SOCIAL MEDIA

Newsletter

PARTNER SITES
Select Language Select State

ಬರದ ತಾಂಡವದ ನಡುವೆ ಅಧಿಕಾರಿಗಳ ಮೋಜು-ಮಸ್ತಿ : ‘ನಾ ಡ್ರೈವರ್’ ಹಾಡಿಗೆ ಹೆಜ್ಜೆ ಹಾಕಿದ ಗದಗ ಡಿಸಿ

ಗದಗ ಜಿಲ್ಲೆಯಲ್ಲಿ ತೀವ್ರ ಬರಗಾಲ ಆವರಿಸಿ ರೈತರು ಸಂಕಷ್ಟಕ್ಕೆ ಸಿಲುಕಿರುವ ಹೊತ್ತಿನಲ್ಲೇ, ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮತ್ತು ಇತರ ಅಧಿಕಾರಿಗಳು ಅಧಿಕೃತ ನಿವಾಸದಲ್ಲಿ ನಡೆದ ಔತಣಕೂಟದ ವೇಳೆ ‘ನಾ ಡ್ರೈವರ್’ ಹಾಡಿಗೆ ಕುಣಿದಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

Written By Krishna NK
Published: Nov 22, 2026, 20:44 IST | Updated: Nov 22, 2026, 20:55 IST
Image Credit: Gadag DC
Join

ಗದಗ: ಜಿಲ್ಲೆಯ ಏಳೂ ತಾಲೂಕುಗಳು ತೀವ್ರ ಬರಗಾಲದ ದವಡೆಗೆ ಸಿಲುಕಿ ಅನ್ನದಾತರು ಕಂಗಾಲಾಗಿರುವ ಸಂದರ್ಭದಲ್ಲೇ, ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಔತಣಕೂಟದ ಹೆಸರಿನಲ್ಲಿ ಹಾಡು, ಕುಣಿತದ ಮೂಲಕ ಮೋಜು-ಮಸ್ತಿ ನಡೆಸಿರುವ ಘಟನೆ ಇದೀಗ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಹೌದು.. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ಭೋಜನ ಕೂಟವನ್ನು ಆಯೋಜಿಸಲಾಗಿತ್ತು. ಈ ಔತಣಕೂಟದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ತಮ್ಮ ಸಿಬ್ಬಂದಿ ಹಾಗೂ ಇತರ ಅಧಿಕಾರಿಗಳೊಂದಿಗೆ ಸೇರಿಕೊಂಡು ಸಿನಿಮಾ ಹಾಡುಗಳಿಗೆ ಭರ್ಜರಿಯಾಗಿ ಹೆಜ್ಜೆ ಹಾಕಿದ್ದಾರೆ. ವಿಶೇಷವಾಗಿ ‘ನಾ ಡ್ರೈವರ್..’ ಎಂಬ ಜನಪ್ರಿಯ ಹಾಡಿಗೆ ಡಿಸಿ ಅವರು ಉತ್ಸಾಹದಿಂದ ಕುಣಿದು ಕುಪ್ಪಳಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಸಂಭ್ರಮಾಚರಣೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ (ಡಿಡಿ) ಕೊಟ್ರೇಶ್ ವಿಭೂತಿ, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡದೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ್ದಾರೆ.

ಸದ್ಯ ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳ ಈ ನೃತ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ನೆಟ್ಟಿಗರು ಹಾಗೂ ಜಿಲ್ಲೆಯ ಜನತೆಯಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಗದಗ ಜಿಲ್ಲೆಯ ಎಲ್ಲಾ ಏಳೂ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಮಳೆಯಿಲ್ಲದೆ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಇನ್ನೂ ಸಮರ್ಪಕವಾಗಿ ಬರ ಪರಿಹಾರದ ಹಣ ಕೈಸೇರಿಲ್ಲ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಉದ್ಯೋಗವಿಲ್ಲದೆ ಗ್ರಾಮೀಣ ಭಾಗದ ಜನರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇಂತಹ ಸಂಕಷ್ಟದ ಸಮಯದಲ್ಲಿ ಜನರ ನೋವಿಗೆ ಸ್ಪಂದಿಸಿ, ಬರ ಪರಿಹಾರ ಕಾಮಗಾರಿಗಳನ್ನು ಚುರುಕುಗೊಳಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಜಿಲ್ಲಾಧಿಕಾರಿಗಳೇ ಅಧಿಕೃತ ನಿವಾಸದಲ್ಲಿ ಪಾರ್ಟಿ ಆಯೋಜಿಸಿ ಕುಣಿದಿರುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಉದ್ಭವಿಸಿದೆ. ಒಂದೆಡೆ ರೈತರು ಕಣ್ಣೀರಿಡುತ್ತಿದ್ದರೆ, ಮತ್ತೊಂದೆಡೆ ಅಧಿಕಾರಿಗಳು ಮೋಜು-ಮಸ್ತಿಯಲ್ಲಿ ತೊಡಗಿರುವುದು ಅಮಾನವೀಯ ನಡೆ ಎಂದು ರೈತ ಸಂಘಟನೆಗಳು ಹಾಗೂ ಸಾರ್ವಜನಿಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ZEENEWS TRENDING STORIES