ಬುಡಕಟ್ಟು ಸಮುದಾಯವರ ಶ್ರೇಯೋಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಸದಾ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಚಿತ್ರದುರ್ಗದ ಸಮೀಪ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುತ್ತಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಿಳಿಸಿದ್ದಾರೆ.
ಇಂದು (ಅ. 27) ಬೆಂಗಳೂರಿನಲ್ಲಿ ಜರುಗಿದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ, ಚಿತ್ರದುರ್ಗದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ತಲೆ ಎತ್ತಲಿದೆ. 120 ಎಕರೆ ಜಾಗದಲ್ಲಿ ʼಬುಡಕಟ್ಟು ವಿಶ್ವವಿದ್ಯಾಲಯʼವನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಬುಡಕಟ್ಟು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುಧೀರ್ಘ ಸಮಾಲೋಚನೆ ನಡೆಸಲಾಗಿದೆ. ಈ ಕುರಿತಂತೆ ಶೀಘ್ರದಲ್ಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದು ಬುಡಕಟ್ಟು ಸಮುದಾಯದವರ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ನೆರವಾಗುವ ಉದ್ದೇಶ ಹೊಂದಿದೆ. ಬುಡಕಟ್ಟು ಕಲೆ, ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಸಾಂಪ್ರಾಯಿಕ ಜ್ಞಾನವನ್ನು ಅಧ್ಯಯನ ಮಾಡಬಹುದಾಗಿದೆ ಎಂದರು.
ಬುಡಕಟ್ಟು ಸಮುದಾಯಗಳ ಜೀವನ ಶೈಲಿ, ಸಾಮಾಜಿಕ ಅಭಿವೃದ್ಧಿ, ಆರ್ಥಿಕ ಅಭಿವೃದ್ಧಿ ಹಾಗೂ ಇತರೆ ವ್ಯವಸ್ಥೆಗಳ ಕುರಿತು ಸಂಶೋಧನೆಗೆ ಉತ್ತೇಜನ ನೀಡಬುದಾಗಿದೆ. ಕೌಶಲ್ಯಾಧಾರಿತ ಶಿಕ್ಷಣ, ವೃತ್ತಿಪರ ಕೋರ್ಸ್ ಮೂಲಕ ಉದ್ಯೋಗಕ್ಕೆ ಅಗತ್ಯ ಶಿಕ್ಷಣ ಸಾಮರ್ಥ್ಯ ಹೆಚ್ಚಿಸಬಹುದಾಗಿದೆ ಎಂದು ಸಚಿವ ರಘುಮೂರ್ತಿ ತಿಳಿಸಿದರು.
ಈ ವೇಳೆ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದವರಿಗೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ, ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾದ ಎಲ್ಲರೂ ಒಂದೊಂದು ಸಾಧನೆ ಮಾಡಿದವರೇ ಆಗಿದ್ದಾರೆ ಎಂದರು.
ಪ್ರಶಸ್ತಿ ಆಯ್ಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಉಗ್ರಪ್ಪ ಅವರಿಗೂ ವೇದಿಕೆಯಲ್ಲಿಯೇ ಸಚಿವರು ಸ್ಪಷ್ಟನೆ ನೀಡಿದರು. ಪ್ರಶಸ್ತಿಗೆ ಆಯ್ಕೆಯಾದವರು ತಮ್ಮದೇ ರೀತಿಯಲ್ಲಿ ಸಮುದಾಯದ ಏಳಿಗೆಗೆ, ದಮನಿತರ ಪರವಾಗಿ ದನಿ ಎತ್ತಿದ್ದಾರೆ ಎಂದು ಹೇಳಿದರು.
ವೀರ ಮದಕರಿನಾಯಕ ವಾಲ್ಮೀಕ ಸಂಘ, ರೈಲ್ವೆ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ಎಂ.ಜಿ. ರೈಲ್ವೆ ಕಾಲೋನಿ ಬಳಿ ನಡೆದ ವಾಲ್ಮೀಕಿ ಜಯಂತಿಯಲ್ಲಿ ಭಾಷಣ ಮಾಡಿದ ರಘುಮೂರ್ತಿ ಅವರು ಶ್ರೀ ವಾಲ್ಮೀಕಿಯವರು ಮಾತೃಹೃದಯ ಹೊಂದಿದ ಸಂತ ಶ್ರೇಷ್ಠ ಮಹಾನ್ ಮಾನವತಾ ವಾದಿ, ದಾರ್ಶನಿಕ, ಮಾದರಿ ನೀತಿ ಶಾಸ್ತ್ರಜ್ಞ, ತತ್ವಜ್ಞಾನಿ, ಮಹಾನ್ ಚಿಂತಕ, ಸಮಾಜ ಸುಧಾರಕ ಎಂದು ಸಚಿವರು ತಿಳಿಸಿದ್ದಾರೆ.
ಮನೆಯಲ್ಲಿ ವಾಲ್ಮೀಕಿಗೆ ಪೂಜೆ ಮಾಡಿ: ಸ್ವಾಮೀಜಿಗಳ ಕರೆ:
ಈ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರುಗಳಾದ ಡಾ. ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗಳು, ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕರೆ ನೀಡಿದರು. ಆರ್ಥಿಕವಾಗಿ ಶಕ್ತಿವಂತರು ಅನ್ನದಾಸೋಹ ಕೂಡ ಏರ್ಪಡಿಸಬೇಕು. ಅದು ಮಾಡಲು ಆಗದವರು ಮನೆಯಲ್ಲಿ ಕಡ್ಡಾಯವಾಗಿ ಪೂಜೆ ಮಾಡಿ, ಹಬ್ಬದಂತೆ ಜಯಂತಿಯನ್ನು ಆಚರಿಸಬೇಕು ಎಂದು ಸ್ವಾಮೀಜಿಗಳು ತಿಳಿಸಿದರು.
ಬೆಂಗಳೂರಿನಲ್ಲಿರುವ ಮೆಟ್ರೋ ನಿಲ್ದಾಣವೊಂದಕ್ಕೆ ಮಹರ್ಷಿ ವಾಲ್ಮೀಕಿ ಹೆಸರನ್ನು ಇಡಬೇಕು ಎಂದು ಸ್ವಾಮೀಜಿಗಳು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.
ಮಾಜಿ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಸಂಸದರಾದ ಬಿ.ವಿ. ನಾಯಕ್, ನಿವೃತ್ತ ನ್ಯಾಯಮೂರ್ತಿಗಳಾದ ಎನ್.ಎಸ್. ಪಾಟೀಲ್, ಸಂಘದ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.