ರೈತರ ಸಂಕಷ್ಟದಲ್ಲಿ ರಾಜಕೀಯ ಬೇಡ, ಕೇಂದ್ರ ತಕ್ಷಣ ಬರ ಪರಿಹಾರ ಬಿಡುಗಡೆ ಮಾಡಲಿ: ಡಾ.ಜಿ.ಪರಮೇಶ್ವರ ಆಗ್ರಹ
ಭೀಕರ ಬರ ಪರಿಸ್ಥಿತಿ ಇರುವಾದ ರೈತರ ಸಂಕಷ್ಟದಲ್ಲಿ ರಾಜಕೀಯ ಮಾಡದೆ ಕೇಂದ್ರ ಸರ್ಕಾರ ಕೂಡಲೇ ಬರ ಪರಿಹಾರವನ್ನು ಬಿಡುಗಡೆ ಮಾಡಬೇಕು. ಕೇಂದ್ರದಿಂದ ಪರಿಹಾರ ಸಿಗದಿದ್ದರೆ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಡಿಸಿಎಂ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.
ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮೂರು ಬಾರಿ ಮನವಿ ಸಲ್ಲಿಸಿದ್ದರೂ, ಕಳೆದ ಎರಡು ತಿಂಗಳಿನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯಕ್ಕೆ ಬರ ಪರಿಹಾರವಾಗಿ ಒಟ್ಟು ₹22 ಸಾವಿರ ಕೋಟಿ ನೀಡುವಂತೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರದ ತಂಡಗಳು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿಯನ್ನೂ ಸಲ್ಲಿಸಿವೆ. ಆದರೂ ಪರಿಹಾರ ಬಿಡುಗಡೆಗೆ ಕೇಂದ್ರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಇನ್ನೂ ಸ್ವಲ್ಪ ಕಾಲ ಕಾಯಲಿದ್ದು, ಆನಂತರ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಮುಂದಿನ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ತಿಳಿಸಿದರು.
ಇಂದು ಸದಾಶಿವನಗರದಲ್ಲಿರುವ ತಮ್ಮ ಗೃಹಕಚೇರಿ ಬಳಿ ವಿವಿಧ ವಿಚಾರಗಳ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಸಿಎಂ ಡಾ.ಜಿ.ಪರಮೇಶ್ವರ ಅವರು, ಬರ ಪರಿಹಾರದ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ಬರ ಯಾರನ್ನೂ ಕೇಳಿ ಬರುವುದಿಲ್ಲ. ರೈತರು ಸಂಕಷ್ಟದಲ್ಲಿರುವಾಗ ರಾಜಕೀಯ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಒಬ್ಬರ ಮೇಲೊಬ್ಬರು ಆರೋಪ ಮಾಡುವುದಕ್ಕಿಂತ ರೈತರ ನೆರವಿಗೆ ನಿಲ್ಲುವುದು ಮುಖ್ಯ. ಬರದ ವಿಚಾರದಲ್ಲಿ ರಾಜಕೀಯ ಮಾಡುವುದು ಎಷ್ಟು ಸರಿ ಎಂಬುದನ್ನು ರೈತರು ಪ್ರಶ್ನಿಸುತ್ತಾರೆ. ರಾಜಕೀಯ ಮಾಡಲು ಬೇರೆ ವಿಚಾರಗಳಿವೆ. ರೈತರ ಸಂಕಷ್ಟದ ಸಂದರ್ಭದಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.
ಕೇಂದ್ರ ಗೃಹ ಸಚಿವರು, ಕೃಷಿ ಸಚಿವರು ಹಾಗೂ ಪ್ರಧಾನಮಂತ್ರಿಗಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಕೇಂದ್ರ ಸಚಿವರನ್ನು ಭೇಟಿಯಾಗಲು ಸಮಯ ಕೋರಿ ಪತ್ರ ಬರೆಯುವುದು ಸಾಮಾನ್ಯ ಪ್ರಕ್ರಿಯೆ. ರಾಜ್ಯದ ಸಮಸ್ಯೆಗಳನ್ನು ನೇರವಾಗಿ ವಿವರಿಸಲು ಅವಕಾಶ ನೀಡಬೇಕು. ಜವಾಬ್ದಾರಿಯುತ ರಾಜ್ಯ ಸರ್ಕಾರವೊಂದು ಕೇಂದ್ರದ ಸಂಬಂಧಪಟ್ಟ ಸಚಿವಾಲಯಕ್ಕೆ ಪತ್ರ ಬರೆದಾಗ ಅದಕ್ಕೆ ಸೂಕ್ತವಾಗಿ ಸ್ಪಂದಿಸುವ ಜವಾಬ್ದಾರಿ ಕೇಂದ್ರ ಸರ್ಕಾರಕ್ಕಿದೆ ಎಂದರು.
ಕೇಂದ್ರದಿಂದ ಪರಿಹಾರ ದೊರೆಯದಿದ್ದರೆ ಮುಂದಿನ ಕ್ರಮಗಳ ಕುರಿತು ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಈ ಹಿಂದೆಯೂ ಕೇಂದ್ರದಿಂದ ಪರಿಹಾರ ದೊರೆಯದ ಸಂದರ್ಭದಲ್ಲಿ ದೆಹಲಿಗೆ ತೆರಳಿ ಪ್ರತಿಭಟನೆ ನಡೆಸಿದ್ದರೂ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ. ಬಳಿಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಾಗ ನ್ಯಾಯಾಲಯದ ನಿರ್ದೇಶನದ ಮೇರೆಗೆ ಸುಮಾರು ₹3,500 ಕೋಟಿ ಪರಿಹಾರ ದೊರೆತಿತ್ತು. ಈ ಬಾರಿಯೂ ಅಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಭಾವಿಸಿಲ್ಲ. ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ಪರಿಹಾರ ಬಿಡುಗಡೆ ಮಾಡಬಹುದು ಎಂಬ ನಿರೀಕ್ಷೆಯಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಅರ್ಹ ರೈತರಿಗೆ ತಲಾ ₹5 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿದ್ದು, ಈಗಾಗಲೇ ವಿತರಣೆ ಆರಂಭಿಸಿದೆ. ಬಹುತೇಕ ಎಲ್ಲ ಜಿಲ್ಲೆಗಳಿಗೂ ಪರಿಹಾರ ತಲುಪಿಸುವ ಕಾರ್ಯ ನಡೆಯುತ್ತಿದೆ. ಅಧಿವೇಶನ ಆರಂಭವಾಗುವ ಮುನ್ನವೇ ರೈತರಿಗೆ ಘೋಷಿಸಿರುವ ಹಣ ತಲುಪಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಸಂಬಂಧ ಈಗಾಗಲೇ ಸಭೆ ನಡೆಸಿ ಸೂಚನೆಗಳನ್ನು ನೀಡಲಾಗಿದೆ ಎಂದರು.