SOCIAL MEDIA

Newsletter

PARTNER SITES
Select Language Select State

‘ಸ್ಟಿಂಗ್ ಸೃಷ್ಟಿಸಿದವರನ್ನ ಬಂಧಿಸಿ, ಫಾರ್ವರ್ಡ್ ಮಾಡಿದವರನ್ನಲ್ಲ!’: ಬಸವರಾಜ ಬೊಮ್ಮಾಯಿ

ಗದಗದಲ್ಲಿ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ಸ್ಟಿಂಗ್ ಆಪರೇಷನ್ ಪ್ರಕರಣದ ಹಿಂದೆ ಇರುವವರನ್ನ ಪತ್ತೆಹಚ್ಚಿ ಗಂಭೀರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಫಾರ್ವರ್ಡ್ ಮಾಡಿದವರ ಬದಲು ಸ್ಟಿಂಗ್ ಸೃಷ್ಟಿಸಿದವರನ್ನ ಬಂಧಿಸಬೇಕೆಂದು ಒತ್ತಾಯಿಸಿದ ಅವರು, ಸಿಎಂ ಡಿ.ಕೆ.ಶಿವಕುಮಾರ್ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ. ಇದೇ ವೇಳೆ ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯನ್ನೂ ಟೀಕಿಸಿದ್ದಾರೆ.

Written By Puttaraj K Alur
Published: Oct 16, 2026, 04:30 PM IST | Updated: Oct 16, 2026, 04:56 PM IST
Image Credit: Sting Operation Controversy
Join

Sting Operation Controversy: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಗಂಭೀರ ತನಿಖೆಗೆ ಆಗ್ರಹಿಸಿದ್ದಾರೆ. ಸ್ಟಿಂಗ್ ಆಪರೇಷನ್‌ನ ಮೂಲ ಯಾವುದು, ಅದನ್ನ ಸೃಷ್ಟಿಸಿದವರು ಯಾರು ಮತ್ತು ಯಾರ ವಿರುದ್ಧ ನಡೆಸಲಾಗಿದೆ ಎಂಬ ಸತ್ಯಾಂಶಗಳು ಬಹಿರಂಗವಾಗಬೇಕು ಎಂದು ಒತ್ತಾಯಿಸಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಮುಂದಾಗಬೇಕು ಎಂದು ಹೇಳಿದ್ದಾರೆ.

ಸ್ಟಿಂಗ್ ಆಪರೇಷನ್ ಸೃಷ್ಟಿಸಿದವರು ಯಾರು?

ಸ್ಟಿಂಗ್ ಆಪರೇಷನ್ ವಿಚಾರ ಕೇವಲ ಮಾಧ್ಯಮಗಳಲ್ಲಿ ಓಡಾಡುತ್ತಿದೆ. ಆದರೆ ನಿಜವಾದ ಸ್ಟಿಂಗ್ ಎಲ್ಲಿ ನಡೆದಿದೆ, ಯಾರು ಮಾಡಿದ್ದಾರೆ & ಯಾರ ಮೇಲೆ ನಡೆಸಲಾಗಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಹೊರಬರುತ್ತಿಲ್ಲವೆಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಯಾರೋ ಯೂಟ್ಯೂಬರ್‌ಗಳು ಈ ವಿಚಾರವನ್ನ ಫಾರ್ವರ್ಡ್ ಮಾಡುತ್ತಿದ್ದಾರೆ. ಆದರೆ ಮೂಲತಃ ಇದನ್ನ ಸೃಷ್ಟಿಸಿದವರು ಯಾರು ಎಂಬುದನ್ನ ಪತ್ತೆಹಚ್ಚುವುದು ಅತ್ಯಂತ ಮುಖ್ಯವಾಗಿದೆ ಅಂತಾ ಅಭಿಪ್ರಾಯಪಟ್ಟಿದ್ದಾರೆ.

ಕೇವಲ ಸಂದೇಶಗಳನ್ನ ಫಾರ್ವರ್ಡ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಿಂತ, ಇಂತಹ ವಿಷಯವನ್ನ ಸೃಷ್ಟಿಸಿದವರನ್ನ ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ. ಈ ಪ್ರಕರಣವು ಪ್ರತಿಯೊಬ್ಬರ ನೈತಿಕತೆಯನ್ನ ಪ್ರಶ್ನಿಸುವ ಹಂತಕ್ಕೆ ತಲುಪಿದೆ. ಹೀಗಾಗಿ ಇಂತಹ ಬೆಳವಣಿಗೆಗಳಿಗೆ ಕಡಿವಾಣ ಹಾಕಬೇಕು. ಯಾರು ತಪ್ಪು ಮಾಡಿದ್ದಾರೆ ಎಂಬುದನ್ನ ತನಿಖೆಯ ಮೂಲಕ ಪತ್ತೆಹಚ್ಚಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ಸಿಎಂ ಗಂಭೀರವಾಗಿ ಪರಿಗಣಿಸಲಿ

ಸ್ಟಿಂಗ್ ಆಪರೇಷನ್ ವಿಚಾರವನ್ನ ಸಿಎಂ ಡಿ.ಕೆ.ಶಿವಕುಮಾರ್ ಅವರೇ ಪ್ರಾರಂಭಿಸಿರುವುದರಿಂದ, ಅದರ ಹಿಂದಿರುವ ಸತ್ಯಾಂಶಗಳನ್ನ ಹೊರತರುವ ಜವಾಬ್ದಾರಿಯೂ ಅವರ ಮೇಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. “ಸತ್ಯದ ಆಳಕ್ಕೆ ಹೋಗಬೇಕಾದರೆ ಸಿಎಂ ಅವರೇ ಈ ವಿಚಾರವನ್ನ ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು. ಕೇವಲ ಒಂದು ಹೇಳಿಕೆ ನೀಡಿ ಸುಮ್ಮನೆ ಓಡಾಡಿಕೊಂಡು ಮಜಾ ಮಾಡುವುದಲ್ಲ. ಇದು ಬಹಳ ಗಂಭೀರವಾದ ವಿಚಾರ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ವಿಷಯವನ್ನ ಸಚಿವ ಸಂಪುಟದಲ್ಲಿಯೂ ಚರ್ಚಿಸಬೇಕು. ತನಿಖೆಯನ್ನ ಆರಂಭಿಸಿ ಅರ್ಧಕ್ಕೆ ಕೈಬಿಟ್ಟರೆ ಅದರ ಪರಿಣಾಮಗಳು ಏನಾಗಬಹುದು ಎಂಬುದನ್ನ ಸರ್ಕಾರ ಅರಿತುಕೊಳ್ಳಬೇಕು ಎಂದು ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಪ್ರಕರಣವನ್ನ ಕೈಬಿಟ್ಟರೆ ಅವರ ಮೇಲೆಯೇ ಸಂಶಯದ ಪ್ರಶ್ನೆಗಳು ಮೂಡುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಗೆ ಅವಕಾಶ ನೀಡಬಾರದು ಎಂದು ಬೊಮ್ಮಾಯಿ ಎಚ್ಚರಿಸಿದ್ದಾರೆ. ಸ್ಟಿಂಗ್ ಆಪರೇಷನ್‌ನ ಮೂಲವನ್ನ ಪತ್ತೆಹಚ್ಚಿ, ಅದರ ಹಿಂದಿರುವ ವ್ಯಕ್ತಿಗಳು ಹಾಗೂ ಉದ್ದೇಶಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂಬುದು ಅವರ ಪ್ರಮುಖ ಆಗ್ರಹವಾಗಿದೆ.

ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಹೋರಾಟಕ್ಕೆ ಟೀಕೆ

ಇದೇ ವೇಳೆ ಎಸ್‌ಐಆರ್ ವಿಚಾರವಾಗಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆಯೂ ಬಸವರಾಜ ಬೊಮ್ಮಾಯಿ ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ನಡೆಸುತ್ತಿರುವ ಹೋರಾಟ ಸುಳ್ಳು ಹೋರಾಟವಾಗಿದ್ದು, ಜನರ ದಾರಿ ತಪ್ಪಿಸುವ ಪ್ರಯತ್ನವಾಗಿದೆ ಅಂತಾ ಆರೋಪಿಸಿದ್ದಾರೆ. ಚುನಾವಣೆಯಲ್ಲಿ ಸೋಲು ಕಂಡಾಗ ಚುನಾವಣಾ ಆಯೋಗ ಮತ್ತು ಇವಿಎಂ ಯಂತ್ರಗಳ ಮೇಲೆ ಆರೋಪ ಹೊರಿಸುವುದು ಕಾಂಗ್ರೆಸ್‌ನ ರೂಢಿಯಾಗಿದೆ ಎಂದು ಹೇಳಿದ್ದಾರೆ. ಕಳೆದ ಎಂಟು-ಹತ್ತು ವರ್ಷಗಳಿಂದ ಕಾಂಗ್ರೆಸ್ ಇದೇ ರೀತಿಯ ಆರೋಪಗಳನ್ನ ಮಾಡುತ್ತ ಬಂದಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಎಲ್ಲಾ ವಿಚಾರಗಳಲ್ಲಿಯೂ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಚುನಾವಣಾ ಪ್ರಕ್ರಿಯೆ ಮತ್ತು ಸಂವಿಧಾನಾತ್ಮಕ ಸಂಸ್ಥೆಗಳ ವಿಚಾರದಲ್ಲಿ ನ್ಯಾಯಸಮ್ಮತವಾದ ನಿಲುವು ಅಗತ್ಯವೆಂದು ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂಕೋರ್ಟ್ ಆದೇಶ ಪಾಲನೆಗೆ ಒತ್ತು

ಸಂವಿಧಾನಾತ್ಮಕ ಸಂಸ್ಥೆಗಳಿಗೆ ಗೌರವ ನೀಡುವುದು ಮತ್ತು ನ್ಯಾಯಾಂಗದ ಆದೇಶಗಳನ್ನ ಪಾಲಿಸುವುದು ಮುಖ್ಯವೆಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುಪ್ರೀಂಕೋರ್ಟ್ ತನ್ನ ತೀರ್ಪು ನೀಡುತ್ತದೆ. ಅದರ ಆದೇಶಗಳನ್ನ ಗೌರವಿಸಿ ಪಾಲಿಸುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ. ಒಟ್ನಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣದ ಮೂಲ ಪತ್ತೆಹಚ್ಚಿ ಸಮಗ್ರ ತನಿಖೆ ನಡೆಸಬೇಕೆಂಬ ಆಗ್ರಹದ ಜೊತೆಗೆ ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯನ್ನೂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.  

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES