ಕೇಂದ್ರದ ವಿರುದ್ಧ ಕಾನೂನು ಹೋರಾಟದ ಜತೆ ದೆಹಲಿ ಚಲೋ ಎಚ್ಚರಿಕೆ : ಸಿಎಂ ಡಿಕೆ
ಬೆಳಗಾವಿ ಅಧಿವೇಶನ ಮುಗಿಯುವುದರೊಳಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡದಿದ್ದರೆ ಅಥವಾ ನಿಯೋಗದ ಭೇಟಿಗೆ ಸಮಯ ನೀಡದಿದ್ದರೆ, ಸುಪ್ರೀಂ ಕೋರ್ಟ್ ಮೊರೆ ಹೋಗುವ ಜೊತೆಗೆ ದೆಹಲಿ ಚಲೋ ಹೋರಾಟ ನಡೆಸುವುದಾಗಿ ಸಿಎಂ ಎಚ್ಚರಿಕೆ ಕೊಟ್ಟಿದ್ದಾರೆ.
ಬೆಂಗಳೂರು: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಮತ್ತು ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ರಾಜ್ಯ ಸರ್ಕಾರ ಸಮರ ಸಾರಿದೆ. ಬೆಳಗಾವಿ ಅಧಿವೇಶನ ಮುಗಿಯುವುದರ ಒಳಗಾಗಿ ಕೇಂದ್ರ ಸರ್ಕಾರ ರಾಜ್ಯದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ, ಕಾನೂನು ಹೋರಾಟದ ಜೊತೆಗೆ ದೆಹಲಿ ಚಲೋ ಹೋರಾಟ ನಡೆಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾ ಪೈಸೆ ನೀಡಿಲ್ಲ. ಈ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿಗಳ ಬಳಿಯೂ ಮಾತನಾಡಿದ್ದೇನೆ. ಬೆಳಗಾವಿ ಅಧಿವೇಶನ ಮುಗಿಯುವವರೆಗೂ ನಾವು ಕಾಯುತ್ತೇವೆ. ಅಷ್ಟರೊಳಗೆ ಬರ ಪರಿಹಾರ ಬಿಡುಗಡೆ ಮಾಡದಿದ್ದರೆ ಅಥವಾ ನಮ್ಮ ನಿಯೋಗದ ಭೇಟಿಗೆ ಸಮಯ ನೀಡದಿದ್ದರೆ, ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುವ ಜೊತೆಗೆ ದೆಹಲಿ ಚಲೋ ಹೋರಾಟವನ್ನು ಆರಂಭಿಸುತ್ತೇವೆ ಎಂದು ಕಿಡಿಕಾರಿದರು.
ಆಶಾ ಕಾರ್ಯಕರ್ತೆಯರಿಗೆ ಭರವಸೆ ವಿಚಾರ
ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಕೇವಲ ಎರಡು ಸಾವಿರ ರೂಪಾಯಿ ಬಿಟ್ಟರೆ ಬೇರೇನೂ ನೀಡುತ್ತಿಲ್ಲ. ಆದರೆ, ಬಿಜೆಪಿಯವರು ಸುಮ್ಮನೆ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ನಾವು ಚುನಾವಣೆಯಲ್ಲಿ ಹೇಳಿದಂತೆ ಕೊಡಲು ಸಿದ್ಧರಿದ್ದೇವೆ. ಸರ್ಕಾರ ಭರವಸೆ ನೀಡಿದರೂ ಪ್ರತಿಭಟನೆ ಮುಂದುವರೆಸಿರುವುದು ಸರಿಯಲ್ಲ, ನಮ್ಮ ಮೇಲೆ ನಂಬಿಕೆ ಇಡಿ ಎಂದು ಮನವಿ ಮಾಡಿದರು.
ಕ್ಷೇತ್ರ ಮರುವಿಂಗಡಣೆಗೆ ವಿರೋಧ; ದಕ್ಷಿಣದ ಸಿಎಂಗಳ ಸಭೆ
ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಸಿಎಂ, ನಾವು ಮಹಿಳಾ ಮೀಸಲಾತಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ, ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಮಾಡುವ ಕ್ಷೇತ್ರ ಪುನರ್ ವಿಂಗಡಣೆಗೆ ನಮ್ಮ ಬೆಂಬಲವಿಲ್ಲ. ದಕ್ಷಿಣ ಭಾರತದ ರಾಜ್ಯಗಳ ಸಾರ್ವಭೌಮತ್ವವನ್ನು ಕಾಪಾಡಬೇಕಿದೆ. ಈ ಹಿನ್ನೆಲೆಯಲ್ಲಿ ನಾನು ಇಂದು ದೆಹಲಿಗೆ ತೆರಳುತ್ತಿದ್ದು, ನಾಳೆ ತೆಲಂಗಾಣ ಮತ್ತು ಕೇರಳ ಮುಖ್ಯಮಂತ್ರಿಗಳೊಂದಿಗೆ ಸೇರಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದೇವೆ. ನಮ್ಮ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚಿಸಲಾಗುವುದು ಎಂದರು.
ಕುಮಾರಸ್ವಾಮಿಗೆ ಟಾಂಗ್, ಕನ್ನಡ ಧ್ವಜಕ್ಕೆ ಸ್ಥಾನಮಾನ
ಮಸೂದೆಗೆ ಬೆಂಬಲ ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಡಿ.ಕೆ. ಶಿವಕುಮಾರ್, ಕನ್ನಡಿಗರ ಹಿತದೃಷ್ಟಿಯಿಂದ ಬೆಂಬಲ ನೀಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ. ಆದರೆ, ಅವರ ಅಧಿಕಾರಾವಧಿಯಲ್ಲಿ ಕನ್ನಡಿಗರಿಗೆ ಏನು ಮಾಡಿದ್ದಾರೆ ಎಂಬುದನ್ನು ಮೊದಲು ಹೇಳಲಿ, ಬರೀ ಖಾಲಿ ಮಾತು ಬೇಡ ಎಂದು ಟಾಂಗ್ ನೀಡಿದರು.
ಇದೇ ವೇಳೆ ಕನ್ನಡ ಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡುವ ವಿಚಾರವಾಗಿ ಮಾತನಾಡಿದ ಸಿಎಂ, ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡುತ್ತೇವೆ ಮತ್ತು ಸೂಕ್ತ ಮಸೂದೆಯನ್ನು ತಂದು ಬಿಲ್ ಪಾಸ್ ಮಾಡುತ್ತೇವೆ ಎಂದು ಭರವಸೆ ನೀಡಿದರು. ಕೊನೆಯಲ್ಲಿ, ಬೆಳಗಾವಿ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟದ ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಕುರಿತ ಪ್ರಶ್ನೆಗೆ ನೋಡೋಣ ಎಂದಷ್ಟೇ ಉತ್ತರಿಸಿ ಸಿಎಂ ತೆರಳಿದರು.