SOCIAL MEDIA

Newsletter

PARTNER SITES
Select Language Select State

ರಾಜ್ಯದ ಕೆಲವೆಡೆ ಮಳೆ : ನಾಳೆಯಿಂದ ಮತ್ತೆ ಚಳೆ ಮುನ್ಸೂಚನೆ

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಉಳಿದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

Written By Yashaswini V
Published: Nov 28, 2026, 09:09 IST | Updated: Nov 28, 2026, 09:10 IST
Join

ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೆ ಬದಲಾವಣೆಯಾಗುವ ಸೂಚನೆ ದೊರೆತಿದ್ದು, ಇಂದು (ನ. 28) ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆದರೆ, ನಾಳೆಯಿಂದ ಅಂದರೆ ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಬಿಡುವು ನೀಡಲಿದ್ದು, ಸಂಪೂರ್ಣ ಒಣ ಹವೆ ಮುಂದುವರಿಯಲಿದೆ. ಇದರೊಂದಿಗೆ ರಾಜ್ಯದಲ್ಲಿ ಮತ್ತೆ ಚಳಿಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ.

ಕಳೆದ 24 ಗಂಟೆಗಳಲ್ಲಿ ಕರಾವಳಿಯ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಇಂದು ಸಹ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು  ಒಣ ಹವೆ ಇರಲಿದೆ. ನಾಳೆಯಿಂದ (ನ.29) ಡಿಸೆಂಬರ್ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಇಡೀ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ ಹಾಗೂ ಒಣ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ಇನ್ನು ದಕ್ಷಿಣ ಒಳನಾಡಿನ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಇಂದು ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಇನ್ನುಳಿದಂತೆ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಇಂದು ಮುಖ್ಯವಾಗಿ ಒಣ ಹವೆ ಇರಲಿದೆ. ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಮುಂಜಾನೆ ಮತ್ತು ರಾತ್ರಿ ವೇಳೆ ಚಳಿ ಹೆಚ್ಚಾಗಲಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಇಂದು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಮುಂದಿನ ಮೂರು ದಿನಗಳ ಕಾಲ (ನ.29 ರಿಂದ ಡಿ.1) ಸಹ ಈ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವಾಮಾನವೇ ಮುಂದುವರಿಯಲಿದ್ದು, ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ.

ಇಂದು ಶುಕ್ರವಾರ ಸಂಜೆ 5.30ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಕರಾವಳಿಯ ಕೆಲವೆಡೆ ಹಾಗೂ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅತಿ ಹೆಚ್ಚು ಅಂದರೆ 5 ಸೆಂ.ಮೀ. ಮಳೆಯಾಗಿದೆ. ಉಡುಪಿ ಜಿಲ್ಲೆಯ ಸಿದ್ದಾಪುರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ ತಲಾ 3 ಸೆಂ.ಮೀ. ಮಳೆ ದಾಖಲಾಗಿದೆ.

ಇನ್ನು ತಾಪಮಾನದ ವಿಚಾರಕ್ಕೆ ಬಂದರೆ, ರಾಜ್ಯದ ಬಯಲು ಪ್ರದೇಶಗಳ ಪೈಕಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅತಿ ಕಡಿಮೆ ಅಂದರೆ 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಒಟ್ಟಾರೆಯಾಗಿ, ಇಂದಿನ ಹಗುರ ಮಳೆಯ ನಂತರ ರಾಜ್ಯದಲ್ಲಿ ಚಳಿಗಾಲದ ವಾತಾವರಣ ಮತ್ತಷ್ಟು ತೀವ್ರಗೊಳ್ಳಲಿದ್ದು, ಸಾರ್ವಜನಿಕರು ಬೆಳಗಿನ ಜಾವದ ಚಳಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ZEENEWS TRENDING STORIES