SOCIAL MEDIA

Newsletter

PARTNER SITES
Select Language Select State

ಹಾವೇರಿಯಲ್ಲಿ ಲಾರಿಗೆ ಬಸ್ ಡಿಕ್ಕಿ : ನಾಲ್ವರು ಗಂಭೀರ 25ಕ್ಕೂ ಹೆಚ್ಚು ಮಂದಿಗೆ ಗಾಯ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಮಹಾರಾಷ್ಟ್ರಕ್ಕೆ ಪ್ರವಾಸ ಮುಗಿಸಿ ತೆರಳುತ್ತಿದ್ದ ಖಾಸಗಿ ಬಸ್ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ 25ಕ್ಕೂ ಹೆಚ್ಚು ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Written By Yashaswini V
Published: Nov 17, 2026, 09:11 IST | Updated: Nov 17, 2026, 09:13 IST
Join

ಹಾವೇರಿ : ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್‌ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, 25ಕ್ಕೂ ಹೆಚ್ಚು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.

ಏನಿದು ಘಟನೆ?
ಮಹಾರಾಷ್ಟ್ರ ಮೂಲದ ಪ್ರವಾಸಿಗರನ್ನು ಹೊತ್ತ ಖಾಸಗಿ ಬಸ್‌ ಬೆಂಗಳೂರಿನ ಪ್ರವಾಸವನ್ನು ಮುಗಿಸಿಕೊಂಡು ವಾಪಸ್‌ ತವರೂರು ಮಹಾರಾಷ್ಟ್ರದ ಕಡೆ ಪ್ರಯಾಣ ಬೆಳೆಸಿತ್ತು. ಈ ಬಸ್‌ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಸಮೀಪ ಇರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಾಗುತ್ತಿದ್ದಾಗ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಲಾರಿಗೆ ಖಾಸಗಿ ಬಸ್‌ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜು ಗುಜ್ಜಾಗಿದ್ದು, ಬಸ್‌ನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿ, 4 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.

ಅಪಘಾತಕ್ಕೆ ಕಾರಣ:
ಪ್ರಾಥಮಿಕ ತನಿಖೆ ಹಾಗೂ ಸ್ಥಳೀಯರ ಮಾಹಿತಿಯ ಪ್ರಕಾರ, ಖಾಸಗಿ ಬಸ್ ಚಾಲಕನು ರಾತ್ರಿ ಇಡೀ ಪ್ರಯಾಣ ಮಾಡಿದ್ದು, ನಿದ್ರೆಯ ಮಂಪರಿನಿಂದಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ದೀರ್ಘಕಾಲದ ಪ್ರಯಾಣದ ಆಯಾಸದಿಂದ ಚಾಲಕನಿಗೆ ನಿದ್ರೆ ಆವರಿಸಿದ್ದು, ವಾಹನದ ಮೇಲಿನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಶಂಕಿಸಲಾಗಿದೆ.

ಅಪಘಾತದ ಸದ್ದು ಕೇಳುತ್ತಿದ್ದಂತೆಯೇ ಸ್ಥಳೀಯರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರ ತೆಗೆದು ಆಂಬ್ಯುಲೆನ್ಸ್ ಮೂಲಕ ಹಾವೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಯಲ್ಲಿ 25ಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಜಿಲ್ಲಾಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಈ ಘಟನೆ ಬ್ಯಾಡಗಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಬ್ಯಾಡಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪೊಲೀಸರು ಕ್ರೇನ್ ಸಹಾಯದಿಂದ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಸದ್ಯ ಈ ಘಟನೆಗೆ ನಿಖರ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ZEENEWS TRENDING STORIES