ದೀಪಾವಳಿ ಹಬ್ಬಕ್ಕೆ KSRTCಯಿಂದ 2,600 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ
ದೀಪಗಳ ಹಬ್ಬ ದೀಪಾವಳಿಗೆ ಊರಿಗೆ ಹೊರಡುವವರಿಗೆ ಅನುಕೂಲವಾಗಲೆಂದು ಕೆಎಸ್‌ಆರ್‌ಟಿಸಿ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಿದೆ.
ದೀಪಾವಳಿ ಹಬ್ಬಕ್ಕಾಗಿ ತಮ್ಮ ತಮ್ಮ ಊರುಗಳಿಗೆ ಹೋಗಲು ಯೋಜಿಸುತ್ತಿರುವವರಿಗೆ ಕರ್ನಾಟಕ ರಾಜ್ಯ ಸಾರಿಗೆ ನಿಗಮ ಸಂಸ್ಥೆ (KSRTC) ಗುಡ್ ನ್ಯೂಸ್ ನೀಡಿದ್ದು, 2,600 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಕೈಗೊಂಡಿದೆ. ನವೆಂಬರ್ 7 ಮತ್ತು 8ರಂದು ವಾರಾಂತ್ಯದ ರಜೆ, ನವೆಂಬರ್ 8ರಂದು ನರಕ ಚತುರ್ದಶಿ ಹಾಗೂ ನವೆಂಬರ್ 10ರಂದು ಬಲಿಪಾಡ್ಯಮಿ ಹಿನ್ನೆಲೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ರಾಜ್ಯ ಸಾರಿಗೆ ನಿಗಮ, ದೀಪಾವಳಿ ಹಬ್ಬ ಮತ್ತು ವಾರಾಂತ್ಯದ ಪ್ರಯಾಣಿಕರ ದಟ್ಟಣೆ ನಿರ್ವಹಣೆಗೆ ಕೆಎಸ್‌ಆರ್‌ಟಿಸಿಯಿಂದ 2,600 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸಲು ಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ನವೆಂಬರ್ 6ರಿಂದ 8ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಹಾಗೂ ಅಂತರರಾಜ್ಯ ಮಾರ್ಗಗಳಿಗೆ ವಿಶೇಷ ಸಾರಿಗೆ ಕಲ್ಪಿಸಲಾಗಿದೆ. ಇದೇ ವೇಳೆ, ಹಬ್ಬದ ಬಳಿಕ ಬೆಂಗಳೂರಿಗೆ ಮರಳುವವರಿಗೆ ಅನುಕೂಲವಾಗಲೆಂದು ನವೆಂಬರ್ 10 ಮತ್ತು 11ರಂದು ರಾಜ್ಯಾದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್‌ಗಳ ವ್ಯವಸ್ಥೆಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಯಾವ ಬಸ್ ನಿಲ್ದಾಣದಿಂದ ಯಾವ ಮಾರ್ಗಕ್ಕೆ ಬಸ್ ವ್ಯವಸ್ಥೆ?
* ಕೆಂಪೇಗೌಡ ಬಸ್ ನಿಲ್ದಾಣದಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಹಾಗೂ ಅಂತರರಾಜ್ಯ ಮಾರ್ಗಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.
* ಉಡುಪಿ, ಕುಂದಾಪುರ, ಪುತ್ತೂರು, ಮಂಗಳೂರು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ದಾವಣಗೆರೆ, ಹಾಸನ ಮಾರ್ಗಗಳಿಗೆ ಬಸ್‌ಗಳು
* ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಸಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ ಮತ್ತು ಬೀದರ್‌ಗೆ ವಿಶೇಷ ಸಾರಿಗೆ ವ್ಯವಸ್ಥೆ ಕೈಗೊಳ್ಳಲಾಗಿದೆ.
* ತಿರುಪತಿ, ವಿಜಯವಾಡ ಮತ್ತು ಹೈದರಾಬಾದ್‌ಗೂ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
* ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಮಾರ್ಗಗಳಿಗೆ ಬಸ್‌ಗಳು ಸಂಚರಿಸಲಿವೆ.
* ತಮಿಳುನಾಡು ಮತ್ತು ಕೇರಳದ ಪ್ರಮುಖ ನಗರಗಳಿಗೆ ತೆರಳುವ ಪ್ರತಿಷ್ಠಿತ ಬಸ್‌ಗಳು ಶಾಂತಿನಗರ BMTC ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ.
* ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ ಮತ್ತು ಕೋಯಿಕೋಡ್‌ಗೆ ವಿಶೇಷ ಸಾರಿಗೆ ಕಲ್ಪಿಸಲಾಗಿದೆ ಎನ್ನಲಾಗಿದೆ.
ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಕೇಂದ್ರಗಳು:
* ಕೆಂಪೇಗೌಡ, ಮೈಸೂರು ರಸ್ತೆ ಮತ್ತು ಶಾಂತಿನಗರ ಟಿಟಿಎಂಸಿ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.
* ಮುಂಗಡ ಕಾಯ್ದಿರಿಸಿದ ಬಸ್‌ಗಳು ವಿಜಯನಗರ, ಯಶವಂತಪುರ, ಜಯನಗರ ಟಿಟಿಎಂಸಿ ಹಾಗೂ ಮಲ್ಲೇಶ್ವರಂ 18ನೇ ಕ್ರಾಸ್‌ನಿಂದಲೂ ಹೊರಡಲಿವೆ.
* ಬಸವೇಶ್ವರ ನಗರ, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಟಿನ್ ಫ್ಯಾಕ್ಟರಿ ಸೇರಿದಂತೆ ವಿವಿಧ ನಿಲ್ದಾಣಗಳಿಂದಲೂ ಬಸ್‌ಗಳ ಕಾರ್ಯಾಚರಣೆ ನಡೆಸಲಿವೆ.
* ನಿಗಮದ ವ್ಯಾಪ್ತಿಯ ಎಲ್ಲ ತಾಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದ ಪ್ರಯಾಣಿಕರ ದಟ್ಟಣೆ ಆಧರಿಸಿ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಹೇಳಲಾಗಿದೆ.
ಪ್ರಯಾಣಿಕರಿಗೆ ರಿಯಾಯಿತಿ ಮತ್ತು ಮುಂಗಡ ಬುಕ್ಕಿಂಗ್ ವ್ಯವಸ್ಥೆ:
* ಹೆಚ್ಚುವರಿ ಬಸ್‌ಗಳಿಗೂ ಮುಂಗಡ ಆಸನ ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗಿದ್ದು ಕೆಎಸ್‌ಆರ್‌ಟಿಸಿಯ ವೆಬ್‌ಸೈಟ್‌ನಲ್ಲಿ ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ನೀಡಲಾಗುತ್ತಿದೆ.
* ಇದಲ್ಲದೆ ಹೋಗುವ ಮತ್ತು ಹಿಂದಿರುಗುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ಹಿಂದಿರುಗುವ ಪ್ರಯಾಣದ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುತ್ತಿದೆ.
ಕೆಎಸ್‌ಆರ್‌ಟಿಸಿ ಟಿಕೆಟ್ ಬುಕಿಂಗ್ ಮಾಡುವುದು ಹೇಗೆ?
ಕರ್ನಾಟಕ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಮತ್ತು ಪುದುಚೇರಿಯ ಪ್ರಮುಖ ನಗರಗಳಲ್ಲಿರುವ ಬುಕ್ಕಿಂಗ್ ಕೌಂಟರ್‌ಗಳಲ್ಲೂ ಟಿಕೆಟ್ ಕಾಯ್ದಿರಿಸಬಹುದು. ಇದಲ್ಲದೆ, KSRTC ಅಧಿಕೃತ ವೆಬ್‌ಸೈಟ್: www.ksrtc.karnataka.gov.in ಗೆ ಭೇಟಿ ನೀಡುವ ಮೂಲಕ ಇ-ಟಿಕೆಟ್ ಬುಕ್ಕಿಂಗ್ ಮಾಡಬಹುದಾಗಿದೆ.