ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಸ್ಟಿಂಗ್ ವಿಡಿಯೋ ಪ್ರಕರಣ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ತನಿಖೆಯಲ್ಲಿ ಸಿಸಿಬಿ ಪೊಲೀಸರು ಸೂಕ್ಷ್ಮವಾಗಿ ಕಾಲಿಡುತ್ತಿದ್ದು, ಆರೋಪಿಗಳಿಂದ ನಿರೀಕ್ಷಿತ ಮಾಹಿತಿ ಸಿಗದ ಕಾರಣ ತಾಂತ್ರಿಕ ಸಾಕ್ಷ್ಯಗಳ ಮೂಲಕ ಸತ್ಯಾಂಶ ಹೊರತರುವ ಪ್ರಯತ್ನಕ್ಕೆ ಸಜ್ಜಾಗಿದ್ದಾರೆ. ಈ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ತನಿಖೆಯ ಮುಂದಿನ ಹಂತಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎನ್ನಲಾಗಿದೆ.
ಆರೋಪಿಗಳ ಹೇಳಿಕೆಯೇ ಪೊಲೀಸರಿಗೆ ಸವಾಲು:
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಆರೋಪಿ ರಿತೇಶ್ ಪಾಂಡೆಯನ್ನು ವಿಚಾರಣೆ ನಡೆಸಿರುವ ಪೊಲೀಸರು, ಪ್ರಜ್ವಲ್ ಪ್ರಸಾದ್ ಸೇರಿದಂತೆ ಇತರರ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ವಿಚಾರಣೆ ವೇಳೆ ಪ್ರಜ್ವಲ್ ಪ್ರಸಾದ್, ವಿಡಿಯೋ ಬಗ್ಗೆ ತನಗೆ ಮಾಹಿತಿ ಇಲ್ಲ, ಇದು ರಾಜಕೀಯ ಪ್ರೇರಿತ ಪ್ರಕರಣ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ನೋಡಿದ್ದೇನೆ. ರಿತೇಶ್ ಪಾಂಡೆ ಬಗ್ಗೆಯೂ ತನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಇನ್ನೊಂದೆಡೆ, ರಿತೇಶ್ ಪಾಂಡೆ ನೀಡಿರುವ ಹೇಳಿಕೆಯಲ್ಲಿ ದೆಹಲಿಯ ಕರೋಲ್ ಬಾಗ್‌ನ ಅಂಗಡಿಯಿಂದ ಮೊಬೈಲ್ ಖರೀದಿಸಿ, ಹೆಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದಲ್ಲಿ ಪ್ರಜ್ವಲ್ ಪ್ರಸಾದ್ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಉಲ್ಲೇಖವಾಗಿದೆ. ಈ ಹೇಳಿಕೆಯನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆದರೆ ಈ ಆರೋಪಗಳು ಇನ್ನೂ ದೃಢಪಟ್ಟಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ರಿತೇಶ್ ಪಾಂಡೆ ಮತ್ತು ವಿನೋದ್ ಶರ್ಮಾ ದೆಹಲಿಯ ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿದ್ದರು ಎನ್ನಲಾದ ಮಾಹಿತಿಯ ಹಿನ್ನೆಲೆಯಲ್ಲಿ, ಆ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸುವ ಬಗ್ಗೆ ತನಿಖಾಧಿಕಾರಿಗಳು ಚರ್ಚಿಸಿದ್ದಾರೆ. ಮೊಬೈಲ್ ಹಸ್ತಾಂತರದ ಬಗ್ಗೆ ರಿತೇಶ್ ನೀಡಿರುವ ಹೇಳಿಕೆಗೆ ಪೂರಕ ಸಾಕ್ಷ್ಯಗಳನ್ನು ಸಂಗ್ರಹಿಸುವುದು ಪೊಲೀಸರ ಮುಂದಿರುವ ಪ್ರಮುಖ ಗುರಿಯಾಗಿದೆ.
ಈಗಾಗಲೇ ರಿತೇಶ್ ಪಾಂಡೆ ದೆಹಲಿಯಲ್ಲಿ ಮೊಬೈಲ್ ಖರೀದಿಸಿದ ಅಂಗಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಮೊಬೈಲ್ ಖರೀದಿಗೆ ಸಂಬಂಧಿಸಿದ ಬಿಲ್ ಕೂಡ ವಶಕ್ಕೆ ಪಡೆಯಲಾಗಿದೆ. ಅಷ್ಟೇ ಅಲ್ಲದೆ, ಮೊಬೈಲ್ ಅಂಗಡಿಯ ಸುತ್ತಮುತ್ತಲಿನ ಇತರ ಅಂಗಡಿಗಳ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ.
ಮೊಬೈಲ್ ಖರೀದಿ, ಹಣಕಾಸಿನ ವಹಿವಾಟು ಹಾಗೂ ಆರೋಪಿಗಳ ನಡುವಿನ ಸಂಪರ್ಕದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ರಿತೇಶ್ ಪಾಂಡೆ ಮತ್ತು ಪ್ರಜ್ವಲ್ ಪ್ರಸಾದ್ ನಡುವಿನ ಹಣಕಾಸಿನ ವ್ಯವಹಾರಗಳನ್ನೂ ಪರಿಶೀಲಿಸಲಾಗುತ್ತಿದೆ.
ಎಫ್‌ಎಸ್‌ಎಲ್ ವರದಿ ಪಡೆಯಲು ಪೊಲೀಸರ ಕ್ರಮ:
ಈ ಪ್ರಕರಣಕ್ಕೆ ಸಂಬಂಧಿಸಿದ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಿದ್ದಾರೆ. ಮೊಬೈಲ್‌ನಲ್ಲಿರುವ ಡಿಜಿಟಲ್ ಮಾಹಿತಿಯನ್ನು ಪರಿಶೀಲಿಸುವ ಮೂಲಕ ವಿಡಿಯೋ ಅಪ್‌ಲೋಡ್, ಅದರ ಮೂಲ ಹಾಗೂ ಆರೋಪಿಗಳ ನಡುವಿನ ಸಂಪರ್ಕದ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ.
ಆಯುಕ್ತರ ನೇತೃತ್ವದ ಸಭೆಯಲ್ಲಿ ಸಿಸಿಬಿ ಮತ್ತು ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳು ಭಾಗವಹಿಸಿದ್ದು, ಸಾಧ್ಯವಾದಷ್ಟು ಬೇಗ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುವಂತೆ ತನಿಖಾ ತಂಡಕ್ಕೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಎಫ್‌ಎಸ್‌ಎಲ್ ವರದಿಯನ್ನು ಶೀಘ್ರವಾಗಿ ಪಡೆಯುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಇನ್ನು ಈ ಪ್ರಕರಣದಲ್ಲಿ ತಮ್ಮ ದೆಹಲಿ ನಿವಾಸದ ಹೆಸರು ಕೇಳಿಬಂದಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಮ್ಮ ನಿವಾಸದಲ್ಲಿ ಮೊಬೈಲ್ ಹಸ್ತಾಂತರವಾಗಿದೆ ಎಂಬ ಪೊಲೀಸರ ಹೇಳಿಕೆಯನ್ನು ಅವರು ನಿರಾಕರಿಸಿದ್ದು, ತನಿಖೆಯ ಹೆಸರಿನಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಮತ್ತೊಂದೆಡೆ ಪೊಲೀಸರು ಆರೋಪಿಗಳ ಹೇಳಿಕೆ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ.