SOCIAL MEDIA

Newsletter

PARTNER SITES
Select Language Select State

ಡಿ. 2ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ : ಸುಗಮ ಕಲಾಪಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಡಿಸೆಂಬರ್ 2ರಿಂದ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಜಿ.ಎಸ್. ಪಾಟೀಲ್ ಹಾಗೂ ವಿಧಾನಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ಇಂದು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿದರು.

Written By Krishna NK
Published: Nov 21, 2026, 17:50 IST | Updated: Nov 21, 2026, 17:52 IST
Image Credit: Belagavi Winter Session
Join

ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಡಿಸೆಂಬರ್ 2ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಇಂದು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ ವಿಧಾನಸಭೆ ಸ್ಪೀಕರ್ ಜಿ.ಎಸ್. ಪಾಟೀಲ್ ಹಾಗೂ ವಿಧಾನಪರಿಷತ್ ಸಭಾಪತಿ ಸಲೀಂ ಅಹ್ಮದ್ ಜಂಟಿಯಾಗಿ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿದರು. ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಉಭಯ ನಾಯಕರು, ಯಾವುದೇ ಲೋಪದೋಷವಾಗದಂತೆ ಅಧಿವೇಶನ ನಡೆಸಲು ಸೂಚನೆ ನೀಡಿದರು. ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಹೌದು... ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 2ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಜಿ.ಎಸ್. ಪಾಟೀಲ್ ಮತ್ತು ವಿಧಾನಪರಿಷತ್ ಸಭಾಪತಿ ಸಲೀಂ ಅಹ್ಮದ್ ನೇತೃತ್ವದಲ್ಲಿ ಸಿದ್ಧತೆಗಳ ಪರಿಶೀಲನೆ ನಡೆಯಿತು. ವಿಧಾನಸಭೆ ಹಾಗೂ ವಿಧಾನಪರಿಷತ್ ಸಭಾಂಗಣಗಳಲ್ಲಿನ ಮೈಕ್ ಮತ್ತು ಆಸನ ವ್ಯವಸ್ಥೆ, ಭದ್ರತೆ, ಪ್ರವೇಶ ದ್ವಾರಗಳು ಹಾಗೂ ಮಧ್ಯಾಹ್ನದ ಭೋಜನದ ಬ್ಯಾಂಕ್ವೆಟ್ ಹಾಲ್‌ಗೆ ಭೇಟಿ ನೀಡಿ ಪರಿಶೀಲಿಸಲಾಯಿತು.

ಇದೇ ವೇಳೆ ಬೆಳಗಾವಿ ಡಿಸಿ ಮಹಮ್ಮದ್ ರೋಷನ್, ಪೊಲೀಸ್ ಕಮಿಷನರ್ ಪ್ರಕಾಶ್ ನಿಕಮ್, ಎಸ್ಪಿ ಕೆ. ರಾಮರಾಜನ್ ಹಾಗೂ ಜಿಪಂ ಸಿಇಓ ರಾಹುಲ್ ಶಿಂಧೆ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆಯಲಾಯಿತು. ಊಟ, ವಸತಿ, ವಾಹನ ಹಾಗೂ ಸ್ವಚ್ಛತೆ ಸೇರಿದಂತೆ ಯಾವುದೇ ಸಮಸ್ಯೆಯಾಗದಂತೆ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.

ಇನ್ನೂ ಪರಿಶೀಲನೆ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್ ಹಾಗೂ ಸಭಾಪತಿಗಳು, ಈ ಬಾರಿಯ ಅಧಿವೇಶನದ ವಿಶೇಷತೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಅಧಿವೇಶನದ ಸಂದರ್ಭದಲ್ಲಿ ಈ ಬಾರಿ ಪುಸ್ತಕ ಮೇಳ ಹಾಗೂ ಯೋಗಾ ಡೇ ಆಯೋಜಿಸಲಾಗುತ್ತಿದೆ. ಶಾಸಕರು ಮತ್ತು ಸಚಿವರು ತಂಗುವ ವಸತಿ ಸ್ಥಳಗಳಲ್ಲೇ ಯೋಗ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಜೊತೆಗೆ ಅಧಿವೇಶನಕ್ಕೆ ಬರುವ ಮಕ್ಕಳಿಗೆ ಹಾಗೂ ಪ್ರತಿಭಟನಾಕಾರರಿಗೆ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನೂ ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದ ಸ್ಪೀಕರ್, ಬೆಳಗಾವಿಯಲ್ಲಿ ಖಾಸಗಿಯವರಿಗೆ ಅವಕಾಶ ನೀಡದೆ ನಾವೇ ಶಾಸಕರ ಭವನ ನಿರ್ಮಿಸುವ ಬಗ್ಗೆ ಸಿಎಂ ಜೊತೆ ಚರ್ಚಿಸುವುದಾಗಿ ತಿಳಿಸಿದರು.

ಪ್ರತಿ ತಿಂಗಳು ಶಾಸಕರ ನೇತೃತ್ವದ ಕಮಿಟಿ ಸಭೆಯನ್ನು ಬೆಳಗಾವಿಯಲ್ಲೇ ನಡೆಸುವುದಾಗಿಯೂ ಹೇಳಿದರು. ಮತ್ತೊಂದೆಡೆ, ರಾಜ್ಯದ ಹಲವು ಸಮಸ್ಯೆಗಳಿಗೆ ಉತ್ತರ ಸಿಗಬೇಕಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳು ಒಟ್ಟಾಗಿ ಅರ್ಥಪೂರ್ಣ ಸದನ ನಡೆಸಬೇಕು ಹಾಗೂ ಪ್ರತಿಭಟನೆಗಳಿಗೆ ಸ್ಪಂದಿಸುವ ಕೆಲಸವಾಗಬೇಕು ಎಂದು ಸಭಾಪತಿ ಸಲೀಂ ಅಹ್ಮದ್ ಮನವಿ ಮಾಡಿದರು

ಒಟ್ಟಿನಲ್ಲಿ ಈಗಾಗಲೇ ಎರಡು ಬಾರಿ ಅಧಿವೇಶನ ನಡೆಸಿದ ಅನುಭವವಿರುವ ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾಡಳಿತದೊಂದಿಗೆ ಚಳಿಗಾಲದ ಅಧಿವೇಶನವನ್ನು ಸುಗಮವಾಗಿ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಸ್ಪೀಕರ್ ಹಾಗೂ ಸಭಾಪತಿ ಇಬ್ಬರೂ ಉತ್ತರ ಕರ್ನಾಟಕದವರೇ ಆಗಿರುವುದರಿಂದ, ಈ ಬಾರಿಯ ಅಧಿವೇಶನದಲ್ಲಿ ಭಾಗದ ಅಭಿವೃದ್ಧಿ ಪರ ಚರ್ಚೆ ನಡೆದು ಬಹುದಿನದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂಬ ನಿರೀಕ್ಷೆ ಮೂಡಿದೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ZEENEWS TRENDING STORIES