SOCIAL MEDIA

Newsletter

PARTNER SITES
Select Language Select State

ಅಧಿವೇಶನಕ್ಕೂ ಮುನ್ನವೇ ಸಚಿವ ಸ್ಥಾನ ಫಿಕ್ಸ್! ಮಹಿಳಾ ಕೋಟಾದಡಿ ಸಂಪುಟಕ್ಕೆ ಹೊಸ ಎಂಟ್ರಿ?

ಅಧಿವೇಶನಕ್ಕೂ ಮುನ್ನವೇ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದ್ದು, ಇದೇ ತಿಂಗಳ ಮೂರನೇ ವಾರದಲ್ಲಿ ಹೊಸ ಸಚಿವರ ಸೇರ್ಪಡೆಯಾಗುವ ಸಾಧ್ಯತೆ ಇದೆ. ಮಹಿಳಾ ಪ್ರಾತಿನಿಧ್ಯದಡಿ ಒಬ್ಬರಿಗೆ ಹಾಗೂ ಕುರುಬ ಸಮುದಾಯದ ಕೋಟಾದಡಿ ಬ್ಯಾಡಗಿ ಶಿವಣ್ಣ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚೆ ನಡೆದಿದೆ. ಈ ವಿಚಾರವಾಗಿ ಹೈಕಮಾಂಡ್ ಒಪ್ಪಿಗೆಯೂ ದೊರೆತಿದೆ ಎನ್ನಲಾಗಿದೆ. ಅಂತಿಮ ನಿರ್ಧಾರ ಅಧಿಕೃತ ಘೋಷಣೆಯ ಬಳಿಕ ಸ್ಪಷ್ಟವಾಗಲಿದೆ.

Written By Puttaraj K Alur
Published: Nov 07, 2026, 08:32 IST | Updated: Nov 07, 2026, 08:51 IST
Image Credit: Karnataka Cabinet Expansion
Join

Karnataka Cabinet Expansion: ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ವಿಚಾರ ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆಗೆ ಬಂದಿದೆ. ಮುಂಬರುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಗಳಿದ್ದು, ಇದೇ ತಿಂಗಳ ಮೂರನೇ ವಾರದಲ್ಲಿ ಹೊಸ ಸಚಿವರ ಸೇರ್ಪಡೆಗೆ ಸಿದ್ಧತೆ ನಡೆಯುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮಾತುಗಳೂ ಸಂಪುಟ ವಿಸ್ತರಣೆಯ ಚರ್ಚೆಗೆ ಮತ್ತಷ್ಟು ಮಹತ್ವ ನೀಡಿವೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಡಿ.ಕೆ.ಶಿವಕುಮಾರ್ ಅವರೇ ಪ್ರಸ್ತಾಪಿಸಿರುವುದು ಈ ಬೆಳವಣಿಗೆಯ ಪ್ರಮುಖ ಅಂಶವಾಗಿದೆ. ಅಧಿವೇಶನ ಆರಂಭಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡುವ ಉದ್ದೇಶವಿದ್ದು, ಈ ನಿಟ್ಟಿನಲ್ಲಿ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಸಂಪುಟಕ್ಕೆ ಹೊಸ ಮುಖಗಳನ್ನ ಸೇರ್ಪಡೆ ಮಾಡಿಕೊಳ್ಳುವ ವಿಚಾರದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯರ ನಡುವೆ ಸಮನ್ವಯತೆ ಮೂಡಿರುವುದರಿಂದ ವಿಸ್ತರಣೆಗೆ ಹಾದಿ ಸುಗಮವಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ

ಸಂಪುಟ ವಿಸ್ತರಣೆಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಅವಕಾಶ ಕಲ್ಪಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಮಹಿಳಾ ಶಾಸಕರೊಬ್ಬರನ್ನ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ತೀರ್ಮಾನವಾಗಿದ್ದು, ಅನ್ನಪೂರ್ಣ ತುಕಾರಾಂಗೆ ಸಚಿವ ಸ್ಥಾನ ಬಹುತೇಕ ಖಚಿತವೆಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಮಹಿಳಾ ಪ್ರಾತಿನಿಧ್ಯವನ್ನ ಸಂಪುಟದಲ್ಲಿ ಹೆಚ್ಚಿಸುವ ಉದ್ದೇಶದಿಂದ ಅನ್ನಪೂರ್ಣ ತುಕಾರಾಂರನ್ನ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಮಹಿಳಾ ಕೋಟಾದಡಿ ಹೊಸಬರಿಗೆ ಅವಕಾಶ ನೀಡುವ ನಿರ್ಧಾರವನ್ನ ಜಾರಿಗೊಳಿಸಲು ನಾಯಕತ್ವ ಮುಂದಾಗಿದೆ ಎಂಬ ಮಾಹಿತಿ ಇದೆ.

ಕುರುಬ ಸಮುದಾಯಕ್ಕೂ ಸಚಿವ ಸ್ಥಾನ?

ಇನ್ನು ಸಂಪುಟ ವಿಸ್ತರಣೆಯ ಮತ್ತೊಂದು ಸ್ಥಾನವನ್ನು ಕುರುಬ ಸಮುದಾಯಕ್ಕೆ ನೀಡುವ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ಶಾಸಕ ಶಿವಣ್ಣರಿಗೆ ಸಚಿವ ಸ್ಥಾನ ನೀಡಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಈ ಮೂಲಕ ಮಹಿಳಾ ಪ್ರಾತಿನಿಧ್ಯದ ಜೊತೆಗೆ ಸಮುದಾಯದ ಪ್ರಾತಿನಿಧ್ಯಕ್ಕೂ ಆದ್ಯತೆ ನೀಡುವ ಲೆಕ್ಕಾಚಾರ ನಡೆದಿದೆ ಎನ್ನಲಾಗುತ್ತಿದೆ. ಅನ್ನಪೂರ್ಣ ತುಕಾರಾಂ ಮತ್ತು ಬ್ಯಾಡಗಿ ಶಿವಣ್ಣರ ಹೆಸರುಗಳು ಸಂಪುಟ ಸೇರ್ಪಡೆಯ ಸಂಭಾವ್ಯ ಪಟ್ಟಿಯಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿವೆ. ಈ ಇಬ್ಬರಿಗೂ ಅವಕಾಶ ಕಲ್ಪಿಸುವ ಮೂಲಕ ಸಂಪುಟ ವಿಸ್ತರಣೆಯಲ್ಲಿ ಮಹಿಳಾ ಹಾಗೂ ಕುರುಬ ಸಮುದಾಯದ ಪ್ರಾತಿನಿಧ್ಯವನ್ನ ಸರಿದೂಗಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಚರ್ಚೆ ನಡೆದಿದೆ. 

ಹೈಕಮಾಂಡ್ ಮಟ್ಟದಲ್ಲೂ ಚರ್ಚೆ

ಸಚಿವ ಸಂಪುಟ ವಿಸ್ತರಣೆಯ ವಿಚಾರವಾಗಿ ಸಿಎಂ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ಹೈಕಮಾಂಡ್ ನಾಯಕರನ್ನ ಭೇಟಿಯಾದ ಸಂದರ್ಭದಲ್ಲಿಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸಂಪುಟಕ್ಕೆ ಹೊಸ ಸಚಿವರನ್ನ ಸೇರ್ಪಡೆ ಮಾಡಿಕೊಳ್ಳುವ ವಿಚಾರ ಪ್ರಸ್ತಾಪವಾಗಿತ್ತು ಎಂಬ ಮಾಹಿತಿ ಇದೆ. ರಾಜ್ಯ ನಾಯಕತ್ವದ ಅಭಿಪ್ರಾಯಗಳ ಜೊತೆಗೆ ಹೈಕಮಾಂಡ್‌ನ ಒಪ್ಪಿಗೆಯೂ ಅಗತ್ಯವಾಗಿರುವುದರಿಂದ ದೆಹಲಿ ಮಟ್ಟದ ಚರ್ಚೆಗಳಿಗೆ ಮಹತ್ವ ನೀಡಲಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಈ ವಿಚಾರದಲ್ಲಿ ಸಮನ್ವಯತೆ ಮೂಡಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಕೂಡ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಹಿಂದೆ ಚರ್ಚೆಯ ಹಂತದಲ್ಲಿದ್ದ ಸಂಪುಟ ವಿಸ್ತರಣೆಯ ಪ್ರಕ್ರಿಯೆ ಇದೀಗ ಮುಂದಿನ ಹಂತಕ್ಕೆ ತಲುಪಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೂರನೇ ವಾರದಲ್ಲಿ ವಿಸ್ತರಣೆ ಸಾಧ್ಯತೆ

ಇದೇ ತಿಂಗಳ ಮೂರನೇ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ವಿಧಾನಮಂಡಲ ಅಧಿವೇಶನಕ್ಕೂ ಮೊದಲು ಹೊಸ ಸಚಿವರನ್ನ ಸಂಪುಟಕ್ಕೆ ಸೇರಿಸಿಕೊಳ್ಳುವ ಉದ್ದೇಶವಿದ್ದು, ಈ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎನ್ನಲಾಗಿದೆ.

ಒಟ್ನಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಮಹಿಳಾ ಪ್ರಾತಿನಿಧ್ಯದಡಿ ಅನ್ನಪೂರ್ಣ ತುಕಾರಾಂ ಹಾಗೂ ಕುರುಬ ಸಮುದಾಯದ ಕೋಟಾದಡಿ ಬ್ಯಾಡಗಿ ಶಿವಣ್ಣರಿಗೆ ಅವಕಾಶ ಸಿಗುವ ಸಾಧ್ಯತೆಗಳ ಕುರಿತು ಚರ್ಚೆ ಜೋರಾಗಿದೆ. ಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರಸ್ತಾಪ, ಸಿದ್ದರಾಮಯ್ಯ ಅವರೊಂದಿಗಿನ ಸಮನ್ವಯತೆ ಮತ್ತು ಹೈಕಮಾಂಡ್‌ನ ಒಪ್ಪಿಗೆ ಹಿನ್ನೆಲೆಯಲ್ಲಿ ಇದೇ ತಿಂಗಳ ಮೂರನೇ ವಾರದ ವಿಸ್ತರಣೆಯತ್ತ ರಾಜಕೀಯ ವಲಯದ ಗಮನ ನೆಟ್ಟಿದೆ. ಅಂತಿಮವಾಗಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಅಧಿಕೃತ ನಿರ್ಧಾರದ ಬಳಿಕ ಸ್ಪಷ್ಟವಾಗಲಿದೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ZEENEWS TRENDING STORIES