ಸಿಎಂ ಡಿಕೆ ಶಿವಕುಮಾರ್ ಅವರೇ ಸ್ಟಿಂಗ್ ಆಪರೇಷನ್ನ ಬಲಿಪಶು : ಹೆಚ್ಡಿಕೆ ಗಂಭೀರ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಇದರ ಬಲಿಪಶುವಾಗಿರಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸ್ಟಿಂಗ್ ಆಪರೇಷನ್ ವಿಚಾರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಸ್ಟಿಂಗ್ ಆಪರೇಷನ್ನ ಬಲಿಪಶುವಾಗಿರಬಹುದು ಎಂಬ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್ ಕಾರ್ಯಕರ್ತರೊಂದಿಗೆ ಬೆಂಗಳೂರಿನಲ್ಲಿ ಬೃಹತ್ ಪಾದಯಾತ್ರೆ ನಡೆಸಿ, ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ. ಈ ವೇಳೆ ಕಾರ್ಯಕರ್ತರ ಆಕ್ರೋಶ, ಪೊಲೀಸರ ಮನವೊಲಿಕೆ ಹಾಗೂ ಕೆಲಕಾಲ ಹೈಡ್ರಾಮಾ ಕೂಡ ಸಹ ನಡೆದಿವೆ.
ಹೌದು.. ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಸುತ್ತ ಆರೋಪ- ಪ್ರತ್ಯಾರೋಪಗಳ ಅಬ್ಬರ ಜೋರಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ಮುಂದುವರೆಸಿದ್ದಾರೆ. ಇದರ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ಅವರೂ ಈ ಸ್ಟಿಂಗ್ ಆಪರೇಷನ್ನ ಬಲಿಪಶುವಾಗಿರಬಹುದು ಅಂತ ಸ್ಪೋಟಕ ಹೇಳಿ ನೀಡಿದ್ದಾರೆ. ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಪ್ರಮುಖ ರಾಜಕೀಯ ನಾಯಕರನ್ನು ಸ್ಟಿಂಗ್ ಆಪರೇಷನ್ ವಿಡಿಯೋಗಳ ಮೂಲಕ ನಿಯಂತ್ರಣದಲ್ಲಿಡುವ ವಾತಾವರಣ ಸೃಷ್ಟಿಸಲಾಗುತ್ತಿದೆ. ಸ್ಟಿಂಗ್ ವಿಚಾರದಲ್ಲಿ ಸರ್ಕಾರ ಆ ವ್ಯಕ್ತಿಗೆ ಸರಂಡರ್ ಅಂತ ಹೇಳಿದ್ದಾರೆ.
ಇನ್ನು ಸ್ಟಿಂಗ್ ಆಪರೇಷನ್ ವಿಚಾರವನ್ನು ಜೆಡಿಎಸ್ ಗಂಭೀರವಾಗಿ ಪರಿಗಣಿಸಿದ್ದು, ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದೆ. ಸ್ಟಿಂಗ್ ಆಪರೇಷನ್ನ ಪ್ರಮುಖ ಆರೋಪಿಗಳನ್ನು ಬಂಧಿಸಲು ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯವಾದ ಹಿನ್ನೆಲೆ, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಕುಮಾರಸ್ವಾಮಿ ಜೆಡಿಎಸ್ ನಾಯಕರ ಸಭೆ ಕರೆದಿದ್ದರು.
ಸಭೆಯಲ್ಲಿ ಮುಂದಿನ ಹೋರಾಟದ ಕುರಿತು ಚರ್ಚೆ ನಡೆಯುತ್ತಿದ್ದರೆ, ಮತ್ತೊಂದೆಡೆ ಜೆಡಿಎಸ್ ಕಚೇರಿ ಮುಂದೆ ಜಮಾಯಿಸಿದ್ದ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣದ ಪ್ರಮುಖ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.
ಇದಾದ ಬಳಿಕ, ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯವಾಗಿದ್ದರೂ ಆರೋಪಿಗಳ ಬಂಧನವಾಗಿಲ್ಲ ಎಂದು ಆರೋಪಿಸಿ ಕುಮಾರಸ್ವಾಮಿ ಕಾರ್ಯಕರ್ತರೊಂದಿಗೆ ಬೀದಿಗಿಳಿದರು. ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಿ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ತೆರಳಲು ಮುಂದಾದರು. ಪ್ರಮುಖ ರಸ್ತೆಯಲ್ಲಿ ಕಾರ್ಯಕರ್ತರೊಂದಿಗೆ ಸಾಗಿದ ಕುಮಾರಸ್ವಾಮಿ ಪಾದಯಾತ್ರೆಯಿಂದ ಸಂಚಾರಕ್ಕೆ ಅಡಚಣೆಯಾಗುವ ಹಿನ್ನೆಲೆ ಪೊಲೀಸರು ಮನವಿ ಮಾಡಿದರು. ಬಳಿಕ ಕಾರ್ಯಕರ್ತರು ಮತ್ತು ಮುಖಂಡರು ಫ್ರೀಡಂ ಪಾರ್ಕ್ ಗುಂಪು ಚದುರಿಸುವ ಪ್ರಯತ್ನ ಮಾಡಿದ್ರು.. ಈ ವೇಳೆ ಕಾರ್ಯಕರ್ತರನ್ನು ನಿಯಂತ್ರಿಸುವ ವಿಚಾರವಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಂತರ ಫ್ರೀಡಂ ಪಾರ್ಕ್ನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ವಿಜಯದಶಮಿ ಬಳಿಕ ಸರ್ಕಾರದ ವಿರುದ್ಧ ವಿವಿಧ ಹಂತಗಳಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಇನ್ನು ಫ್ರೀಡಂ ಪಾರ್ಕ್ನಿಂದ ಬಳಿಕ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ತೆರಳಿದ ಎಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ಮುಖಂಡರು, ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಅಧಿಕೃತ ದೂರು ಸಲ್ಲಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ವಿಡಿಯೋಗಳ ಹಿಂದೆ ಇರುವವರನ್ನು ಪತ್ತೆಹಚ್ಚಬೇಕು. ಮಹಿಳೆಯ ವಿರುದ್ಧದ ಗಂಭೀರ ಲೈಂಗಿಕ ಆರೋಪಗಳನ್ನು ಮುಚ್ಚಿಹಾಕಲು ವಿಡಿಯೋಗಳನ್ನು ದುರ್ಬಳಕೆ ಮಾಡಲಾಗಿದೆ ಎಂಬ ಆರೋಪಗಳ ಬಗ್ಗೆಯೂ ತನಿಖೆಯಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ವಿಡಿಯೋಗಳನ್ನು ಎಡಿಟ್ ಮಾಡಿ ಪ್ರಭಾವಿ ವ್ಯಕ್ತಿಗಳನ್ನು ಬ್ಲ್ಯಾಕ್ಮೇಲ್ ಮಾಡಿದವರು, ಅಂತಹ ಕೃತ್ಯಗಳಿಗೆ ಬೆಂಬಲ ನೀಡಿದವರು ಹಾಗೂ ಆರೋಪಿಗಳನ್ನು ರಕ್ಷಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. ಅಲ್ಲದೆ, ಪ್ರಕರಣದ ರಾಜಕೀಯ ಆಯಾಮಗಳ ಬಗ್ಗೆಯೂ ಉನ್ನತ ಮಟ್ಟದ ವಿಶೇಷ ತನಿಖಾ ತಂಡದಿಂದ ಸಮಗ್ರ ತನಿಖೆ ನಡೆಸಬೇಕೆಂದು ಮನವಿ ಸಲ್ಲಿಸಲಾಗಿದೆ.
ಒಟ್ಟಿನಲ್ಲಿ, ಸ್ಟಿಂಗ್ ಆಪರೇಷನ್ ವಿವಾದ ಇದೀಗ ಆರೋಪ-ಪ್ರತ್ಯಾರೋಪಗಳ ಹಂತ ದಾಟಿ ಬೀದಿಪೋರಾಟದ ಸ್ವರೂಪ ಪಡೆದುಕೊಳ್ಳುತ್ತಿದೆ. ಆರೋಪಿಗಳ ಬಂಧನಕ್ಕೆ ಜೆಡಿಎಸ್ ಗಡುವು ನೀಡಿದ್ದರೂ ಕ್ರಮವಾಗಿಲ್ಲ ಎಂಬ ಆರೋಪದೊಂದಿಗೆ ಕುಮಾರಸ್ವಾಮಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ವಿಜಯದಶಮಿ ಬಳಿಕ ಹೋರಾಟ ಯಾವ ಸ್ವರೂಪ ಪಡೆದುಕೊಳ್ಳಲಿದೆ..? ಸರ್ಕಾರ ಈ ಆರೋಪಗಳಿಗೆ ಹೇಗೆ ಪ್ರತಿಕ್ರಿಯಿಸಲಿದೆ? ಎಂಬುದು ಕುತೂಹಲ ಮೂಡಿಸಿದೆ.