SOCIAL MEDIA

Newsletter

PARTNER SITES
Select Language Select State

ದೀಪಾವಳಿ ಹಬ್ಬಕ್ಕೆ KSRTC ಭರ್ಜರಿ ಸಿದ್ಧತೆ: 2,600 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ!

ದೀಪಾವಳಿ ಹಬ್ಬ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ KSRTC 2,600 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಓಡಿಸಲಿದೆ. ನವೆಂಬರ್ 6ರಿಂದ 8ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಅಂತರರಾಜ್ಯ ಮಾರ್ಗಗಳಿಗೆ ಬಸ್‌ಗಳು ಸಂಚರಿಸಲಿವೆ. ನವೆಂಬರ್ 10 ಮತ್ತು 11ರಂದು ಬೆಂಗಳೂರಿಗೆ ಮರಳುವ ಪ್ರಯಾಣಿಕರಿಗೂ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

Written By Puttaraj K Alur
Published: Oct 31, 2026, 03:32 PM IST | Updated: Oct 31, 2026, 03:41 PM IST
Image Credit: Special Buses
Join

KSRTC Deepavali Special Buses: ದೀಪಾವಳಿ ಹಬ್ಬ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 2,600 ಹೆಚ್ಚುವರಿ ವಿಶೇಷ ಬಸ್‌ಗಳನ್ನ ಕಾರ್ಯಾಚರಣೆಗೊಳಿಸಲು ವ್ಯವಸ್ಥೆ ಮಾಡಿದೆ. ನವೆಂಬರ್ 6ರಿಂದ 8ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಅಂತರರಾಜ್ಯ ಮಾರ್ಗಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ. 

ಹಬ್ಬದ ಬಳಿಕ ಪ್ರಯಾಣಿಕರು ಬೆಂಗಳೂರಿಗೆ ಮರಳಲು ಅನುಕೂಲವಾಗುವಂತೆ ನವೆಂಬರ್ 10 ಮತ್ತು 11ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ನವೆಂಬರ್ 8ರಂದು ನರಕ ಚತುರ್ದಶಿ ಹಾಗೂ ನವೆಂಬರ್ 10ರಂದು ಬಲಿಪಾಡ್ಯಮಿ ಆಚರಣೆ ನಡೆಯಲಿದೆ. ನವೆಂಬರ್ 7 ಮತ್ತು 8ರಂದು ವಾರಾಂತ್ಯದ ರಜೆ ಇರುವುದರಿಂದ ಪ್ರಯಾಣಿಕರ ಸಂಚಾರ ಹೆಚ್ಚಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಈ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆ

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಹಾಗೂ ಅಂತರರಾಜ್ಯ ಮಾರ್ಗಗಳಿಗೆ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಉಡುಪಿ, ಕುಂದಾಪುರ, ಪುತ್ತೂರು, ಮಂಗಳೂರು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ದಾವಣಗೆರೆ ಮತ್ತು ಹಾಸನ ಸೇರಿದಂತೆ ಹಲವು ಸ್ಥಳಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಉತ್ತರ ಕರ್ನಾಟಕದ ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಸಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ ಮತ್ತು ಬೀದರ್ ಮಾರ್ಗಗಳಿಗೂ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ. ಇದರ ಜೊತೆಗೆ ತಿರುಪತಿ, ವಿಜಯವಾಡ ಮತ್ತು ಹೈದರಾಬಾದ್‌ನಂತಹ ಅಂತರರಾಜ್ಯ ಮಾರ್ಗಗಳಿಗೂ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಮೈಸೂರು ಮತ್ತು ಕೊಡಗು ಮಾರ್ಗಗಳಿಗೂ ಬಸ್‌ಗಳು

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಮಾರ್ಗಗಳಿಗೆ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಈ ಮಾರ್ಗಗಳಲ್ಲಿ ಪ್ರಯಾಣಿಸುವವರಿಗೆ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಸಾರಿಗೆ ಸೌಲಭ್ಯ ದೊರೆಯಲಿದೆ.

ತಮಿಳುನಾಡು ಮತ್ತು ಕೇರಳದ ಪ್ರಮುಖ ನಗರಗಳಿಗೆ ತೆರಳುವ ಪ್ರತಿಷ್ಠಿತ ಬಸ್‌ಗಳು ಶಾಂತಿನಗರದ BMTC ಬಸ್ ನಿಲ್ದಾಣದಿಂದ ಹೊರಡಲಿವೆ. ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ ಮತ್ತು ಕೋಯಿಕೋಡ್ ಸೇರಿದಂತೆ ಹಲವು ನಗರಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ವಿವಿಧ ನಿಲ್ದಾಣಗಳಿಂದಲೂ ಬಸ್ ಕಾರ್ಯಾಚರಣೆ

ಕೆಂಪೇಗೌಡ, ಮೈಸೂರು ರಸ್ತೆ ಮತ್ತು ಶಾಂತಿನಗರ ಟಿಟಿಎಂಸಿ ಬಸ್ ನಿಲ್ದಾಣಗಳು ವಿಶೇಷ ಬಸ್‌ಗಳ ಕಾರ್ಯಾಚರಣೆಯ ಪ್ರಮುಖ ಕೇಂದ್ರಗಳಾಗಿರಲಿವೆ. ಮುಂಗಡವಾಗಿ ಆಸನ ಕಾಯ್ದಿರಿಸಿರುವ ಪ್ರಯಾಣಿಕರ ಅನುಕೂಲಕ್ಕಾಗಿ ವಿಜಯನಗರ, ಯಶವಂತಪುರ, ಜಯನಗರ ಟಿಟಿಎಂಸಿ ಮತ್ತು ಮಲ್ಲೇಶ್ವರಂ 18ನೇ ಕ್ರಾಸ್‌ನಿಂದಲೂ ಬಸ್‌ಗಳು ಹೊರಡಲಿವೆ.

ಇದರ ಜೊತೆಗೆ ಬಸವೇಶ್ವರ ನಗರ, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ ಮತ್ತು ಟಿನ್ ಫ್ಯಾಕ್ಟರಿ ಸೇರಿದಂತೆ ವಿವಿಧ ಸ್ಥಳಗಳಿಂದಲೂ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ. ನಿಗಮದ ವ್ಯಾಪ್ತಿಯ ಎಲ್ಲಾ ತಾಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ವಿಶೇಷ ಬಸ್‌ಗಳನ್ನ ಒದಗಿಸಲಾಗುತ್ತದೆ.

ಟಿಕೆಟ್ ಕಾಯ್ದಿರಿಸುವಿಕೆಗೆ ರಿಯಾಯಿತಿ

ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚುವರಿ ವಿಶೇಷ ಬಸ್‌ಗಳಲ್ಲಿಯೂ ಮುಂಗಡ ಆಸನ ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ಪಡೆಯಬಹುದು. ಹೋಗುವ ಮತ್ತು ಹಿಂದಿರುಗುವ ಪ್ರಯಾಣದ ಟಿಕೆಟ್‌ಗಳನ್ನ ಒಟ್ಟಿಗೆ ಕಾಯ್ದಿರಿಸಿದರೆ ಹಿಂದಿರುಗುವ ಪ್ರಯಾಣದ ಟಿಕೆಟ್ ದರದಲ್ಲಿ ಶೇ.10ರಷ್ಟು ರಿಯಾಯಿತಿ ದೊರೆಯಲಿದೆ. ಕರ್ನಾಟಕದ ಜೊತೆಗೆ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಮತ್ತು ಪುದುಚೇರಿಯ ಪ್ರಮುಖ ನಗರಗಳಲ್ಲಿರುವ ಬುಕ್ಕಿಂಗ್ ಕೌಂಟರ್‌ಗಳಲ್ಲಿಯೂ ಟಿಕೆಟ್ ಕಾಯ್ದಿರಿಸಬಹುದು.

ಆನ್‌ಲೈನ್ ಬುಕ್ಕಿಂಗ್ ಸೌಲಭ್ಯ

ಪ್ರಯಾಣಿಕರು KSRTCಯ ಅಧಿಕೃತ ವೆಬ್‌ಸೈಟ್ ಮೂಲಕವೂ ಟಿಕೆಟ್ ಕಾಯ್ದಿರಿಸಬಹುದು. ಇ-ಟಿಕೆಟ್ ಬುಕ್ಕಿಂಗ್‌ಗಾಗಿ [www.ksrtc.karnataka.gov.in] (http://www.ksrtc.karnataka.gov.in) ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಒಟ್ಟಾರೆ ದೀಪಾವಳಿ ಹಬ್ಬ ಮತ್ತು ವಾರಾಂತ್ಯದ ಪ್ರಯಾಣಿಕರ ದಟ್ಟಣೆಯನ್ನ ನಿರ್ವಹಿಸಲು KSRTC 2,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳು ಹಾಗೂ ಅಂತರರಾಜ್ಯ ಮಾರ್ಗಗಳಿಗೆ ಮತ್ತು ಹಬ್ಬದ ಬಳಿಕ ಬೆಂಗಳೂರಿಗೆ ಮರಳುವ ಪ್ರಯಾಣಿಕರಿಗೆ ವಿಶೇಷ ಸಾರಿಗೆ ಸೌಲಭ್ಯ ಒದಗಿಸಲಿದೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES