ಬೆಂಗಳೂರು : ಬಂಗಾಳ ಕೊಲ್ಲಿಯ ವಾಯುಮಂಡಲದ ಬದಲಾವಣೆಗಳ ನಡುವೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.. ಅಕ್ಟೋಬರ್ 18ರವರೆಗೆ ಯಾವ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ..? ಬೆಂಗಳೂರಿನಲ್ಲೂ ವರುಣನ ಆರ್ಭಟ ಹೆಚ್ಚಾಗುತ್ತಾ..? ಮಳೆಯಿಂದ ತಾಪಮಾನದಲ್ಲಿ ಎಷ್ಟು ಬದಲಾವಣೆಯಾಗಬಹುದು..?
ಹೌದು.. ಕರ್ನಾಟಕದಲ್ಲಿ ಮಳೆಯ ನಿರೀಕ್ಷೆಯಲ್ಲಿದ್ದ ಜನರಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 15ರಿಂದ ದಕ್ಷಿಣ ಭಾರತದಲ್ಲಿ ಈಶಾನ್ಯ ಮುಂಗಾರು ಚುರುಕುಗೊಳ್ಳುವ ಸಾಧ್ಯತೆಯಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗಬಹುದು. ಈಶಾನ್ಯ ಮುಂಗಾರು ಸಾಮಾನ್ಯವಾಗಿ ದಕ್ಷಿಣ ಒಳನಾಡಿನ ಕೆಲವು ಭಾಗಗಳು ಸೇರಿದಂತೆ ದಕ್ಷಿಣ ಭಾರತದ ಮಳೆಯ ಮೇಲೆ ಪ್ರಭಾವ ಬೀರುತ್ತದೆ. ಹವಾಮಾನದಲ್ಲಿನ ಬದಲಾವಣೆಯಿಂದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 18ರವರೆಗೆ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯೂ ಇದೆ. ಇನ್ನು ಮೋಡ ಕವಿದ ವಾತಾವರಣ ಮತ್ತು ಮಳೆಯ ಕಾರಣದಿಂದ ಕೆಲವು ಪ್ರದೇಶಗಳಲ್ಲಿ ತಾಪಮಾನ ಇಳಿಯುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಬೆಂಗಳೂರು ದಕ್ಷಿಣ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 16ರಂದು ಬೆಂಗಳೂರು ನಗರ ಮತ್ತು ಗ್ರಾಮಾಂತರದ ಜೊತೆಗೆ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆಯಿದೆ.
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿಯೂ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಅಕ್ಟೋಬರ್ 15ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಅಕ್ಟೋಬರ್ 16ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ಇದೆ. ಅಕ್ಟೋಬರ್ 17ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ನಿರೀಕ್ಷೆಯಿದೆ. ಅಕ್ಟೋಬರ್ 18ರಂದು ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗಬಹುದು. ದಕ್ಷಿಣ ಕನ್ನಡದಲ್ಲಿ ಅನೇಕ ಕಡೆ ಸಾಧಾರಣ ಮಳೆಯ ಸಾಧ್ಯತೆಯಿದೆ. ಇನ್ನು ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ವಿವಿಧ ದಿನಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ಮುನ್ಸೂಚನೆ ಇದೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲೂ ಹಂತ ಹಂತವಾಗಿ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಅಕ್ಟೋಬರ್ 15ರಂದು ಧಾರವಾಡ, ಗದಗ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಅಕ್ಟೋಬರ್ 16ರಂದು ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 17ರಂದು ಈ ಜಿಲ್ಲೆಗಳ ಒಂದೆರಡು ಕಡೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ಮುಂದುವರಿಯಲಿದೆ. ಅಕ್ಟೋಬರ್ 18ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣ ಮತ್ತು ತೀವ್ರತೆ ಬದಲಾಗುವ ಸಾಧ್ಯತೆಯಿದೆ. ಅಕ್ಟೋಬರ್ 15ರಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆಯಿದ್ದರೆ, ಅಕ್ಟೋಬರ್ 16ರಿಂದ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲೂ ಮಳೆ ಚಟುವಟಿಕೆ ವಿಸ್ತರಿಸಬಹುದು. ಅಕ್ಟೋಬರ್ 17 ಮತ್ತು 18ರಂದು ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಈ ಅವಧಿಯಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು.
ಒಟ್ಟಿನಲ್ಲಿ, ಕರ್ನಾಟಕದಲ್ಲಿ ಈಶಾನ್ಯ ಮುಂಗಾರು ಚುರುಕುಗೊಳ್ಳುವ ನಿರೀಕ್ಷೆಯ ನಡುವೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.. ಬೆಂಗಳೂರಿನಿಂದ ಕರಾವಳಿಯವರೆಗೆ, ಮಲೆನಾಡಿನಿಂದ ಉತ್ತರ ಒಳನಾಡಿನವರೆಗೆ ವಿವಿಧ ದಿನಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.. ಅಕ್ಟೋಬರ್ 15ರಿಂದ 18ರವರೆಗೆ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆಯೂ ಇದೆ.. ಮಳೆಯಿಂದ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆಯಿದ್ದರೂ, ಎಲ್ಲೆಡೆ ಒಂದೇ ರೀತಿಯ ವಾತಾವರಣ ಇರಲಿದೆ ಎಂದು ಹೇಳಲಾಗದು.. ಹೀಗಾಗಿ ಹವಾಮಾನ ಇಲಾಖೆಯ ಮುನ್ಸೂಚನೆ ಗಮನಿಸಿ, ಮುನ್ನೆಚ್ಚರಿಕೆ ವಹಿಸುವುದು ಅಗತ್ಯ..