ಸುಪ್ರೀಂ ಅನುಮತಿ ನೀಡಿದ್ರು ರಾಪಿಡೋ, ಒಲಾ, ಉಬರ್ ಟ್ಯಾಕ್ಸಿ ಸೇವೆಗೆ ಕಠಿಣ ರೂಲ್ಸ್..!
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಿದ್ದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹಾಗೂ ಆಟೋ-ಟ್ಯಾಕ್ಸಿ ಸಂಘಟನೆಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಆಟೋ ಚಾಲಕರ ಜೀವನೋಪಾಯದ ಬಗ್ಗೆ ಸರ್ಕಾರ ವ್ಯಕ್ತಪಡಿಸಿದ್ದ ಆತಂಕವನ್ನು ತಳ್ಳಿಹಾಕಿರುವ ನ್ಯಾಯಪೀಠ, ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಈ ತೀರ್ಪಿನಿಂದ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಓಲಾ, ಉಬರ್, ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳು ಯಾವುದೇ ಅಡ್ಡಿಯಿಲ್ಲದೆ ಮುಂದುವರಿಯಲಿವೆ. ಒಲಾ, ಉಬರ್ ಟ್ಯಾಕ್ಸಿ ಸೇವೆಗೆ ಸರ್ವೋಚ್ಚ ನ್ಯಾಯಾಲಯ ಅನುಮತಿ ನೀಡಿದ ಬೆನ್ನಲ್ಲೇ ಇದಕ್ಕಾಗಿ ಕಠಿಣ ನಿಯಮ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ಸೇವೆಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕಳೆದ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ಕಾನೂನು ಸಮರಕ್ಕೆ ನಿನ್ನೆ (ನ. 20) ತೆರೆ ಬಿದ್ದಿದೆ. ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಸಾರಾಸಗಟಾಗಿ ವಜಾಗೊಳಿಸಿದೆ. ಈ ಮೂಲಕ ಬೆಂಗಳೂರು ಸೇರಿದಂತೆ ರಾಜ್ಯದ ಲಕ್ಷಾಂತರ ಪ್ರಯಾಣಿಕರಿಗೆ ಮತ್ತು ಬೈಕ್ ಟ್ಯಾಕ್ಸಿ ಸವಾರರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಇದೀಗ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಗೆ ಸುಪ್ರೀಂ ಅನುಮತಿ ಬೆನ್ನಲ್ಲೇ, ರ್ಯಾಪಿಡೋ, ಒಲಾ, ಊಬರ್ ಟ್ಯಾಕ್ಸಿ ಸೇವೆಗೆ ಕಠಿಣ ರೂಲ್ಸ್ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಹೌದು, ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ಸೇವೆಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ದ್ವಿ ಸದಸ್ಯ ಪೀಠವು, ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ಸೇವೆಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮುಂದುವರಿಕೆಗೆ ದಾರಿ ಮಾಡಿಕೊಟ್ಟಿದ್ದ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೇ, ಬೈಕ್ ಟ್ಯಾಕ್ಸಿ ಸೇವೆಗೆ ಕಠಿಣ ನಿಯಮಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಭೈರತಿ ಸುರೇಶ್, ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ:
ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿರುವುದರಿಂದ, ಇನ್ನು ಮುಂದೆ ರಾಜ್ಯದಲ್ಲಿ ಓಲಾ, ಉಬರ್, ರಾಪಿಡೋ ಸೇರಿದಂತೆ ಬೈಕ್ ಟ್ಯಾಕ್ಸಿ ಸೇವೆಗಳು ಯಾವುದೇ ಕಾನೂನು ಅಡ್ಡಿಯಿಲ್ಲದೆ ಯಥಾಸ್ಥಿತಿಯಲ್ಲಿ ಕಾರ್ಯನಿರ್ವಹಿಸಲಿವೆ. ಆದಾಗ್ಯೂ, ಬೈಕ್ ಟ್ಯಾಕ್ಸಿ ಗೆ ಕಠಿಣ ನಿಯಮ ಹಾಗೂ ಸೂಕ್ತ ಮಾರ್ಗಸೂಚಿ ಸಿದ್ಧಪಡಿಸುವಂತೆ ಸಾರಿಗೆ ಸಾರಿಗೆ ಇಲಾಖೆ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಬೈರತಿ ಸುರೇಶ್ ಸೂಚನೆ ನೀಡಿದ್ದಾರೆ. ಈ ನಿಯಮದಲ್ಲಿ ಮಹಿಳೆಯರ ಆದ್ಯತೆಯ ಜೊತೆಗೆ ಪ್ರಯಾಣಿಕರ ಸುರಕ್ಷೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಾರಿಗೆ ಸಚಿವರು ನಿರ್ದೇಶಿಸಿದ್ದಾರೆ ಎನ್ನಲಾಗಿದೆ.
ವಾಹನ ವಿಮೆ, ಜಿಪಿಎಸ್ ಅಳವಡಿಕೆ ಸೇರಿ ಹಲವು ರೂಲ್ಸ್ ಜಾರಿಗೊಳಿಸಲು ಮುಂದಾಗಿರುವ ಸಾರಿಗೆ ಇಲಾಖೆ, ನಿಯಮ ಪಾಲಿಸಿದರೆ ಅಷ್ಟೇ ವಾಹನ ರೋಡಿಗೆ ಇಳಿಸಲು ಅನುಮತಿ ನೀಡಲು ಕ್ರಮ ಕೈಗೊಳ್ಳಲಿದೆ. ಈ ಎಲ್ಲ ನಿಯಮ ಜಾರಿ ಮಾಡುತ್ತಲೇ ಸುಪ್ರೀಂ ತೀರ್ಪು ಪಾಲನೆ ಮಾಡಲು ಚಿಂತಿಸಲಾಗಿದೆ. ಹೀಗಾಗಿ ಸುಪ್ರೀಂ ಅಸ್ತು ಅಂದರು ಬೈಕ್ ಟ್ಯಾಕ್ಸಿಗಳನ್ನು ರೋಡಿಗಿಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣದ ಹಿನ್ನಲೆ:
ಗಮನಾರ್ಹವಾಗಿ, ರಾಜ್ಯ ಸರ್ಕಾರವು ನಿಯಂತ್ರಕ ನೀತಿಯನ್ನು ರೂಪಿಸುವವರೆಗೆ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಈ ಹಿಂದೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅಗ್ರಿಗೇಟರ್ ಸಂಸ್ಥೆಗಳಾದ ಓಲಾ, ಉಬರ್ ಮತ್ತು ರಾಪಿಡೋ ಮಾಲೀಕರು ಹಾಗೂ ಬೈಕ್ ಟ್ಯಾಕ್ಸಿ ಸಂಘ ಹೈಕೋರ್ಟ್ ಮೆಟ್ಟಿಲೇರಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಅಂದಿನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಜನವರಿ 23, 2026ರಂದು ಮಹತ್ವದ ತೀರ್ಪು ನೀಡಿತ್ತು.
ಸರ್ಕಾರದ ನಿರ್ಬಂಧ ಆದೇಶವನ್ನು ರದ್ದುಗೊಳಿಸಿದ್ದ ಹೈಕೋರ್ಟ್, ನಿಯಂತ್ರಕ ಅವಶ್ಯಕತೆಗಳಿಗೆ ಒಳಪಟ್ಟು ಬೈಕ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಬಹುದು ಮತ್ತು ಕಾಂಟ್ರಾಕ್ಟ್ ಕ್ಯಾರೇಜ್‌ಗಳಾಗಿ ನಿರ್ವಹಿಸಬಹುದು ಎಂದು ಸ್ಪಷ್ಟಪಡಿಸಿತ್ತು.
ಹೈಕೋರ್ಟ್ ತೀರ್ಪಿನ ವಿರುದ್ಧ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಬೈಕ್ ಟ್ಯಾಕ್ಸಿ ಬಳಸುವ ಪ್ರಯಾಣಿಕರ ಸುರಕ್ಷತೆ, ವಿಮಾ ರಕ್ಷಣೆ ಹಾಗೂ ಸಮರ್ಪಕ ಸುರಕ್ಷತಾ ಕ್ರಮಗಳ ಕೊರತೆಯ ಬಗ್ಗೆ ಸರ್ಕಾರ ಆತಂಕ ವ್ಯಕ್ತಪಡಿಸಿತ್ತು. ಮತ್ತೊಂದೆಡೆ, ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳು ಸಹ ಪ್ರತ್ಯೇಕ ಅರ್ಜಿ ಸಲ್ಲಿಸಿ, ಸಮಾನ ನಿಯಮಗಳಿಲ್ಲದೆ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡುವುದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರ ಜೀವನೋಪಾಯಕ್ಕೆ ಭಾರಿ ಹೊಡೆತ ಬೀಳುತ್ತಿದೆ. ಎಂದು ವಾದಿಸಿದ್ದವು. ಆದರೆ, ಈ ಎಲ್ಲಾ ವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ.
ಒಟ್ಟಿನಲ್ಲಿ, ಬೆಂಗಳೂರಿನ ಟ್ರಾಫಿಕ್ ನಡುವೆ ಕಡಿಮೆ ದರದಲ್ಲಿ ವೇಗವಾಗಿ ಪ್ರಯಾಣಿಸಲು ಬೈಕ್ ಟ್ಯಾಕ್ಸಿಗಳನ್ನೇ ನಂಬಿಕೊಂಡಿದ್ದ ಸಾವಿರಾರು ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ದೈನಂದಿನ ಪ್ರಯಾಣಿಕರಿಗೆ ಸುಪ್ರೀಂ ಕೋರ್ಟ್ ತೀರ್ಪು ದೊಡ್ಡ ನೆಮ್ಮದಿ ತಂದಿದೆ.