತಿರುವುದು ವಿಶೇಷ ಮಹತ್ವ ಪಡೆದುಕೊಂಡಿದೆ. ಪ್ರಸ್ತುತ ಡಿಜಿಟಲ್ ಯುಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸೈಬರ್ ಕಿರುಕುಳ, ಆನ್‌ಲೈನ್ ಬೆದರಿಕೆ, ವೈಯಕ್ತಿಕ ಮಾಹಿತಿಯ ದುರ್ಬಳಕೆ ಸೇರಿದಂತೆ ವಿವಿಧ ಸವಾಲುಗಳ ಕುರಿತು ಗಮನ ಹರಿಸಲಾಗುತ್ತದೆ.

ಸಾಮಾಜಿಕ ಜಾಲತಾಣಗಳು ಮತ್ತು ಡಿಜಿಟಲ್ ವೇದಿಕೆಗಳ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸುರಕ್ಷಿತ ಡಿಜಿಟಲ್ ವಾತಾವರಣ ನಿರ್ಮಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಮಹಿಳೆಯರಲ್ಲಿ ಸೈಬರ್ ಸುರಕ್ಷತೆಯ ಅರಿವು ಮೂಡಿಸುವುದು, ಕಾನೂನು ರಕ್ಷಣೆಯ ಕುರಿತು ತಿಳಿವಳಿಕೆ ನೀಡುವುದು ಹಾಗೂ ಡಿಜಿಟಲ್ ಕ್ಷೇತ್ರದಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ವಿಷಯಗಳು ಚರ್ಚೆಯ ಕೇಂದ್ರಬಿಂದುವಾಗಲಿವೆ.

ಮಹಿಳೆಯರ ಪ್ರಾತಿನಿಧ್ಯ ಹೆಚ್ಚಿಸಲು ಚರ್ಚೆ: ಸ್ಪೀಕರ್ ಜಿ.ಎಸ್. ಪಾಟೀಲ್

ಈ ಕುರಿತು ವಿಧಾನಸಭೆ ಸ್ಪೀಕರ್ ಜಿ.ಎಸ್. ಪಾಟೀಲ್ ಮಾತನಾಡಿ, ಮಹಿಳೆಯರ ಪ್ರಾತಿನಿಧ್ಯ ಹೆಚ್ಚಿಸುವುದು ಮತ್ತು ಮಹಿಳೆಯರ ಸೈಬರ್ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದು ಸಮ್ಮೇಳನದ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ.

ನಮ್ಮ ರಾಜ್ಯದ ರಾಜ್ಯಪಾಲರು ಮಹಿಳೆಯಾಗಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಯೂ ಮಹಿಳೆಯಾಗಿದ್ದು, ರಾಜ್ಯದ ಎರಡೂ ಸದನಗಳ ಕಾರ್ಯದರ್ಶಿಗಳೂ ಮಹಿಳೆಯರೇ ಆಗಿದ್ದಾರೆ. ವಿವಿಧ ಉನ್ನತ ಹುದ್ದೆಗಳಲ್ಲಿ ಮಹಿಳೆಯರು ಜವಾಬ್ದಾರಿ ನಿರ್ವಹಿಸುತ್ತಿರುವುದು ಮಹಿಳಾ ನಾಯಕತ್ವದ ಮಹತ್ವವನ್ನು ತೋರಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆಯರು ರಾಜಕೀಯ, ಆಡಳಿತ ಮತ್ತು ಶಾಸನ ರಚನೆಯ ಕ್ಷೇತ್ರಗಳಲ್ಲಿ ಇನ್ನಷ್ಟು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಈ ನಿಟ್ಟಿನಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸುವುದರ ಜೊತೆಗೆ ಡಿಜಿಟಲ್ ಸುರಕ್ಷತೆಯ ಬಗ್ಗೆಯೂ ಗಂಭೀರ ಚರ್ಚೆ ನಡೆಯಲಿದೆ. ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸಬೇಕು ಎಂಬ ಆಶಯವಿದೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕೇಂದ್ರ ಮಟ್ಟದಲ್ಲಿ 27 ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯ ಸದಸ್ಯರೂ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ದೇಶದ ವಿವಿಧ ಭಾಗಗಳಿಂದ ಮಹಿಳಾ ಪ್ರತಿನಿಧಿಗಳು ಆಗಮಿಸಲಿದ್ದು, ವಿದೇಶಿ ಪ್ರತಿನಿಧಿಗಳೂ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದರಿಂದ ಮಹಿಳಾ ನಾಯಕತ್ವ ಮತ್ತು ಸಂಸದೀಯ ವ್ಯವಸ್ಥೆಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಮಟ್ಟದ ಅನುಭವ ಹಾಗೂ ವಿಚಾರಗಳನ್ನು ಹಂಚಿಕೊಳ್ಳಲು ಅವಕಾಶ ದೊರೆಯಲಿದೆ ಎಂದು ಹೇಳಿದ್ದಾರೆ.

ಮಹಿಳಾ ಜನಪ್ರತಿನಿಧಿಗಳ ಜ್ಞಾನಾರ್ಜನೆಗೆ ವೇದಿಕೆ

ಎರಡು ದಿನಗಳ ಕಾಲ ನಡೆಯಲಿರುವ ವಿಚಾರ ವಿನಿಮಯ ಕಾರ್ಯಕ್ರಮವು ಮಹಿಳಾ ಜನಪ್ರತಿನಿಧಿಗಳ ಜ್ಞಾನಾರ್ಜನೆಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ. ಶಾಸನಸಭೆಗಳಲ್ಲಿ ಮಹಿಳೆಯರ ಪರಿಣಾಮಕಾರಿ ಪಾಲ್ಗೊಳ್ಳುವಿಕೆ, ಆಡಳಿತಾತ್ಮಕ ನಿರ್ಧಾರಗಳಲ್ಲಿ ಅವರ ಪಾತ್ರ, ಸಮಾನ ಅವಕಾಶಗಳು ಹಾಗೂ ಮಹಿಳಾ ಸ್ನೇಹಿ ಶಾಸನಸಭೆಗಳ ನಿರ್ಮಾಣದ ಕುರಿತು ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಯಲಿದೆ.

ಮಹಿಳೆಯರ ಪ್ರಾತಿನಿಧ್ಯವನ್ನು ಸಂಖ್ಯೆಗೆ ಸೀಮಿತಗೊಳಿಸದೆ, ಅವರು ಶಾಸನ ರಚನೆ ಮತ್ತು ಆಡಳಿತದಲ್ಲಿ ಪರಿಣಾಮಕಾರಿಯಾಗಿ ನಾಯಕತ್ವ ವಹಿಸುವಂತಹ ವಾತಾವರಣ ನಿರ್ಮಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮ್ಮೇಳನದಲ್ಲಿ ನಡೆಯುವ ಚರ್ಚೆಗಳು ಮುಂದಿನ ದಿನಗಳಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು ನೀಡುವ ನಿರೀಕ್ಷೆಯಿದೆ.

ಮಹಿಳಾ ನಾಯಕತ್ವ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಡಿಜಿಟಲ್ ಸುರಕ್ಷತೆಯಂತಹ ಸಮಕಾಲೀನ ವಿಚಾರಗಳ ಕುರಿತು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಪ್ರತಿನಿಧಿಗಳು ಒಂದೇ ವೇದಿಕೆಯಲ್ಲಿ ಚರ್ಚೆ ನಡೆಸಲಿರುವುದು ಕರ್ನಾಟಕಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಮಾಹಿತಿ ತಂತ್ರಜ್ಞಾನದ ಕೇಂದ್ರವಾಗಿರುವ ಬೆಂಗಳೂರಿನಲ್ಲಿ ಇಂತಹ ಮಹತ್ವದ ಸಮ್ಮೇಳನ ನಡೆಯುತ್ತಿರುವುದು ಮಹಿಳೆಯರ ಸಬಲೀಕರಣದ ದೃಷ್ಟಿಯಿಂದಲೂ ವಿಶೇಷ ಪ್ರಸ್ತುತತೆ ಪಡೆದುಕೊಂಡಿದೆ.

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES