SOCIAL MEDIA

Newsletter

PARTNER SITES
Select Language Select State

ವಿಧಾನ ಪರಿಷತ್‌ನ 4 ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆ: ಮತ ಎಣಿಕೆ ಕಾರ್ಯ ಆರಂಭ

ಪ್ರಸ್ತುತ ಮತಪತ್ರಗಳನ್ನು ವಿಂಗಡಿಸಿ ಬಂಡಲ್ ಮಾಡುವ ಕಾರ್ಯ ಭರದಿಂದ ಸಾಗಿದ್ದು, ಇದು ಪೂರ್ಣಗೊಂಡ ಬಳಿಕ ಅಂತಿಮ ಮತ ಎಣಿಕೆ ಅಧಿಕೃತವಾಗಿ ಪ್ರಾರಂಭವಾಗಲಿದೆ. ಲಭ್ಯವಿರುವ ಮಾಹಿತಿಯಂತೆ, ಬೆಳಗ್ಗೆ 11 ಗಂಟೆಯೊಳಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಂಡಲ್ ವಿಂಗಡನೆ ಮುಗಿಯುವ ನಿರೀಕ್ಷೆಯಿದೆ.

Reported By Manjunath Naragund Written By Manjunath Naragund
Published: Oct 27, 2026, 12:04 PM IST | Updated: Oct 27, 2026, 12:15 PM IST
Image Credit: Voting
Join

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಪ್ರಮುಖ ನಾಲ್ಕು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಅತ್ಯಂತ ಬಿಗಿ ಭದ್ರತೆಯ ನಡುವೆ ಆರಂಭಗೊಂಡಿದೆ.ಕಳೆದ ಅಕ್ಟೋಬರ್ 23 ರಂದು ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇಂದು ಮತಗಳ ಎಣಿಕೆ ಕಾರ್ಯ ಮುಂದುವರಿದಿದೆ.ಬೆಂಗಳೂರಿನ ಹೆಮ್ಮೆಯ ಕೇಂದ್ರವಾದ ಸರ್ಕಾರಿ ಕಲಾ ಹಾಗೂ ವಿಜ್ಞಾನ ಕಾಲೇಜಿನ ಆವರಣದಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಮತ ಎಣಿಕೆ ಕಾರ್ಯ ಜೋರಾಗಿ ಸಾಗುತ್ತಿದ್ದು, ಭದ್ರತಾ ಕೊಠಡಿಯಿಂದ ಬ್ಯಾಲೆಟ್ ಬಾಕ್ಸ್‌ಗಳನ್ನು ಎಣಿಕಾ ಕೊಠಡಿಗೆ ಸುರಕ್ಷಿತವಾಗಿ ಸಾಗಿಸಲಾಗಿದೆ.

ಪ್ರಸ್ತುತ ಮತಪತ್ರಗಳನ್ನು ವಿಂಗಡಿಸಿ ಬಂಡಲ್ ಮಾಡುವ ಕಾರ್ಯ ಭರದಿಂದ ಸಾಗಿದ್ದು, ಇದು ಪೂರ್ಣಗೊಂಡ ಬಳಿಕ ಅಂತಿಮ ಮತ ಎಣಿಕೆ ಅಧಿಕೃತವಾಗಿ ಪ್ರಾರಂಭವಾಗಲಿದೆ. ಲಭ್ಯವಿರುವ ಮಾಹಿತಿಯಂತೆ, ಬೆಳಗ್ಗೆ 11 ಗಂಟೆಯೊಳಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಂಡಲ್ ವಿಂಗಡನೆ ಮುಗಿಯುವ ನಿರೀಕ್ಷೆಯಿದೆ. ಹಾಗೆಯೇ, ಸಂಜೆ 4 ಗಂಟೆ ವೇಳೆಗೆ ಆಗ್ನೇಯ ಪದವೀಧರ ಕ್ಷೇತ್ರದ ಮತಗಳ ಬಂಡಲ್ ವಿಂಗಡನೆ ಪೂರ್ಣಗೊಳ್ಳಲಿದೆ ಎಂದು ಅಂದಾಜಿಸಲಾಗಿದೆ. ಪ್ರಾಶಸ್ತ್ಯದ ಮತದಾನ ಪದ್ಧತಿ ಜಾರಿಯಲ್ಲಿರುವುದರಿಂದ ಮತ ಎಣಿಕೆ ಪ್ರಕ್ರಿಯೆಯು ಸ್ವಲ್ಪ ನಿಧಾನವಾಗಲಿದ್ದು, ಇಂದು ಸಂಜೆಯ ವೇಳೆಗೆ ಎಲ್ಲಾ ನಾಲ್ಕು ಕ್ಷೇತ್ರಗಳ ಅಂತಿಮ ಫಲಿತಾಂಶ ಹೊರಬರುವ ನಿರೀಕ್ಷೆಯಿದೆ.

ಈ ಚುನಾವಣೆಯಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಭಾರಿ ಮತದಾನ ದಾಖಲಾಗಿದೆ.ಅದರಂತೆ, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಶೇ. 81.98, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ. 86.97, ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಶೇ. 75.62 ಹಾಗೂ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಶೇ. 73.58 ರಷ್ಟು ಮತದಾನವಾಗಿದೆ. ಒಟ್ಟು ನಾಲ್ಕು ಕ್ಷೇತ್ರಗಳಿಂದ ಕಣದಲ್ಲಿ ಒಟ್ಟು 43 ಅಭ್ಯರ್ಥಿಗಳು ತಮ್ಮ ಅದೃಷ್ಟವನ್ನು ಪರೀಕ್ಷಿಸಿಕೊಳ್ಳುತ್ತಿದ್ದು, ಇದರಲ್ಲಿ ಕಾಂಗ್ರೆಸ್ ಪಕ್ಷವು 4 ಕ್ಷೇತ್ರಗಳಲ್ಲಿ, ಬಿಜೆಪಿ 3 ಕ್ಷೇತ್ರಗಳಲ್ಲಿ ಹಾಗೂ ಜೆಡಿಎಸ್ 1 ಕ್ಷೇತ್ರದಲ್ಲಿ ನೇರವಾಗಿ ಸ್ಪರ್ಧಿಸಿವೆ.

ಪ್ರಮುಖವಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಉಪ ಸಭಾಪತಿ ಪುಟ್ಟಣ್ಣ ಹಾಗೂ ಜೆಡಿಎಸ್‌ನ ಎ.ಪಿ. ರಂಗನಾಥ್ ನಡುವೆ ನೇರ ಹಾಗೂ ಜಿದ್ದಾಜಿದ್ದಿನ ಹಣಾಹಣಿ ಏರ್ಪಟ್ಟಿದೆ. ಹಾಗೆಯೇ, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶಶಿ ಹುಲಿಕುಂಟೆಮಠ್ ಹಾಗೂ ಬಿಜೆಪಿಯ ಕೆ.ಎಂ. ಸುರೇಶ್ ನಡುವೆ ತೀವ್ರ ಸ್ಪರ್ಧೆರ್ಪಾಡಾಗಿದೆ. ಇನ್ನುಳಿದಂತೆ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶರಣಪ್ಪ ಮಟ್ಟೂರು ಮತ್ತು ಶಶೀಲ್ ಜಿ. ನಮೋಶಿ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಮೋಹನ್ ಲಿಂಬಿಕಾಯಿ ಮತ್ತು ಎಸ್.ವಿ. ಸಂಕನೂರ ಕಣದಲ್ಲಿದ್ದಾರೆ.

ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯುವ ದೃಷ್ಟಿಯಿಂದ ಕೇಂದ್ರದ ಸುತ್ತಲೂ ಪೊಲೀಸ್ ಇಲಾಖೆಯಿಂದ ವ್ಯಾಪಕ ಬಂದೋಬಸ್ತ್ ಹಾಗೂ ಬಿಗಿ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿದ್ದು, ಅಭ್ಯರ್ಥಿಗಳು ಹಾಗೂ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿರುವ ಈ ಚುನಾವಣೆಯ ಫಲಿತಾಂಶಕ್ಕಾಗಿ ಎಲ್ಲರೂ ಎದುರು ನೋಡುತ್ತಿದ್ದಾರೆ.
 

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES