ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ ಮಾಡಿದ ವ್ಯಕ್ತಿ ಯೊಬ್ಬರು ಕರ್ತವ್ಯ ದಲ್ಲಿದ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೇ ಕಪಾಳ ಮೋಕ್ಷ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಕೃಷ್ಣ ಅವರಿಗೆ ಕಪಾಳ ಮೋಕ್ಷ ಮಾಡಿದ ಆರೋಪದ ಮೇಲೆ ಸಿಎಎಆರ್ ಕಾನ್ಸ್ಟೆಬಲ್ ಸಚಿನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಬ್ಯಾಡರಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮನೆ ಯೊಂದರ ಗೋಡೆಗೆ ಕಾರು ಡಿಕ್ಕಿ
ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಆರೋಪಿ ಸಚಿನ್ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದ ವೇಳೆ ಮನೆ ಯೊಂದರ ಗೋಡೆಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಆತಂಕಗೊಂಡ ಮನೆಯ ಮಾಲೀಕರು ತಕ್ಷಣವೇ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಆರೋಪಿ ಸಚಿನ್ ಸಂಚಾರಿ ಪೊಲೀಸ್ ಕಾನ್ಸ್ಟೆಬಲ್ ಗಳೊಂದಿಗೆ ಅತಿರೇಕವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.
ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್
ಘಟನೆಯ ಮಾಹಿತಿ ತಿಳಿದು ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಕೃಷ್ಣ ಕೂಡ ಸ್ಥಳಕ್ಕೆ ಆಗಮಿಸಿದ್ದರು. ಅಪಘಾತದ ಬಗ್ಗೆ ಹಾಗೂ ಕಾರು ಚಾಲನೆ ಮಾಡುತ್ತಿದ್ದ ಸಂದರ್ಭದ ಕುರಿತು ಅವರು ಸಚಿನ್ ನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಮದ್ಯದ ಅಮಲಿ ನಲ್ಲಿದ್ದ ಸಚಿನ್, ಮಾತಿನ ಚಕಮಕಿ ನಡೆಸಿ ಏಕಾಏಕಿ ಸಬ್ ಇನ್‌ಸ್ಪೆಕ್ಟರ್ ಕೃಷ್ಣ ಅವರಿಗೆ ಕಪಾಳ ಮೋಕ್ಷ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲು:
ಘಟನೆಗೆ ಸಂಬಂಧಿಸಿದಂತೆ ಸಬ್ ಇನ್‌ಸ್ಪೆಕ್ಟರ್ ಕೃಷ್ಣ ಅವರು ಆರೋಪಿ ಸಚಿನ್ ವಿರುದ್ಧ ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬ್ಯಾಡರಹಳ್ಳಿ ಪೊಲೀಸರಿಂದ ಆರೋಪಿ ಬಂಧನ
ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಪೊಲೀಸರು ಆರೋಪಿ ಸಚಿನ್ ನನ್ನು ಬಂಧಿಸಿದ್ದಾರೆ. ಕುಡಿದು ವಾಹನ ಚಲಾಯಿಸಿ ಅಪಘಾತ ಮಾಡಿದ್ದಲ್ಲದೆ, ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ಚರ್ಚೆಗೆ ಗ್ರಾಸವಾಗಿದೆ.