SOCIAL MEDIA

Newsletter

PARTNER SITES
Select Language Select State

ಬೆಂಗಳೂರು, ಕರಾವಳಿ ಸೇರಿ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ನಿರ್ಮಾಣವಾಗಿರುವ ಟ್ರಫ್ ಪ್ರಭಾವದಿಂದ ನವೆಂಬರ್ 26ರಂದು ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Written By Yashaswini V
Published: Nov 26, 2026, 09:23 IST | Updated: Nov 26, 2026, 09:25 IST
Join

ಬೆಂಗಳೂರು: ನೈಋತ್ಯ ಬಂಗಾಳಕೊಲ್ಲಿಯಿಂದ ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯವರೆಗೆ ಸಮುದ್ರ ಮಟ್ಟದಿಂದ 0.96 ಕಿ.ಮೀ ಎತ್ತರದಲ್ಲಿ ತೇವಾಂಶಭರಿತ ಪೂರ್ವ ಮಾರುತಗಳ ಟ್ರಫ್ ನಿರ್ಮಾಣವಾಗಿದೆ. ಈ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದೂ (ನವೆಂಬರ್ 26) ಮಳೆ ಆಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯ (IMD) ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ಬೆಳಗ್ಗಿನಿಂದಲೇ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಮುಂಜಾನೆ ವೇಳೆ ನಗರದ ಹೊರವಲಯ ಹಾಗೂ ಕೆಲವೆಡೆ ಮಂಜು ಕವಿದ ವಾತಾವರಣ ಕಂಡುಬಂದಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ನಗರದ ಹಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 27°C ಹಾಗೂ ಕನಿಷ್ಠ ತಾಪಮಾನ 20°C ಆಸುಪಾಸಿನಲ್ಲಿ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯ ಟ್ರಫ್ ಪ್ರಭಾವದಿಂದಾಗಿ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಇರಲಿದೆ:
ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಲೆನಾಡು ಮತ್ತು ಕರಾವಳಿ: 
ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಒಣಹವೆ ಇರುವ ಜಿಲ್ಲೆಗಳು: 
ಮಲೆನಾಡು ಭಾಗದ ಶಿವಮೊಗ್ಗದ ಒಂದೆರಡು ಕಡೆ ಮೋಡ ಕವಿದ ವಾತಾವರಣವಿರಬಹುದಾದರೂ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದ್ದರೆ, ಉತ್ತರ ಒಳನಾಡಿನ ಎಲ್ಲಾ 11 ಜಿಲ್ಲೆಗಳಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ) ಇಂದು ಸಂಪೂರ್ಣ ಒಣಹವೆ ಮುಂದುವರಿಯಲಿದೆ. ಈ ಭಾಗದಲ್ಲಿ ಹಗಲಿನಲ್ಲಿ ಬಿಸಿಲು ಕಾಣಿಸಿಕೊಳ್ಳಲಿದ್ದು, ಮುಂಜಾನೆ ಹಾಗೂ ರಾತ್ರಿ ವೇಳೆ ಚಳಿಯ ಪ್ರಮಾಣ ಕೊಂಚ ಹೆಚ್ಚಿರಲಿದೆ.

ಇನ್ನು ರಾಜ್ಯದ ತಾಪಮಾನದ ವಿವರ ನೋಡುವುದಾದರೆ, ಕನಿಷ್ಠ ತಾಪಮಾನವು 17.5°C ನಿಂದ 24.8°C ವ್ಯಾಪ್ತಿಯಲ್ಲಿ ದಾಖಲಾಗಿದೆ. ವಿಶೇಷವೆಂದರೆ ಕರಾವಳಿ ಭಾಗದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ರಾಜ್ಯದ ಅತ್ಯಂತ ಕನಿಷ್ಠ ತಾಪಮಾನ (17.5°C) ದಾಖಲಾಗಿದ್ದು, ಮುಂಜಾನೆ ತಂಪಾದ ವಾತಾವರಣ ನಿರ್ಮಾಣವಾಗಿದೆ.

ಸಾರ್ವಜನಿಕರಿಗೆ ಸಲಹೆ:
ಸಂಜೆ ವೇಳೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಮತ್ತು ವಾಹನ ಸವಾರರು ಎಚ್ಚರಿಕೆಯಿಂದಿರಬೇಕು. ಮಳೆ ಬರುವ ಸಂದರ್ಭದಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ZEENEWS TRENDING STORIES