SOCIAL MEDIA

Newsletter

PARTNER SITES
Select Language Select State

ಅಚ್ಚುಕಟ್ಟು ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ CADAಗಳ ಕಾರ್ಯಚಟುವಟಿಕೆ ಮತ್ತಷ್ಟು ಪರಿಣಾಮಕಾರಿಯಾಗಲಿ: ಸಚಿವ ಎನ್.ಚಲುವರಾಯಸ್ವಾಮಿ

ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಗಳ ನಿರ್ದೇಶನಾಲಯದ ಸಭೆಯು ಸಚಿವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ CADA ಪ್ರಾಧಿಕಾರಗಳ ಕಾರ್ಯನಿರ್ವಹಣೆ, ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿ, ನೀರಾವರಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆ, ನೀರಾವರಿ ಬಳಕೆದಾರರ ಸಂಘಗಳ ಬಲವರ್ಧನೆ ಹಾಗೂ ರೈತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ವಿವರವಾಗಿ ಚರ್ಚಿಸಲಾಯಿತು.

Written By Chetana Devarmani
Published: Sep 28, 2026, 10:04 PM IST | Updated: Sep 28, 2026, 10:05 PM IST
Join

ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ನೀರಿನ ಸಮರ್ಪಕ ಬಳಕೆ, ಕೃಷಿ ಉತ್ಪಾದಕತೆ ಹೆಚ್ಚಳ ಹಾಗೂ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಗಳ (CADA) ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಗಳ ನಿರ್ದೇಶನಾಲಯದ ಸಭೆಯು ಸಚಿವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ CADA ಪ್ರಾಧಿಕಾರಗಳ ಕಾರ್ಯನಿರ್ವಹಣೆ, ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿ, ನೀರಾವರಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆ, ನೀರಾವರಿ ಬಳಕೆದಾರರ ಸಂಘಗಳ ಬಲವರ್ಧನೆ ಹಾಗೂ ರೈತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ವಿವರವಾಗಿ ಚರ್ಚಿಸಲಾಯಿತು. ಈಗಾಗಲೇ ಕಾಮಗಾರಿ ನಡೆದಿರುವ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಸಚಿವರು ತಿಳಿಸಿದರು. ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳು ಕೇವಲ ಮೂಲಸೌಕರ್ಯ ನಿರ್ಮಾಣಕ್ಕೆ ಸೀಮಿತವಾಗದೆ, ರೈತರಿಗೆ ನೇರವಾಗಿ ಪ್ರಯೋಜನವಾಗುವ ರೀತಿಯಲ್ಲಿ ಹಾಗೂ ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಪೂರಕವಾಗುವಂತೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.

ನೀರಾವರಿ ಬಳಕೆದಾರರ ಸಂಘಗಳು (WUCS) ಅಚ್ಚುಕಟ್ಟು ಪ್ರದೇಶಗಳ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವುಗಳ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಸಚಿವರು ತಿಳಿಸಿದರು. ನೀರಿನ ಸಮರ್ಪಕ ಹಂಚಿಕೆ ಮತ್ತು ಬಳಕೆಯಲ್ಲಿ ರೈತರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು, ನೀರಿನ ಮಿತವ್ಯಯದ ಬಳಕೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಅಚ್ಚುಕಟ್ಟು ಪ್ರದೇಶಗಳ ನಿರ್ವಹಣೆಯಲ್ಲಿ ರೈತರ ಸಹಭಾಗಿತ್ವವನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

CADA ವ್ಯಾಪ್ತಿಯಲ್ಲಿ ಹಲವು ಹುದ್ದೆಗಳು ಖಾಲಿ ಇರುವ ಪರಿಣಾಮ ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ನಿರ್ದೇಶನಾಲಯದ ವ್ಯಾಪ್ತಿಯಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಕುರಿತು ಮುಖ್ಯಮಂತ್ರಿಗಳ ನಿರ್ದೇಶನವೂ ಇರುವ ಹಿನ್ನೆಲೆಯಲ್ಲಿ, ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.

ಅಚ್ಚುಕಟ್ಟು ಪ್ರದೇಶಗಳಲ್ಲಿ ನೀರಾವರಿ ಸೌಲಭ್ಯದ ಜೊತೆಗೆ ಕೃಷಿ ಉತ್ಪಾದಕತೆ ಹೆಚ್ಚಳ, ಸೂಕ್ತ ಬೆಳೆ ಪದ್ಧತಿಗಳ ಉತ್ತೇಜನ ಹಾಗೂ ರೈತರಿಗೆ ಅಗತ್ಯವಿರುವ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಚಿವರು ಹೇಳಿದರು. ಭೂಮಿಯ ಉತ್ಪಾದಕತೆ ಕುಂಠಿತವಾಗಿರುವ ಪ್ರದೇಶಗಳನ್ನು ಗುರುತಿಸಿ ಭೂಮಿ ಪುನಶ್ಚೇತನ ಕಾರ್ಯಗಳನ್ನು ಕೈಗೊಳ್ಳಬೇಕು. ಅಚ್ಚುಕಟ್ಟು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ಸ್ಥಳೀಯವಾಗಿ ಗುರುತಿಸಿ, ಅಗತ್ಯವಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಸೂಚಿಸಿದರು. CADA ಪ್ರಾಧಿಕಾರಗಳು ಸಂಬಂಧಿಸಿದ ಇಲಾಖೆಗಳು, ನೀರಾವರಿ ಬಳಕೆದಾರರ ಸಂಘಗಳು ಹಾಗೂ ತಾಂತ್ರಿಕ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ CADA ಪ್ರಾಧಿಕಾರದ ನಿರ್ದೇಶಕರು, ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES