ಚಳಿಗೆ ನಡುಗಿದ ಕರುನಾಡು; ರಾಜ್ಯದಲ್ಲೇ ಕನಿಷ್ಠ ತಾಪಮಾನ 8 ಡಿಗ್ರಿ ದಾಖಲು
Karnataka Temperature Today: ಕರ್ನಾಟಕದಲ್ಲಿ ಚಳಿಯ ಅಬ್ಬರ ಹೆಚ್ಚಾಗುತ್ತಿದೆ. ರಾಜ್ಯದ ಬಯಲು ಪ್ರದೇಶಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳಗಿನ ಜಾವ ಜನರು ತೀವ್ರ ಚಳಿಯಿಂದ ನಡುಗುವಂತಾಗಿದೆ. ಅದರಲ್ಲೂ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ ಬರೋಬ್ಬರಿ 8 ಡಿಗ್ರಿ ಸೆಲ್ಸಿಯಸ್ ಗೆ ಕುಸಿದಿದ್ದು, ರಾಜ್ಯದ ಬಯಲು ಪ್ರದೇಶಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ಒಂದೆಡೆ ಚಳಿಯ ಅಬ್ಬರ ಹೆಚ್ಚಾಗುತ್ತಿದ್ದರೆ, ಮತ್ತೊಂದೆಡೆ ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಿನ ಜಾವ ಹಾಗೂ ರಾತ್ರಿ ವೇಳೆಯಲ್ಲಿ ಚಳಿಯ ತೀವ್ರತೆ ಹೆಚ್ಚಾಗಿ ಅನುಭವಕ್ಕೆ ಬರುತ್ತಿದೆ. ಪರಿಣಾಮವಾಗಿ ಮಕ್ಕಳು, ವೃದ್ಧರು ಸೇರಿದಂತೆ ಸಾರ್ವಜನಿಕರು ಬೆಚ್ಚನೆಯ ಉಡುಪುಗಳನ್ನು ಧರಿಸಿ ಹೊರಬರುವಂತಾಗಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಶೀತಗಾಳಿ ಮತ್ತು ಕಡಿಮೆ ತಾಪಮಾನ ಜನರ ದೈನಂದಿನ ಚಟುವಟಿಕೆಗಳ ಮೇಲೂ ಪರಿಣಾಮ ಬೀರುತ್ತಿದೆ. ಸದ್ಯ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಕಂಡುಬರುವುದಿಲ್ಲ. ಆದರೆ ಆನಂತರ ರಾಜ್ಯದಾದ್ಯಂತ ಕನಿಷ್ಠ ತಾಪಮಾನ ಮತ್ತಷ್ಟು ಕುಸಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸದ್ಯ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಇದೇ ವಾತಾವರಣ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಣಹವೆ ಇರಲಿದೆ.
ನವೆಂಬರ್ 23 ರಿಂದ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ
ಚಳಿಯ ನಡುವೆಯೇ ರಾಜ್ಯದ ಹವಾಮಾನದಲ್ಲಿ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದೆ. ನವೆಂಬರ್ 23ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ತುಮಕೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು.
ಇನ್ನು ನವೆಂಬರ್ 24ರಿಂದ 27ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಿಂಚಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಮುಂದಿನ ಕೆಲವು ದಿನಗಳು ಕರ್ನಾಟಕದ ಹವಾಮಾನದಲ್ಲಿ ಏರಿಳಿತ ಕಂಡುಬರುವ ಸಾಧ್ಯತೆಯಿದೆ. ಬೆಳಗಿನ ಚಳಿ, ಒಣಹವೆ ಹಾಗೂ ಸಂಜೆ ವೇಳೆಯ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹವಾಮಾನ ಬದಲಾವಣೆಗಳ ಬಗ್ಗೆ ಗಮನಹರಿಸುವುದು ಸೂಕ್ತ.