SOCIAL MEDIA

Newsletter

PARTNER SITES
Select Language Select State

ಸಿದ್ದರಾಮಯ್ಯನವರ ತೇಜೋವಧೆಗೆ ಸ್ಟಿಂಗ್ ಆಪರೇಷನ್? ಕಾಂಗ್ರೆಸ್‌ನವರೇ ಶಾಮೀಲು ಎಂದ ಯತೀಂದ್ರ ಸಿದ್ದರಾಮಯ್ಯ!

ಈ ಪ್ರಕರಣದಿಂದ ಸಿದ್ದರಾಮಯ್ಯ ಅವರು ತೀವ್ರ ಬೇಸರಗೊಂಡಿದ್ದಾರೆ ಎಂದು ಯತೀಂದ್ರ ತಿಳಿಸಿದ್ದಾರೆ. ಸುಮಾರು ನಾಲ್ಕು ದಶಕಗಳ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯನವರು ಹಲವು ರಾಜಕೀಯ ಸವಾಲುಗಳನ್ನ ಎದುರಿಸಿದ್ದಾರೆ. ಇಂತಹ ಗಂಭೀರ ಆರೋಪಗಳು ಕೇಳಿಬಂದಾಗ ಬೇಸರವಾಗುವುದು ಸಹಜ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Written By Puttaraj K Alur
Published: Oct 23, 2026, 12:48 PM IST | Updated: Oct 23, 2026, 01:19 PM IST
Image Credit: Yathindra Siddaramaiah
Join

Sting Operation Row: ಕರ್ನಾಟಕ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮಾಡಿರುವ ಗಂಭೀರ ಆರೋಪಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ. ಸಿದ್ದರಾಮಯ್ಯರ ಹೆಸರಿಗೆ ಕಳಂಕ ತರಲು ಮತ್ತು ಅವರನ್ನ ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ಈ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎಂದು ಯತೀಂದ್ರ ಆರೋಪಿಸಿದ್ದಾರೆ. ಅಷ್ಟೇ ಅಲ್ಲ ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರೂ ಭಾಗಿಯಾಗಿರುವ ಸಾಧ್ಯತೆ ಇದೆ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ಸಮಗ್ರ ತನಿಖೆಯಿಂದ ಬಹಿರಂಗವಾಗಬೇಕು ಎಂದು ಒತ್ತಾಯಿಸಿದ್ದಾರೆ. ಈ ಪ್ರಕರಣವನ್ನ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿರುವ ಅವರು, ತನಿಖೆಯಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರದಿದ್ದರೆ ಮುಂದಿನ ಕ್ರಮಗಳ ಬಗ್ಗೆ ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್‌ನವರೇ ಶಾಮೀಲಾಗಿದ್ದಾರೆಯೇ?

ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋದಲ್ಲಿ ತಮ್ಮ ಪಕ್ಷದವರೂ ಕಾಣಿಸಿಕೊಂಡಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದು ಯತೀಂದ್ರ ಹೇಳಿದ್ದಾರೆ. ಒಬ್ಬ ಮಾಧ್ಯಮ ಮುಖ್ಯಸ್ಥರೂ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬುದನ್ನ ಉಲ್ಲೇಖಿಸಿದ ಅವರು, ಪ್ರಕರಣದ ಹಿಂದಿರುವ ನಿಜವಾದ ಉದ್ದೇಶ ಮತ್ತು ಭಾಗಿಯಾಗಿರುವ ವ್ಯಕ್ತಿಗಳ ಪಾತ್ರದ ಬಗ್ಗೆ ತನಿಖೆಯಿಂದ ಸ್ಪಷ್ಟತೆ ಬರಬೇಕು ಎಂದು ತಿಳಿಸಿದ್ದಾರೆ.

ಆದರೆ ಕೆಲವರು ಮಾಡಿರುವ ತಪ್ಪಿಗೆ ಇಡೀ ಕಾಂಗ್ರೆಸ್ ಪಕ್ಷವನ್ನೇ ಹೊಣೆಗಾರನನ್ನಾಗಿ ಮಾಡುವುದು ಸರಿಯಲ್ಲ ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಸ್ಟಿಂಗ್ ಆಪರೇಷನ್‌ನಲ್ಲಿ ನಿಜವಾಗಿಯೂ ಯಾರು ಭಾಗಿಯಾಗಿದ್ದಾರೆ? ಇದರ ಹಿಂದೆ ರಾಜಕೀಯ ಉದ್ದೇಶವಿದೆಯೇ? ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ? ಎಂಬ ಪ್ರಶ್ನೆಗಳಿಗೆ ತನಿಖೆಯೇ ಉತ್ತರ ನೀಡಬೇಕಿದೆ.

ಪುತ್ತೂರು ಟಿಕೆಟ್‌ಗಾಗಿ ನಡೆದಿತ್ತೇ ಸ್ಟಿಂಗ್?

ಈ ಪ್ರಕರಣದ ಹಿಂದಿನ ಉದ್ದೇಶದ ಕುರಿತು ಮಾತನಾಡಿದ ಯತೀಂದ್ರ, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆಯೊಬ್ಬರು ಪುತ್ತೂರು ಕ್ಷೇತ್ರದಿಂದ ಟಿಕೆಟ್ ಪಡೆಯುವ ಆಕಾಂಕ್ಷಿಯಾಗಿದ್ದರು ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ. ರಾಜಕೀಯ ಲಾಭಕ್ಕಾಗಿ ಈ ಪ್ರಕರಣವನ್ನ ಬಳಸಿಕೊಳ್ಳಲಾಗಿದೆಯೇ ಮತ್ತು ಸಿದ್ದರಾಮಯ್ಯರ ಹೆಸರಿಗೆ ಧಕ್ಕೆ ತರುವ ಪ್ರಯತ್ನ ನಡೆದಿದೆಯೇ ಎಂಬುದನ್ನ ಪರಿಶೀಲಿಸಬೇಕಾಗಿದೆ ಎಂಬುದು ಅವರ ನಿಲುವಾಗಿದೆ.

ಸಿದ್ದರಾಮಯ್ಯರ ರಾಜಕೀಯ ಘನತೆಯನ್ನ ಹಾಳುಮಾಡಲು ಹಾಗೂ ಅವರ ರಾಜಕೀಯ ಜೀವನಕ್ಕೆ ಕಳಂಕ ತರಲು ಈ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎಂದು ಯತೀಂದ್ರ ಆರೋಪಿಸಿದ್ದಾರೆ. ಆದರೆ ಈ ಆರೋಪಗಳ ಸತ್ಯಾಸತ್ಯತೆ ತನಿಖೆಯಿಂದ ದೃಢಪಡಬೇಕಿದೆ. ಪ್ರಕರಣದಲ್ಲಿ ಉಲ್ಲೇಖಿಸಲಾದ ವ್ಯಕ್ತಿಗಳ ಪಾತ್ರದ ಕುರಿತು ಅಧಿಕೃತ ತನಿಖೆಯ ಫಲಿತಾಂಶ ಹೊರಬರುವವರೆಗೆ ಯಾವುದೇ ತೀರ್ಮಾನಕ್ಕೆ ಬರುವುದು ಸೂಕ್ತವಲ್ಲ.

ತಂದೆಯ ಬಗ್ಗೆ ಕುಟುಂಬಕ್ಕೆ ಸಂಪೂರ್ಣ ವಿಶ್ವಾಸ

ಈ ಪ್ರಕರಣದಿಂದ ಸಿದ್ದರಾಮಯ್ಯ ಅವರು ತೀವ್ರ ಬೇಸರಗೊಂಡಿದ್ದಾರೆ ಎಂದು ಯತೀಂದ್ರ ತಿಳಿಸಿದ್ದಾರೆ. ಸುಮಾರು ನಾಲ್ಕು ದಶಕಗಳ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯನವರು ಹಲವು ರಾಜಕೀಯ ಸವಾಲುಗಳನ್ನ ಎದುರಿಸಿದ್ದಾರೆ. ಇಂತಹ ಗಂಭೀರ ಆರೋಪಗಳು ಕೇಳಿಬಂದಾಗ ಬೇಸರವಾಗುವುದು ಸಹಜ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ತಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ ಎಂಬ ದೃಢವಾದ ನಂಬಿಕೆ ಕುಟುಂಬಕ್ಕಿದೆ ಎಂದು ಹೇಳಿದ ಯತೀಂದ್ರ, ತಮ್ಮ ತಾಯಿಗೂ ಸಿದ್ದರಾಮಯ್ಯರ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಆರೋಪಗಳಿಗೆ ಹೆದರದೆ ಸತ್ಯ ಹೊರಬರುವವರೆಗೆ ಎದುರಿಸಲು ಸಿದ್ಧರಿದ್ದೇವೆ ಎಂಬ ಸಂದೇಶವನ್ನೂ ನೀಡಿದ್ದಾರೆ.

ತನಿಖೆಯತ್ತ ಎಲ್ಲರ ಗಮನ 

ಒಟ್ನಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣವು ಕರ್ನಾಟಕ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಈ ಪ್ರಕರಣದ ಹಿಂದೆ ರಾಜಕೀಯ ಪೈಪೋಟಿ ಇದೆಯೇ, ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶವಿತ್ತೇ ಅಥವಾ ಬೇರೆ ಯಾವುದಾದರೂ ಸಂಚು ನಡೆದಿದೆಯೇ ಎಂಬುದನ್ನ ತಿಳಿಯಲು ಸಮಗ್ರ ತನಿಖೆ ಅಗತ್ಯವಾಗಿದೆ. ಇದೀಗ ಈ ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತದೆ ಮತ್ತು ಯಾರ ಪಾತ್ರ ಬಹಿರಂಗವಾಗುತ್ತದೆ ಎಂಬುದರ ಮೇಲೆ ರಾಜಕೀಯ ವಲಯದ ಗಮನ ನೆಟ್ಟಿದೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES