ಕಸ್ತೂರಿ ರಂಗನ್ ವರದಿ... ರೈತರ ಹಿತಕ್ಕೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಸರ್ಕಾರದ ಒತ್ತಡಕ್ಕೆ ನಾವು ಮಣಿಯುವುದಿಲ್ಲ. ಮಲೆನಾಡಿನ ಜನರ ಹಿತವೇ ನಮ್ಮ ಆದ್ಯತೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ, ರೈತರು, ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಲೆನಾಡು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಸೆಪ್ಟೆಂಬರ್ 19ರಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸೆಪ್ಟೆಂಬರ್ 19ರ ಶನಿವಾರದ ದಿನ ಬೆಳಗ್ಗೆ 9.30 ಕ್ಕೆ ಸಭೆ ನಿಗದಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಲ್ಲ:
ಸೆ.19ರಂದು ತೀರ್ಥಹಳ್ಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್: ಕಸ್ತೂರಿ ರಂಗನ್ ವರದಿ ಕುರಿತು ಮಹತ್ವದ ಸಭೆ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ರೈತರ ಪರವಾಗಿ ನಿಂತಿರುವ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕದಲ್ಲಿ ಅವಕಾಶ ನೀಡುವುದಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ನಿಲುವು ಅತ್ಯಂತ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.
ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿತ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವೈಯಕ್ತಿಕವಾಗಿಯೂ ಚರ್ಚಿಸಿದ್ದೇನೆ. ಈ ವೇಳೆ ಮುಖ್ಯಮಂತ್ರಿಗಳು ರಾಜ್ಯದ ರೈತರ ಹಿತಕ್ಕೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶ ನೀಡುವುದಿಲ್ಲ. ರೈತರ ಪರವಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಶಿವಮೊಗ್ಗ ಜಿಲ್ಲೆಗೆ ಆಗಮಿಸಿ ಸ್ಥಳೀಯ ರೈತರು ಮತ್ತು ಸಾರ್ವಜನಿಕರಿಂದ ಖುದ್ದಾಗಿ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
ತೀರ್ಥಹಳ್ಳಿ, ಶಿಕಾರಿಪುರದಲ್ಲಿ ಬೃಹತ್ ಪಾದಯಾತ್ರೆ!
ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಈಗಾಗಲೇ ತೀರ್ಥಹಳ್ಳಿ ಹಾಗೂ ಶಿಕಾರಿಪುರದಲ್ಲಿ ಬೃಹತ್ ಪಾದಯಾತ್ರೆಗಳನ್ನು ನಡೆಸಲಾಗಿದೆ. ಎರಡೂ ಪಾದಯಾತ್ರೆಗಳಲ್ಲಿ ತಾವು ಖುದ್ದಾಗಿ ಭಾಗವಹಿಸಿದ್ದು, ಸಾವಿರಾರು ರೈತರು, ಯುವಕರು, ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.
ಕಸ್ತೂರಿ ರಂಗನ್ ವರದಿ ವಿರುದ್ಧದ ಹೋರಾಟ ಕಾಂಗ್ರೆಸ್‌ನ ಹೋರಾಟ ಅಲ್ಲ!
“ಮಲೆನಾಡಿನ ಭಾಗದ ನಾಗರೀಕರ ಪಾಲಿಗೆ ಮಾರಕವಾಗಲಿರುವ ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಸರ್ಕಾರದ ಒತ್ತಡಕ್ಕೆ ನಾವು ಮಣಿಯುವುದಿಲ್ಲ. ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಸಲಾಗುತ್ತಿರುವ ಈ ಹೋರಾಟ ಕಾಂಗ್ರೆಸ್‌ನ ಹೋರಾಟವಲ್ಲ. ಇದು ಮಲೆನಾಡಿನ ಜನರ ಹೋರಾಟ. ರೈತರ ಬದುಕಿನ ಹೋರಾಟ. ನಮ್ಮ ನೆಲ, ಜಲ, ಕೃಷಿ ಮತ್ತು ಭವಿಷ್ಯದ ಹೋರಾಟ” ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಕಸ್ತೂರಿ ರಂಗನ್ ವರದಿ ಜಾರಿಯಿಂದ ಶಿವಮೊಗ್ಗದ 484 ಗ್ರಾಮಗಳಿಗೆ ತೊಂದರೆ:
ಕಸ್ತೂರಿ ರಂಗನ್ ವರದಿಯ ಶಿಫಾರಸಿನಲ್ಲಿ ರಾಜ್ಯದ 20,668 ಚದರ ಕಿಲೋಮೀಟರ್ ಪ್ರದೇಶ ಹಾಗೂ 1,576 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳೂ ಸೇರಿವೆ ಎಂದು ಸಚಿವರು ತಿಳಿಸಿದ್ದಾರೆ.
ಜಿಲ್ಲೆಯ ತೀರ್ಥಹಳ್ಳಿ ಮತ್ತು ಸಾಗರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಗ್ರಾಮಗಳು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿರುವ ಗ್ರಾಮಗಳ ಪಟ್ಟಿಯಲ್ಲಿವೆ. ಈ ಪ್ರದೇಶದಲ್ಲಿ ಜನವಸತಿ ಇದ್ದರೂ ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿ, ನಿರ್ಬಂಧಗಳನ್ನು ಹೇರಲು ಕೇಂದ್ರ ಸರ್ಕಾರ ಮುಂದಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮೊದಲ ಆರು ಅಧಿಸೂಚನೆಗಳಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 139 ಗ್ರಾಮಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿತ್ತು. ಇದೀಗ ಹೊರಡಿಸಲಾಗಿರುವ ಕರಡು ಅಧಿಸೂಚನೆಯಲ್ಲಿ ಗ್ರಾಮಗಳ ಸಂಖ್ಯೆಯನ್ನು 154ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಸ್ಥಳೀಯ ರೈತರಲ್ಲಿ ಆತಂಕ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.
ಕಸ್ತೂರಿ ರಂಗನ್ ವರದಿಯಿಂದ ರೈತರ ಬದುಕಿಗೆ ತೊಂದರೆ.. ಇದನ್ನು ಒಪ್ಪುವುದಿಲ್ಲ!
ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಮುಂದಿಟ್ಟುಕೊಂಡು ರೈತರ ಬದುಕಿಗೆ ತೊಂದರೆ ಉಂಟುಮಾಡುವ ಕ್ರಮ ಕೈಗೊಳ್ಳಲು ಮುಂದಾಗುತ್ತಿದೆ ಎಂದು ಆರೋಪಿಸಿದ ಸಚಿವರು, ಮಲೆನಾಡಿನ ರೈತರು ಕಾಡನ್ನು ನಾಶ ಮಾಡಲು ಹೊರಟವರಲ್ಲ. ಪರಿಸರವನ್ನು ಸಂರಕ್ಷಿಸಿಕೊಂಡೇ ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬದುಕುತ್ತಿದ್ದಾರೆ ಎಂದು ಹೇಳಿದ್ದಾರೆ.
ಕೃಷಿಗೆ ಮಾರಕವಾದ ಯಾವುದೇ ನಿರ್ಧಾರವನ್ನು ಒಪ್ಪಲು ಸಾಧ್ಯವೇ ಇಲ್ಲ:
ಅಡಕೆ, ಕಾಫಿ, ಭತ್ತ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುವ ಮೂಲಕ ಮಲೆನಾಡಿನ ಆರ್ಥಿಕತೆಗೆ ರೈತರು ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ರಾಸಾಯನಿಕ ಗೊಬ್ಬರ, ಕೀಟನಾಶಕ ಬಳಸಬೇಡಿ, ಅಭಿವೃದ್ಧಿ ಕೆಲಸ ಮಾಡಬೇಡಿ ಎಂದು ಹೇಳುವುದು ಸರಿಯಲ್ಲ. ಈ ರೈತರ ಬದುಕು ಮತ್ತು ಕೃಷಿಗೆ ತೊಂದರೆಯಾಗುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
“ಪರಿಸರ ಉಳಿಯಬೇಕು. ಮಲೆನಾಡಿನ ರೈತರ ಬದುಕು ಉಳಿಯಬೇಕು. ಅವರ ಕೃಷಿ ಉಳಿಯಬೇಕು. ಇದೇ ನಮ್ಮ ಕಾಂಗ್ರೆಸ್ ಸರ್ಕಾರದ ನಿಲುವು” ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ತೀರ್ಥಹಳ್ಳಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ:
ಕಸ್ತೂರಿ ರಂಗನ್ ವಿಷಯದ ಕುರಿತು ಚರ್ಚಿಸಲು ಈಗಾಗಲೇ ವಿಶೇಷ ಅಧಿವೇಶನ ಕರೆದಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19ರಂದು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆ ಅತ್ಯಂತ ಮಹತ್ವದ್ದಾಗಿದೆ. ಈ ಸಭೆಯಲ್ಲಿ ಮಲೆನಾಡಿನ ರೈತರ ಸಮಸ್ಯೆಗಳು ಹಾಗೂ ಕಸ್ತೂರಿ ರಂಗನ್ ವರದಿಯಿಂದ ಉಂಟಾಗಬಹುದಾದ ಆತಂಕಗಳ ಕುರಿತು ಮುಖ್ಯಮಂತ್ರಿಗಳು ಖುದ್ದಾಗಿ ರೈತರಿಂದ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಸಭೆಗೆ ಜಿಲ್ಲೆಯ ರೈತರು, ಕೃಷಿ ಕಾರ್ಮಿಕರು, ಮಹಿಳೆಯರು, ಸಾರ್ವಜನಿಕರು ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಈ ವರದಿಯನ್ನು ತಿರಸ್ಕರಿಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಶಕ್ತಿ ತುಂಬಬೇಕು ಎಂದು ಸಚಿವ ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ.