SOCIAL MEDIA

Newsletter

PARTNER SITES
Select Language Select State

ಕ್ಷೇತ್ರ ಪುನರ್‌ ವಿಂಗಡಣೆ ವಿರುದ್ಧ ವಿಪಕ್ಷಗಳ ಸಮರ: ಇಂದು ದಕ್ಷಿಣ ಭಾರತದ ಸಿಎಂಗಳ ಮಹತ್ವದ ಸಭೆ

ಸಂಸತ್ತಿನ ಕ್ಷೇತ್ರ ಮರುವಿಂಗಡಣೆ ಮಸೂದೆ ವಿಚಾರವಾಗಿ ದಕ್ಷಿಣ ಭಾರತದ ಕಾಂಗ್ರೆಸ್‌ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾನುವಾರ (ನವೆಂಬರ್ 29) ಮಹತ್ವದ ಸಭೆ ನಡೆಸಲಿದ್ದಾರೆ. ಕ್ಷೇತ್ರ ಮರುವಿಂಗಡಣೆ ಮಸೂದೆಯ ಕುರಿತು ಚರ್ಚಿಸುವ ಉದ್ದೇಶದಿಂದ ಈ ಸಭೆ ನಡೆಯಲಿದ್ದು, ದಕ್ಷಿಣ ಭಾರತದ ರಾಜ್ಯಗಳ ನಡುವಿನ ಸಮನ್ವಯ ಮತ್ತು ಈ ವಿಚಾರದಲ್ಲಿ ಮುಂದಿನ ನಿಲುವಿನ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆಯಿದೆ.

Written By Puttaraj K Alur
Published: Nov 29, 2026, 06:20 IST | Updated: Nov 29, 2026, 06:32 IST
Image Credit: Delimitation Bill
Join

Delimitation Bill: ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಹಿತಾಸಕ್ತಿಗಳನ್ನ ರಕ್ಷಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಒಟ್ಟಾಗಿ ಚರ್ಚೆ ನಡೆಸಲು ಮುಂದಾಗಿದ್ದಾರೆ. ಕರ್ನಾಟಕ, ಕೇರಳ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಭಾನುವಾರ (ನವೆಂಬರ್ 29) ನವದೆಹಲಿಯಲ್ಲಿ ಸಭೆ ಸೇರಲಿದ್ದಾರೆ. ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ದಕ್ಷಿಣ ಭಾರತದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ.

ಕರ್ನಾಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಹಾಗೂ ಇದರಿಂದ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ತಮ್ಮ ಅಭಿಪ್ರಾಯಗಳನ್ನ ಮಂಡಿಸುವುದಾಗಿ ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಆಗಬಹುದಾದ ಅನ್ಯಾಯ, ಉತ್ತರ ಭಾರತದ ರಾಜ್ಯಗಳಲ್ಲಿ ಹೆಚ್ಚಾಗಬಹುದಾದ ಲೋಕಸಭಾ ಸ್ಥಾನಗಳು ಹಾಗೂ ಪ್ರಸ್ತಾವಿತ ಕ್ರಮದ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಸಚಿವ ಸಂಪುಟವು ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ನಿರ್ಧಾರ ಕೈಗೊಂಡಿದೆ. ಆದರೆ ಈ ನಿರ್ಧಾರದ ಸಂಪೂರ್ಣ ವಿವರಗಳು ಇನ್ನೂ ಲಭ್ಯವಾಗಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದ್ಯಕ್ಕೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳ ಆಧಾರದ ಮೇಲಷ್ಟೇ ಮಾಹಿತಿ ಲಭ್ಯವಿದೆ. ಹೀಗಾಗಿ ಪ್ರಸ್ತಾವಿತ ಪ್ರಕ್ರಿಯೆಯ ಕುರಿತು ಹೆಚ್ಚಿನ ಮಾಹಿತಿ ಪಡೆದು, ಅದರ ಪರಿಣಾಮಗಳನ್ನ ಪರಿಶೀಲಿಸುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನ ಅವರು ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಉತ್ತರ ಭಾರತದ ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಹಾಗೂ ಅದರಿಂದ ದಕ್ಷಿಣ ಭಾರತದ ರಾಜ್ಯಗಳ ಸಂಸತ್ತಿನಲ್ಲಿನ ರಾಜಕೀಯ ಪ್ರಾತಿನಿಧ್ಯದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಕ್ಷೇತ್ರ ಮರುವಿಂಗಡಣೆಯ ವಿಚಾರದಲ್ಲಿ ದಕ್ಷಿಣ ಭಾರತದ ರಾಜ್ಯಗಳು ತಮ್ಮ ಹಿತಾಸಕ್ತಿಗಳನ್ನ ರಕ್ಷಿಸಿಕೊಳ್ಳಲು ಒಟ್ಟಾಗಿ ಧ್ವನಿ ಎತ್ತಬೇಕಾದ ಅಗತ್ಯವಿದೆ ಎಂಬ ನಿಲುವನ್ನ ಶಿವಕುಮಾರ್ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಮ್ಮ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯ, ಉತ್ತರದ ರಾಜ್ಯಗಳಲ್ಲಿ ಹೆಚ್ಚಾಗಬಹುದಾದ ಸ್ಥಾನಗಳು ಮತ್ತು ಪ್ರಸ್ತಾವಿತ ಪ್ರಕ್ರಿಯೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳ ನಿಲುವು ಏನಾಗಿರಬೇಕು ಎಂಬುದರ ಬಗ್ಗೆಯೂ ಸಭೆಯಲ್ಲಿ ವಿಚಾರ ವಿನಿಮಯ ನಡೆಯಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ, ದಕ್ಷಿಣ ಭಾರತದ ರಾಜ್ಯಗಳ ಹಿತಾಸಕ್ತಿಗಳನ್ನ ರಕ್ಷಿಸಿಕೊಳ್ಳಲು ಒಗ್ಗಟ್ಟಿನಿಂದ ಪ್ರಯತ್ನ ನಡೆಸುವುದಾಗಿ ಶಿವಕುಮಾರ್ ತಿಳಿಸಿದ್ದಾರೆ. ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಲ್ಲಿ ತಮ್ಮ ರಾಜ್ಯಗಳ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಒಟ್ಟಾಗಿ ಕುಳಿತು ಚರ್ಚೆ ನಡೆಸಲಿದ್ದಾರೆ.

ಈ ಹಿಂದೆ ಕೂಡ ಕ್ಷೇತ್ರ ಮರುವಿಂಗಡಣೆ ವಿಚಾರವಾಗಿ ಡಿಎಂಕೆ ಆಯೋಜಿಸಿದ್ದ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು. ಆ ಸಭೆಯಲ್ಲಿಯೂ ಈ ವಿಷಯದ ಕುರಿತು ಚರ್ಚೆ ನಡೆದಿತ್ತು. ಇದೀಗ ಮತ್ತೊಮ್ಮೆ ದಕ್ಷಿಣ ಭಾರತದ ಕಾಂಗ್ರೆಸ್‌ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಒಂದೇ ವೇದಿಕೆಯಲ್ಲಿ ಸಭೆ ಸೇರಲಿರುವುದು ಈ ವಿಚಾರದ ಮಹತ್ವವನ್ನ ಹೆಚ್ಚಿಸಿದೆ.

ಇನ್ನು ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನ ಮುಂದಕ್ಕೆ ಕೊಂಡೊಯ್ಯುವ ಮೊದಲು ಕೇಂದ್ರ ಸರ್ಕಾರವು ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಚರ್ಚೆ ನಡೆಸಬೇಕಿತ್ತು ಎಂಬ ನಿರೀಕ್ಷೆಯೂ ಇತ್ತು ಎಂದು ಶಿವಕುಮಾರ್ ಹೇಳಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಪಕ್ಷಗಳ ಅಭಿಪ್ರಾಯಗಳನ್ನ ಪಡೆದುಕೊಳ್ಳಲು ಸರ್ವಪಕ್ಷ ಸಭೆ ಕರೆಯಬೇಕಿತ್ತು ಎಂಬ ಅಭಿಪ್ರಾಯವನ್ನ ಅವರು ವ್ಯಕ್ತಪಡಿಸಿದ್ದಾರೆ.

ಒಟ್ನಲ್ಲಿ ಭಾನುವಾರ ನವದೆಹಲಿಯಲ್ಲಿ ನಡೆಯಲಿರುವ ಕರ್ನಾಟಕ, ಕೇರಳ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಸಭೆಯು ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ದಕ್ಷಿಣ ಭಾರತದ ರಾಜ್ಯಗಳ ನಿಲುವು ನಿರ್ಧರಿಸುವ ನಿಟ್ಟಿನಲ್ಲಿ ಮಹತ್ವ ಪಡೆದಿದೆ. ಪ್ರಸ್ತಾವಿತ ಪ್ರಕ್ರಿಯೆಯಿಂದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯದ ಮೇಲೆ ಉಂಟಾಗಬಹುದಾದ ಪರಿಣಾಮಗಳು, ಉತ್ತರ ಮತ್ತು ದಕ್ಷಿಣ ಭಾರತದ ರಾಜ್ಯಗಳ ನಡುವಿನ ಸ್ಥಾನಗಳ ಹೆಚ್ಚಳದ ವಿಚಾರ ಹಾಗೂ ರಾಜ್ಯಗಳ ಹಿತಾಸಕ್ತಿಗಳನ್ನ ರಕ್ಷಿಸಿಕೊಳ್ಳುವ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಭೆಯ ಬಳಿಕ ಈ ವಿಚಾರದಲ್ಲಿ ಮುಂದಿನ ನಿಲುವು ಏನಿರಲಿದೆ ಎಂಬುದು ತಿಳಿದುಬರಲಿದೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ZEENEWS TRENDING STORIES