ಜಿಬಿಎ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಬೆಂಗಳೂರು ಪಾಲಿಕೆ ಚುನಾವಣೆ ಮತ್ತೆ ಮುಂದಕ್ಕೆ?
ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಜನವರಿ 31ರವರೆಗೆ ಗಡುವು ವಿಸ್ತರಣೆಗೆ ಚುನಾವಣಾ ಆಯೋಗ ಮನವಿ ಮಾಡಿದೆ. ಈ ಹಿನ್ನಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ- ಜಿಬಿಎ ಚುನಾವಣೆ ಮತ್ತೆ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಪಾಲಿಕೆ ಚುನಾವಣೆ ನಡೆಸಲು ಹಳೆಯ ಮತದಾರರ ಪಟ್ಟಿಯನ್ನೇ ಬಳಸಲು ಅವಕಾಶ ನೀಡುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಮತ್ತೊಂದೆಡೆ ಹೊಸ ಮತದಾರರ ಪಟ್ಟಿ ಸಿದ್ಧಪಡಿಸಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು 2027ರ ಜನವರಿ 31ರವರೆಗೆ ಕಾಲಾವಕಾಶ ವಿಸ್ತರಿಸುವಂತೆ ಮನವಿ ರಾಜ್ಯ ಚುನಾವಣಾ ಆಯೋಗ ಮನವಿ ಮಾಡಿದೆ. ಈ ಹಿನ್ನಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ- ಜಿಬಿಎ ಚುನಾವಣೆ ಮತ್ತೆ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಪಾಲಿಕೆ ಚುನಾವಣೆಗೆ ಹಳೆಯ ಮತದಾರರ ಪಟ್ಟಿಯೇ ಆಧಾರ?
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಎಸ್‌ಐಆರ್ ಪ್ರಕ್ರಿಯೆಗೂ ಮೊದಲಿನ ಮತದಾರರ ಪಟ್ಟಿಯನ್ನು ಬಳಸಲು ಅನುಮತಿ ನೀಡುವಂತೆ ಚುನಾವಣಾ ಆಯೋಗ ಕೋರಿದೆ. 2026ರ ಏಪ್ರಿಲ್ 18ರಂದು ಪ್ರಕಟವಾಗಿರುವ ಅಂತಿಮ ಮತದಾರರ ಪಟ್ಟಿಯ ಆಧಾರದಲ್ಲೇ ಚುನಾವಣೆ ನಡೆಸಲು ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಚುನಾವಣೆಗೆ ಎಸ್‌ಐಆರ್ ಡೇಟಾ ಸಮಸ್ಯೆ:
ಎಸ್‌ಐಆರ್ ಪ್ರಕ್ರಿಯೆಯ ಬಳಿಕ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದರೂ, ಸಂಪೂರ್ಣ ದೃಢೀಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಈ ಹಿಂದೆ ಸುಪ್ರೀಂ ಕೋರ್ಟ್ ಜುಲೈ 17ರಂದು ಐದು ನಗರ ಪಾಲಿಕೆಗಳ ಚುನಾವಣೆಯನ್ನು ಡಿಸೆಂಬರ್ 31ರೊಳಗೆ ಪೂರ್ಣಗೊಳಿಸುವಂತೆ ನಿರ್ದೇಶಿಸಿತ್ತು. ಆದರೆ ಹೊಸ ಮತದಾರರ ಮಾಹಿತಿ ಲಭ್ಯವಾಗುವವರೆಗೆ ಕಾಯಬೇಕಾದರೆ, ವಾರ್ಡ್‌ವಾರು ಪಟ್ಟಿ ಸಿದ್ಧಪಡಿಸಲು ಕನಿಷ್ಠ ಎರಡು ತಿಂಗಳು ಹಾಗೂ ಚುನಾವಣೆ ನಡೆಸಲು ಮತ್ತೊಂದು ತಿಂಗಳು ಬೇಕಾಗಲಿದೆ ಎಂದು ಆಯೋಗ ಅಂದಾಜಿಸಿದೆ. ಹೀಗಾಗಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು 2027ರ ಜನವರಿ 31ರವರೆಗೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದೆ.
ಹಳೆಯ ಮತದಾರರ ಪಟ್ಟಿಯನ್ನು ಬಳಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದರೆ, ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಜನವರಿ 31ರೊಳಗೆ ಪೂರ್ಣಗೊಳಿಸಲು ಸಾಧ್ಯವಾಗಲಿದೆ ಎಂದು ಆಯೋಗ ತಿಳಿಸಿದೆ.
ಒಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.