SOCIAL MEDIA

Newsletter

PARTNER SITES
Select Language Select State

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣಾ ರಣಕಹಳೆ: ಗದಗದಲ್ಲಿ ಬಿಗಿ ಭದ್ರತೆಯೊಂದಿಗೆ ಬಿರುಸಿನ ಮತದಾನ ಆರಂಭ!

ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ನಾಲ್ಕು ಜಿಲ್ಲೆಗಳನ್ನು ಒಳಗೊಂಡಿರುವ ಪ್ರತಿಷ್ಠಿತ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಇಂದು ಸಕಲ ಸಿದ್ಧತೆಗಳೊಂದಿಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ.

Reported By Manjunath Naragund Written By Manjunath Naragund
Published: Oct 23, 2026, 06:39 AM IST | Updated: Oct 23, 2026, 06:46 AM IST
Image Credit: Gadag
Join
 
ಗದಗ:  ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ನಾಲ್ಕು ಜಿಲ್ಲೆಗಳನ್ನು ಒಳಗೊಂಡಿರುವ ಪ್ರತಿಷ್ಠಿತ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಇಂದು ಸಕಲ ಸಿದ್ಧತೆಗಳೊಂದಿಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಂಗತ ಹಾಗೂ ಶಾಂತಿಯುತ ಮತದಾನ ನಡೆಸಲು ಗದಗ ಜಿಲ್ಲಾಡಳಿತವು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಈ ಬಾರಿಯ ಚುನಾವಣಾ ಕಣದಲ್ಲಿ ಒಟ್ಟು 14 ಜನ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರೂ, ಪ್ರಮುಖವಾಗಿ ಎನ್‌ಡಿಎ ಮೈತ್ರಿಕೂಟದಿಂದ ಎಸ್.ವಿ. ಸಂಕನೂರ್ ಹಾಗೂ ಕಾಂಗ್ರೆಸ್ ಪಕ್ಷದಿಂದ ಮೋಹನ್ ಲಿಂಬಿಕಾಯಿ ಅವರ ನಡುವೆ ತೀವ್ರ ಹಾಗೂ ನೇರ ಹಣಾಹಣಿ ಏರ್ಪಟ್ಟಿದೆ. ಉಭಯ ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ಕೊನೆಯ ಕ್ಷಣದವರೆಗೆ ಭರ್ಜರಿ ಪ್ರಚಾರ ನಡೆಸಿದ್ದರು.

ಗದಗ ಜಿಲ್ಲೆಯಾದ್ಯಂತ ಒಟ್ಟು 27 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 21,594 ಪದವೀಧರ ಮತದಾರರಿದ್ದು, ಇದರಲ್ಲಿ 13,756 ಪುರುಷ ಮತದಾರರು ಹಾಗೂ 7,838 ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇನ್ನು ಗದಗ ತಾಲೂಕಿನಲ್ಲಿ ಅತೀ ಹೆಚ್ಚು ಅಂದರೆ 14 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚುನಾವಣಾ ಆಯೋಗದ ಸೂಚನೆಯಂತೆ, ಜಿಲ್ಲೆಯಲ್ಲಿ 3 ಅತಿಸೂಕ್ಷ್ಮ ಹಾಗೂ 10 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಪಾರದರ್ಶಕತೆಗಾಗಿ ಎಲ್ಲಾ ಮತಗಟ್ಟೆಗಳಲ್ಲೂ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.

ಇಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ರವರೆಗೆ ಮತದಾನ ಕಾರ್ಯ ನಡೆಯಲಿದೆ. ಚುನಾವಣೆ ಸುಸೂತ್ರವಾಗಿ ಜರುಗಿಸಲು ಒಟ್ಟು 128 ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು 2 ಡಿವೈಎಸ್‌ಪಿ, 10 ಸಿಪಿಐ ಸೇರಿದಂತೆ 250ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಹಾಗೂ ಹೋಂ ಗಾರ್ಡ್ಸ್‌ಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಮತಗಟ್ಟೆಯೊಳಗೆ ಯಾವುದೇ ರೀತಿಯ ಮೊಬೈಲ್, ಕ್ಯಾಮೆರಾ ಹಾಗೂ ಇತರೆ ನಿಷೇಧಿತ ವಸ್ತುಗಳನ್ನು ಕೊಂಡೊಯ್ಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪದವೀಧರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES