SOCIAL MEDIA

Newsletter

PARTNER SITES
Select Language Select State

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದಲ್ಲಿ ಟೆಕ್ನಿಕಲ್ ಎವಿಡೆನ್ಸ್ ಬೆನ್ನತ್ತ ಸಿಸಿಬಿ ಪೊಲೀಸರು!

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಆರೋಪಿಗಳ ಮೊಬೈಲ್ ಹಾಗೂ ತಾಂತ್ರಿಕ ಸಾಕ್ಷ್ಯಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸುವ ಬಗ್ಗೆಯೂ ಚರ್ಚೆ ನಡೆದಿದ್ದು, ಎಫ್‌ಎಸ್‌ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

Written By Yashaswini V
Published: Nov 04, 2026, 11:22 AM IST | Updated: Nov 04, 2026, 11:26 AM IST
Join

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಸ್ಟಿಂಗ್ ವಿಡಿಯೋ ಪ್ರಕರಣ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ತನಿಖೆಯಲ್ಲಿ ಸಿಸಿಬಿ ಪೊಲೀಸರು ಸೂಕ್ಷ್ಮವಾಗಿ ಕಾಲಿಡುತ್ತಿದ್ದು, ಆರೋಪಿಗಳಿಂದ ನಿರೀಕ್ಷಿತ ಮಾಹಿತಿ ಸಿಗದ ಕಾರಣ ತಾಂತ್ರಿಕ ಸಾಕ್ಷ್ಯಗಳ ಮೂಲಕ ಸತ್ಯಾಂಶ ಹೊರತರುವ ಪ್ರಯತ್ನಕ್ಕೆ ಸಜ್ಜಾಗಿದ್ದಾರೆ. ಈ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ತನಿಖೆಯ ಮುಂದಿನ ಹಂತಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎನ್ನಲಾಗಿದೆ.

ಆರೋಪಿಗಳ ಹೇಳಿಕೆಯೇ ಪೊಲೀಸರಿಗೆ ಸವಾಲು: 
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಆರೋಪಿ ರಿತೇಶ್ ಪಾಂಡೆಯನ್ನು ವಿಚಾರಣೆ ನಡೆಸಿರುವ ಪೊಲೀಸರು, ಪ್ರಜ್ವಲ್ ಪ್ರಸಾದ್ ಸೇರಿದಂತೆ ಇತರರ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ವಿಚಾರಣೆ ವೇಳೆ ಪ್ರಜ್ವಲ್ ಪ್ರಸಾದ್, ವಿಡಿಯೋ ಬಗ್ಗೆ ತನಗೆ ಮಾಹಿತಿ ಇಲ್ಲ, ಇದು ರಾಜಕೀಯ ಪ್ರೇರಿತ ಪ್ರಕರಣ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ನೋಡಿದ್ದೇನೆ. ರಿತೇಶ್ ಪಾಂಡೆ ಬಗ್ಗೆಯೂ ತನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ಇನ್ನೊಂದೆಡೆ, ರಿತೇಶ್ ಪಾಂಡೆ ನೀಡಿರುವ ಹೇಳಿಕೆಯಲ್ಲಿ ದೆಹಲಿಯ ಕರೋಲ್ ಬಾಗ್‌ನ ಅಂಗಡಿಯಿಂದ ಮೊಬೈಲ್ ಖರೀದಿಸಿ, ಹೆಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದಲ್ಲಿ ಪ್ರಜ್ವಲ್ ಪ್ರಸಾದ್ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಉಲ್ಲೇಖವಾಗಿದೆ. ಈ ಹೇಳಿಕೆಯನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆದರೆ ಈ ಆರೋಪಗಳು ಇನ್ನೂ ದೃಢಪಟ್ಟಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ರಿತೇಶ್ ಪಾಂಡೆ ಮತ್ತು ವಿನೋದ್ ಶರ್ಮಾ ದೆಹಲಿಯ ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿದ್ದರು ಎನ್ನಲಾದ ಮಾಹಿತಿಯ ಹಿನ್ನೆಲೆಯಲ್ಲಿ, ಆ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸುವ ಬಗ್ಗೆ ತನಿಖಾಧಿಕಾರಿಗಳು ಚರ್ಚಿಸಿದ್ದಾರೆ. ಮೊಬೈಲ್ ಹಸ್ತಾಂತರದ ಬಗ್ಗೆ ರಿತೇಶ್ ನೀಡಿರುವ ಹೇಳಿಕೆಗೆ ಪೂರಕ ಸಾಕ್ಷ್ಯಗಳನ್ನು ಸಂಗ್ರಹಿಸುವುದು ಪೊಲೀಸರ ಮುಂದಿರುವ ಪ್ರಮುಖ ಗುರಿಯಾಗಿದೆ.

ಈಗಾಗಲೇ ರಿತೇಶ್‌ ಪಾಂಡೆ ದೆಹಲಿಯಲ್ಲಿ ಮೊಬೈಲ್ ಖರೀದಿಸಿದ ಅಂಗಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಮೊಬೈಲ್ ಖರೀದಿಗೆ ಸಂಬಂಧಿಸಿದ ಬಿಲ್ ಕೂಡ ವಶಕ್ಕೆ ಪಡೆಯಲಾಗಿದೆ. ಅಷ್ಟೇ ಅಲ್ಲದೆ, ಮೊಬೈಲ್ ಅಂಗಡಿಯ ಸುತ್ತಮುತ್ತಲಿನ ಇತರ ಅಂಗಡಿಗಳ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ.

ಮೊಬೈಲ್ ಖರೀದಿ, ಹಣಕಾಸಿನ ವಹಿವಾಟು ಹಾಗೂ ಆರೋಪಿಗಳ ನಡುವಿನ ಸಂಪರ್ಕದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ರಿತೇಶ್ ಪಾಂಡೆ ಮತ್ತು ಪ್ರಜ್ವಲ್ ಪ್ರಸಾದ್ ನಡುವಿನ ಹಣಕಾಸಿನ ವ್ಯವಹಾರಗಳನ್ನೂ ಪರಿಶೀಲಿಸಲಾಗುತ್ತಿದೆ.

ಎಫ್‌ಎಸ್‌ಎಲ್‌ ವರದಿ ಪಡೆಯಲು ಪೊಲೀಸರ ಕ್ರಮ:
ಈ ಪ್ರಕರಣಕ್ಕೆ ಸಂಬಂಧಿಸಿದ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಿದ್ದಾರೆ. ಮೊಬೈಲ್‌ನಲ್ಲಿರುವ ಡಿಜಿಟಲ್ ಮಾಹಿತಿಯನ್ನು ಪರಿಶೀಲಿಸುವ ಮೂಲಕ ವಿಡಿಯೋ ಅಪ್‌ಲೋಡ್, ಅದರ ಮೂಲ ಹಾಗೂ ಆರೋಪಿಗಳ ನಡುವಿನ ಸಂಪರ್ಕದ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ.

ಆಯುಕ್ತರ ನೇತೃತ್ವದ ಸಭೆಯಲ್ಲಿ ಸಿಸಿಬಿ ಮತ್ತು ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳು ಭಾಗವಹಿಸಿದ್ದು, ಸಾಧ್ಯವಾದಷ್ಟು ಬೇಗ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುವಂತೆ ತನಿಖಾ ತಂಡಕ್ಕೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಎಫ್‌ಎಸ್‌ಎಲ್ ವರದಿಯನ್ನು ಶೀಘ್ರವಾಗಿ ಪಡೆಯುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇನ್ನು ಈ ಪ್ರಕರಣದಲ್ಲಿ ತಮ್ಮ ದೆಹಲಿ ನಿವಾಸದ ಹೆಸರು ಕೇಳಿಬಂದಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಮ್ಮ ನಿವಾಸದಲ್ಲಿ ಮೊಬೈಲ್ ಹಸ್ತಾಂತರವಾಗಿದೆ ಎಂಬ ಪೊಲೀಸರ ಹೇಳಿಕೆಯನ್ನು ಅವರು ನಿರಾಕರಿಸಿದ್ದು, ತನಿಖೆಯ ಹೆಸರಿನಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಮತ್ತೊಂದೆಡೆ ಪೊಲೀಸರು ಆರೋಪಿಗಳ ಹೇಳಿಕೆ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ.
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES