ಮೈ ಕೊರೆವ ಚಳಿ ನಡುವೆ ಮಳೆ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆವ ಚಳಿಯ ನಡುವೆ ಮಳೆಯ ಮುನ್ಸೂಚನೆ ನೀಡಲಾಗಿದೆ.. ದಕ್ಷಿಣ ಒಳನಾಡಿನ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆವ ಚಳಿಯ ನಡುವೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ದಕ್ಷಿಣ ಒಳನಾಡಿನ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಈಗಾಗಲೇ ಚಳಿಯ ವಾತಾವರಣ ಜನರನ್ನು ಕಾಡುತ್ತಿದೆ. ಇದರ ನಡುವೆ ವರುಣನ ಆಗಮನವಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ ಹಳೆ ಮೈಸೂರು ಭಾಗದ ಹಲವು ಜಿಲ್ಲೆಗಳಲ್ಲಿ ನವೆಂಬರ್ 24 ಮತ್ತು 25ರಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಎಲ್ಲೆಲ್ಲಿ ಮಳೆಯಾಗಲಿದೆ?
ನವೆಂಬರ್ 24ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗಬಹುದು. ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲೂ ಮಳೆಯ ಮುನ್ಸೂಚನೆ ಇದೆ.ಇನ್ನು ನವೆಂಬರ್ 25ರಂದು ಚಿಕ್ಕಮಗಳೂರು, ಮಂಡ್ಯ, ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಹಗುರ ಮಳೆಯಾಗಬಹುದು. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಒಣ ಹವಾಮಾನ ಮುಂದುವರಿಯಲಿದೆ.
ಉತ್ತರ ಕರ್ನಾಟಕದಲ್ಲಿ ಒಣಹವೆ!
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಹುತೇಕ ಒಣಹವೆಯ ವಾತಾವರಣ ಇರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಚಳಿಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.
ಬೆಂಗಳೂರಿನ ಹವಾಮಾನ ಹೇಗಿರಲಿದೆ?
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸದ್ಯ ಮೋಡ ಕವಿದ ವಾತಾವರಣವಿದ್ದು, ಸುಮಾರು 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇಂದು ಗರಿಷ್ಠ 27 ಡಿಗ್ರಿ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳಲ್ಲಿ ತುಂತುರು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಬೆಳಗಾವಿ ಭಾಗದಲ್ಲಿ ಕನಿಷ್ಠ ತಾಪಮಾನ ಸುಮಾರು 11.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಮುಂದಿನ ಐದು ದಿನಗಳವರೆಗೆ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಟ್ಟಿನಲ್ಲಿ ರಾಜ್ಯದಲ್ಲಿ ಒಂದು ಕಡೆ ಮೈಕೊರೆವ ಚಳಿ, ಮತ್ತೊಂದೆಡೆ ಮಳೆಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ. ಹೀಗಾಗಿ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಉತ್ತಮ.