SOCIAL MEDIA

Newsletter

PARTNER SITES
Select Language Select State

ಧರ್ಮಸ್ಥಳದ ಸೌಜನ್ಯಾ ಪ್ರಕರಣ ತನಿಖೆ ಚುರುಕು : ಹಿಂದಿನ ತನಿಖಾಧಿಕಾರಿಗಳು ಹಾಗೂ ಸಿಬ್ಬಂದಿಗೆ ನೋಟಿಸ್

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ SIT ಮರುತನಿಖೆ ಚುರುಕುಗೊಳಿಸಿದೆ. ವಿಶೇಷ ತನಿಖಾ ತಂಡವು ಹಿಂದಿನ ತನಿಖಾ ಹಂತಗಳಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಬಿರುಸಿನ ನೋಟಿಸ್‌ಗಳನ್ನು ಜಾರಿಗೊಳಿಸಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..

Written By Krishna NK
Published: Oct 27, 2026, 02:50 PM IST | Updated: Oct 27, 2026, 02:52 PM IST
Image Credit: Soujanya case
Join

ಮಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ಮತ್ತು ನ್ಯಾಯಕ್ಕಾಗಿ ದಶಕಗಳ ಕಾಲ ಹೋರಾಟ ನಡೆದಿರುವ ಧರ್ಮಸ್ಥಳದ ಧರ್ಮಸ್ಥಳದ ಕುಮಾರಿ ಸೌಜನ್ಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ತನಿಖೆ ತೀವ್ರಗೊಂಡಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರಚಿಸಲಾಗಿರುವ ಹೊಸ ಎಸ್‌ಐಟಿ ತಂಡವು, ಪ್ರಕರಣದ ಹಿಂದಿನ ತನಿಖಾ ಹಂತಗಳಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಬಿರುಸಿನ ನೋಟಿಸ್‌ಗಳನ್ನು ಜಾರಿಗೊಳಿಸಿದೆ.

ಪ್ರಕರಣದ ಆರಂಭಿಕ ಹಂತದಿಂದಲೂ ತನಿಖೆ ನಡೆಸಿದ್ದ ಬೆಳ್ತಂಗಡಿ ಪೊಲೀಸ್ ಠಾಣೆ, ಸಿಐಡಿ (CID) ಹಾಗೂ ಸಿಬಿಐ (CBI) ತನಿಖೆಯ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸಿದ್ದ 15ಕ್ಕೂ ಹೆಚ್ಚು ಅಧಿಕಾರ ಹಾಗೂ ಸಿಬ್ಬಂದಿಯನ್ನು ವಿಚಾರಣೆಗೆ ಹಾಜರಾಗುವಂತೆ ಸಿಆರ್‌ಪಿಸಿ ಸೆಕ್ಷನ್ 160ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ಆಗಿನ ಬೆಳ್ತಂಗಡಿ ಠಾಣೆಯ ಇನ್‌ಸ್ಪೆಕ್ಟರ್ ಭಾಸ್ಕರ್ ರೈ, ಪಿಎಸ್‌ಐ ಯೋಗೀಶ್, ಸಿಐಡಿ ತನಿಖಾಧಿಕಾರಿಯಾಗಿದ್ದ ಡಿವೈಎಸ್ಪಿ ರುದ್ರಮುನಿ ಸೇರಿದಂತೆ ಪ್ರಮುಖ ಅಧಿಕಾರಿಗಳಿಗೆ ಬುಲಾವ್ ನೀಡಲಾಗಿದೆ. ಅಂದಿನ ಬೆಳ್ತಂಗಡಿ ಠಾಣೆಯ ಎಎಸ್‌ಐ ಕಲೈಮಾರ್, ಮಹಿಳಾ ಹೆಡ್ ಕಾನ್‌ಸ್ಟೇಬಲ್ ಸವಿತಾ ಶೆಟ್ಟಿ ಹಾಗೂ ಸಿಬ್ಬಂದಿಯಾದ ಸುಂದರ್ ಶೆಟ್ಟಿ, ಕೃಷ್ಣ, ರಿಷಬ್, ನವೀನ್ ಮತ್ತು ಭಾಸ್ಕರ್ ಅವರಿಗೂ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಸಿಬ್ಬಂದಿಗೂ ನೋಟಿಸ್ ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನುಷ್ಟು ಹಿರಿಯ ಅಧಿಕಾರಿಗಳಿಗೂ ನೋಟಿಸ್ ನೀಡುವ ಸಾಧ್ಯತೆಯಿದೆ.

ಪ್ರಕರಣದ ಹಿನ್ನೆಲೆ  
2012ರ ಅಕ್ಟೋಬರ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ 17 ವರ್ಷದ ಕುಮಾರಿ ಸೌಜನ್ಯಾ ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಪಹರಣಕ್ಕೊಳಗಾಗಿ, ಅತ್ಯಾಚಾರಕ್ಕೀಡಾಗಿ ಕ್ರೂರವಾಗಿ ಹತ್ಯೆಯಾಗಿದ್ದಳು. ಆಕೆಯ ಮೃತದೇಹ ಧರ್ಮಸ್ಥಳದ ಮಂಜುನಾಥೇಶ್ವರ ಕಾಲೇಜು ಹತ್ತಿರದ ಕಾಡಿನಲ್ಲಿ ಪತ್ತೆಯಾಗಿತ್ತು.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯ ಬೆಳ್ತಂಗಡಿ ಪೊಲೀಸರು ಈ ಪ್ರಕರಣದಲ್ಲಿ ಸಂತೋಷ್ ರಾವ್ ಎಂಬಾತನನ್ನು ಬಂಧಿಸಿ ಆತನೇ ಏಕಾಂಗಿಯಾಗಿ ಈ ಕೃತ್ಯ ಎಸಗಿರುವುದಾಗಿ ತಿಳಿಸಿದ್ದರು. ಆದರೆ, ಸ್ಥಳೀಯರು ಮತ್ತು ಸಂತ್ರಸ್ತೆಯ ಕುಟುಂಬ ಪೊಲೀಸರು ನಿಜವಾದ ಪ್ರಭಾವಿ ಆರೋಪಿಗಳನ್ನು ರಕ್ಷಿಸಲು ಮಾನಸಿಕ ಅಸ್ಥಿರತೆಯುಳ್ಳ ಸಂತೋಷ್ ರಾವ್ ಅನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗಳನ್ನು ನಡೆಸಿದ್ದರು.

ಸಾರ್ವಜನಿಕರ ಒತ್ತಡದ ಮೇರೆಗೆ ಪ್ರಕರಣವನ್ನು ಮೊದಲು ಸಿಐಡಿಗೆ ಹಾಗೂ ನಂತರ ಸಿಬಿಐಗೆ ವರ್ಗಾಯಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಸಿಬಿಐ ನ್ಯಾಯಾಲಯವು, ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ 2023ರ ಜೂನ್‌ನಲ್ಲಿ ಏಕೈಕ ಆರೋಪಿ ಸಂತೋಷ್ ರಾವ್‌ನನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿತ್ತು.

ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ 
ಸಿಬಿಐ ನ್ಯಾಯಾಲಯದ ತೀರ್ಪಿನ ಬಳಿಕ ಸೌಜನ್ಯಾ ಅವರಿಗೆ ನ್ಯಾಯ ದೊರಕಿಸಿಕೊಡಲು ಮರುತನಿಖೆ ನಡೆಸುವಂತೆ ಆಗ್ರಹಿಸಿ ಕುಟುಂಬಸ್ಥರು ಮತ್ತು ಹೋರಾಟಗಾರರು ಕಾನೂನು ಹೋರಾಟ ಮುಂದುವರಿಸಿದರು. ಅಂತಿಮವಾಗಿ ಸುಪ್ರೀಂ ಕೋರ್ಟ್‌ನ ಆದೇಶದಂತೆ ಈಗ ಹೊಸದಾಗಿ ಎಸ್‌ಐಟಿ ರಚನೆಯಾಗಿದ್ದು, ಪ್ರಾಥಮಿಕ ಹಂತದಲ್ಲಿ ಸಾಕ್ಷ್ಯ ನಾಶಪಡಿಸಿದ ಆರೋಪಗಳ ಕುರಿತು ಕೂಲಂಕಷ ತನಿಖೆ ಕೈಗೊಳ್ಳಲಾಗಿದೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES