SOCIAL MEDIA

Newsletter

PARTNER SITES
Select Language Select State

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್‌ಗೆ ಸೇರಿಸಲು ಆಗ್ರಹ

ಕೇವಲ ಕೇಂದ್ರ ಸರ್ಕಾರದ ಮೇಲಷ್ಟೇ ಅಲ್ಲದೆ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕೂಡ ಈ ವಿಷಯದಲ್ಲಿ ಅಗತ್ಯವಿರುವ ಗಂಭೀರ ಕಾನೂನಾತ್ಮಕ ಹಾಗೂ ರಾಜಕೀಯ ಹೆಜ್ಜೆಗಳನ್ನು ತುರ್ತಾಗಿ ಇಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Reported By Manjunath Naragund Written By Manjunath Naragund
Published: Oct 25, 2026, 10:49 PM IST | Updated: Oct 25, 2026, 10:52 PM IST
Image Credit: Reservation
Join

ಬಳ್ಳಾರಿ: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಿ ಸಂವಿಧಾನಾತ್ಮಕ ರಕ್ಷಣೆ ಒದಗಿಸುವಂತೆ ಆಗ್ರಹಿಸಿ, ಬಳ್ಳಾರಿಯಲ್ಲಿ ದಲಿತಪರ ಸಂಘಟನೆಗಳ ವತಿಯಿಂದ ಬೃಹತ್ ಧರಣಿ ಸತ್ಯಾಗ್ರಹ ಹಾಗೂ ಪ್ರತಿಭಟನೆ ನಡೆಸಲಾಗಿದೆ. ಕೇಂದ್ರ ಹಾಗೂ ಹಿಂದಿನ ಬಿಜೆಪಿ ಸರ್ಕಾರದ ಧೋರಣೆಯ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯ ಹಳೆಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದಲಿತ ಹಕ್ಕುಗಳ ಸಮಿತಿ ಹಾಗೂ ಮಾನವ ಬಂಧುತ್ವ ವೇದಿಕೆಯ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಮತ್ತು ಮುಖಂಡರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನಾತ್ಮಕ ರಕ್ಷಣೆ ಕಲ್ಪಿಸಲು ಒತ್ತಾಯ:

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆಯ ಮುಖಂಡರು, ಎಸ್‌ಸಿ ಮೀಸಲಾತಿಯನ್ನು ಶೇಕಡಾ 17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇಕಡಾ 7ಕ್ಕೆ ಹೆಚ್ಚಿಸಿ ಕೇವಲ ಆದೇಶ ಹೊರಡಿಸಿದರೆ ಸಾಲದು, ಅದಕ್ಕೆ ಕೇಂದ್ರ ಸರ್ಕಾರವು ಸಂವಿಧಾನದ 9ನೇ ಶೆಡ್ಯೂಲ್ ಅಡಿಯಲ್ಲಿ ಕಾನೂನಾತ್ಮಕ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು. ಇದರೊಂದಿಗೆ ಹಿಂದುಳಿದ ವರ್ಗಗಳಿಗೆ ಶೇಕಡಾ 32ರಷ್ಟು ಮೀಸಲಾತಿ ಸೇರಿ ಒಟ್ಟು ಶೇಕಡಾ 56ರಷ್ಟು ಮೀಸಲಾತಿಗೆ ಯಾವುದೇ ಕಾನೂನು ತೊಡಕುಂಟಾಗದಂತೆ ತಕ್ಷಣವೇ ಸಂವಿಧಾನಾತ್ಮಕ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೂ ಎಚ್ಚರಿಕೆ:

ಕೇವಲ ಕೇಂದ್ರ ಸರ್ಕಾರದ ಮೇಲಷ್ಟೇ ಅಲ್ಲದೆ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕೂಡ ಈ ವಿಷಯದಲ್ಲಿ ಅಗತ್ಯವಿರುವ ಗಂಭೀರ ಕಾನೂನಾತ್ಮಕ ಹಾಗೂ ರಾಜಕೀಯ ಹೆಜ್ಜೆಗಳನ್ನು ತುರ್ತಾಗಿ ಇಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮೀಸಲಾತಿ ಸೌಲಭ್ಯವನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ಹಾಗೂ ಅಧಿವೇಶನಗಳಲ್ಲಿ ಧ್ವನಿ ಎತ್ತುವಲ್ಲಿ ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಒತ್ತಾಯಿಸಲಾಯಿತು. ಸಂವಿಧಾನ ದತ್ತ ಹಕ್ಕುಗಳಿಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ ಮುಖಂಡರು, ಬೇಡಿಕೆ ಈಡೇರುವವರೆಗೂ ಹೋರಾಟ ತೀವ್ರಗೊಳಿಸುವುದಾಗಿ ತಿಳಿಸಿದರು. ಈ ಪ್ರತಿಭಟನೆಯು ಬಳ್ಳಾರಿ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
 

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES