ಕರ್ನಾಟಕದಲ್ಲಿ ಅ.29ರವರೆಗೂ ಮಳೆ ಅಬ್ಬರ! ಬೆಂಗಳೂರು ಸೇರಿ ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಅಕ್ಟೋಬರ್ 29ರವರೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಅಕ್ಟೋಬರ್ 27ರಿಂದ 29ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಾತ್ರ ಮಳೆಯ ನಿರೀಕ್ಷೆಯಿದೆ.
Karnataka Rain Alert: ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಅಕ್ಟೋಬರ್ 29ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿಯೂ ವಿವಿಧ ಪ್ರದೇಶಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಅಕ್ಟೋಬರ್ 24ರಿಂದ 26ರವರೆಗೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 27, 28 ಮತ್ತು 29ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲವೂ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಕ್ಟೋಬರ್ 24 ಮತ್ತು 25ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 26ರಂದು ಕೂಡ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಾದ ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಹಾಸನ, ಕೊಡಗು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ವಿವಿಧ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 24ರಂದು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
ಅಕ್ಟೋಬರ್ 24ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ತಿಳಿಸಿದೆ. ಇದೇ ವೇಳೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನ ಇರುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನಲ್ಲಿ ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ವಿಜಯನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಅಕ್ಟೋಬರ್ 25ರಂದು ಹಲವು ಜಿಲ್ಲೆಗಳಲ್ಲಿ ಮಳೆ
ಅಕ್ಟೋಬರ್ 25ರಂದು ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಹಾಸನ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 26ರಂದು ಮಳೆ ಮುಂದುವರಿಕೆ
ಅಕ್ಟೋಬರ್ 26ರಂದು ಕೂಡ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಅಕ್ಟೋಬರ್ 25ರಂದು ಮಳೆಯ ಮುನ್ಸೂಚನೆ ನೀಡಲಾಗಿರುವ ಉತ್ತರ ಒಳನಾಡಿನ ಜಿಲ್ಲೆಗಳ ಜೊತೆಗೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 27ರಿಂದ 29ರವರೆಗೆ ಹೇಗಿರಲಿದೆ ಮಳೆ?
ಅಕ್ಟೋಬರ್ 27, 28 ಮತ್ತು 29ರಂದು ಕರಾವಳಿ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ ಎಂದು ಮುನ್ಸೂಚನೆ ತಿಳಿಸಿದೆ. ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿಯೂ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಒಟ್ನಲ್ಲಿ ಕರ್ನಾಟಕದಲ್ಲಿ ಹಿಂಗಾರು ಮಳೆ ಅಕ್ಟೋಬರ್ 29ರವರೆಗೂ ಮುಂದುವರಿಯುವ ಮುನ್ಸೂಚನೆ ಇದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ವಾತಾವರಣ ಇರಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಪ್ರದೇಶವಾರು ಮಳೆಯ ಸಾಧ್ಯತೆಯನ್ನ ಹವಾಮಾನ ಇಲಾಖೆ ತಿಳಿಸಿದೆ.