SOCIAL MEDIA

Newsletter

PARTNER SITES
Select Language Select State

ಜನರೇ ಅಲರ್ಟ್‌ ಆಗಿರಿ..! ನಾಳೆ ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ತೀವ್ರ ಮುಂಗಾರು ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಬೆನ್ನಲ್ಲೇ, ಕಳೆದ ಕೆಲವು ದಿನಗಳಿಂದ ಧರೆಗಿಳಿಯುತ್ತಿರುವ ವರುಣ ಧರೆಯನ್ನು ತಂಪಾಗಿಸುತ್ತಿದ್ದಾನೆ. ಇದರ ನಡುವೆಯೇ ಹವಾಮಾನ ಇಲಾಖೆಯು ಅಕ್ಟೋಬರ್ 9ರಂದು ಬೆಂಗಳೂರು ನಗರ ಸೇರಿದಂತೆ ಒಟ್ಟು 13 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಿದೆ.. ಹೆಚ್ಚಿನ ವಿವರಗಳು ಇಲ್ಲಿವೆ..

Reported By Krishna NK Written By Krishna NK
Published: Oct 08, 2026, 07:10 PM IST | Updated: Oct 08, 2026, 07:16 PM IST
Image Credit: rain alerts
Join

Karnataka Rains : ರಾಜ್ಯದಲ್ಲಿ ತೀವ್ರ ಮುಂಗಾರು ಮಳೆಯ ಅಭಾವದಿಂದಾಗಿ ಬಹುತೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿರುವ ಬೆನ್ನಲ್ಲೇ, ಕಳೆದ ಕೆಲವು ದಿನಗಳಿಂದ ವಿವಿಧ ಭಾಗಗಳಲ್ಲಿ ಮಳೆ ಮತ್ತೆ ಚೇತರಿಸಿಕೊಂಡಿದೆ. ಮುಂಗಾರು ಕೊರತೆಯಿಂದ ಕಂಗಾಲಾಗಿದ್ದ ಜನರಿಗೆ ಹಾಗೂ ರೈತರಿಗೆ ಈ ಮಳೆ ಸ್ವಲ್ಪಮಟ್ಟಿನ ಸಮಾಧಾನ ತಂದಿದೆ.

ಇದರ ಬೆನ್ನಲ್ಲೇ, ಅಕ್ಟೋಬರ್ 9ರಂದು ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ನೆಚ್ಚರಿಕೆ ನೀಡಿದ್ದು, ಬೆಂಗಳೂರು ನಗರವೂ ಸೇರಿದಂತೆ ಒಟ್ಟು 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ
ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಸುಮಾರು 64 ಮಿಲಿಮೀಟರ್‌ನಿಂದ 115 ಮಿಲಿಮೀಟರ್‌ವರೆಗೆ ಸಾಧಾರಣದಿಂದ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಆರ್ಭಟದ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ
ರಾಜ್ಯದ ಕರಾವಳಿ ಭಾಗದಲ್ಲಿ ಮಿಶ್ರ ವಾತಾವರಣ ಕಂಡುಬರಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದ್ದರೆ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ. ಇನ್ನು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿಯೂ ಮಳೆಯ ಅಭಾವ ಮುಂದುವರಿಯಲಿದ್ದು, ಒಣಹವೆ ಇರಲಿದೆ ಎಂದು ತಿಳಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಒಣ ಹವೆ ವಾತಾವರಣವೇ ಇರಲಿದೆ ಎಂದು ವರದಿಯಾಗಿದೆ. ಬರಗಾಲದ ಭೀತಿಯಲ್ಲಿದ್ದ ದಕ್ಷಿಣ ಒಳನಾಡಿನ ಜಿಲ್ಲೆಗಳ ಜನರಿಗೆ ಈ ವರುಣನ ಕೃಪೆ ಸಮಾಧಾನ ತಂದಿದ್ದರೂ, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಮುಖ್ಯವಾಗಿದೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES