SOCIAL MEDIA

Newsletter

PARTNER SITES
Select Language Select State

ಬರಪೀಡಿತ ತಾಲೂಕು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ.ಪಾಟೀಲ್ ಎಚ್ಚರಿಕೆ

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಚ್.ಕೆ.ಪಾಟೀಲ್ ಅವರು ರೈತರ ಸಮಸ್ಯೆ ಆಲಿಸಿ, ಸರ್ಕಾರದ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಗದಗ ತಾಲೂಕಿನಲ್ಲಿ ಶೇ.49ರಷ್ಟು ಮಳೆ ಕೊರತೆಯಾಗಿದ್ದರೂ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡದಿರುವುದು ಏಕೆ ಎಂದು ಪ್ರಶ್ನಿಸಿದರು.

Reported By Puttaraj K Alur Written By Puttaraj K Alur
Published: Sep 20, 2026, 03:03 PM IST | Updated: Sep 20, 2026, 03:16 PM IST
Image Credit: Gadag Drought Row
Join

HK Patil on Gadag Drought: ಗದಗ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವ ಹಾಗೂ ಶಾಸಕ ಎಚ್.ಕೆ.ಪಾಟೀಲ್ ಸರ್ಕಾರಕ್ಕೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಗದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ರೈತರ ಎದುರೇ ಈ ಘೋಷಣೆ ಮಾಡಿದ್ದಾರೆ.

ಗದಗ ತಾಲೂಕನ್ನ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಮುಳಗುಂದ ಪಟ್ಟಣದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಮುಳಗುಂದದ ಗಣೇಶ್ ಗುಡಿಯಿಂದ ಬಸಾಪುರ ಕ್ರಾಸ್‌ವರೆಗೆ ರೈತರು ಮೆರವಣಿಗೆ ನಡೆಸಿ, ಕಾರವಾರ–ಕೈಗಾ ಹಾಗೂ ಗದಗ–ಇಳಕಲ್ ರಾಜ್ಯ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಗದಗ ತಾಲೂಕನ್ನ ಕೈಬಿಟ್ಟಿರುವುದಕ್ಕೆ ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಚ್.ಕೆ.ಪಾಟೀಲ್ ಅವರು ರೈತರ ಸಮಸ್ಯೆ ಆಲಿಸಿ, ಸರ್ಕಾರದ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಗದಗ ತಾಲೂಕಿನಲ್ಲಿ ಶೇ.49ರಷ್ಟು ಮಳೆ ಕೊರತೆಯಾಗಿದ್ದರೂ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡದಿರುವುದು ಏಕೆ ಎಂದು ಪ್ರಶ್ನಿಸಿದರು.

ಈ ಹಿಂದೆ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ, ಗದಗ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಚರ್ಚಿಸಲಾಗಿತ್ತು. ಅಧಿಕಾರಿಗಳ ವರದಿಯಲ್ಲೂ ಬರದ ಪರಿಸ್ಥಿತಿಯ ಸ್ಪಷ್ಟ ಚಿತ್ರಣ ದೊರೆತಿತ್ತು ಎಂದು ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಗದಗ ಭಾಗದಲ್ಲಿ ಬೆಳೆ ಪರಿಸ್ಥಿತಿಯನ್ನ ವೀಕ್ಷಿಸಿದ್ದರು. ಕದಾಂಪುರದಿಂದ ಕುರ್ತಕೋಟಿವರೆಗೆ ಬೆಳೆ ವೀಕ್ಷಣೆ ನಡೆಸಿದ್ದರೂ, ಗದಗ ತಾಲೂಕನ್ನ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡದಿರುವುದು ರೈತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು.

“ರೈತರ ಆಕ್ರೋಶ ಕಟ್ಟೆ ಒಡೆದು ಹೋಗಿದೆ. ಅನ್ಯಾಯ ಮತ್ತು ಮೋಸವನ್ನ ಸಹಿಸಲು ಸಾಧ್ಯವಿಲ್ಲ. ನಾನು ರೈತ ಪರವಾಗಿದ್ದವನು, ರೈತ ಕುಟುಂಬದಿಂದ ಬಂದವನು. ರೈತರ ಪರಿಸ್ಥಿತಿ ನನಗೆ ಗೊತ್ತಿದೆ” ಎಂದು ಎಚ್.ಕೆ.ಪಾಟೀಲ್ ಹೇಳಿದರು. ಇನ್ನು ಮೂರು ದಿನಗಳ ಒಳಗಾಗಿ ಗದಗ ತಾಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಪ್ರಯತ್ನ ಮಾಡುತ್ತೇನೆ ಎಂದು ಅವರು ತಿಳಿಸಿದರು. ಅದು ಸಾಧ್ಯವಾಗದಿದ್ದರೆ ಅಕ್ಟೋಬರ್ 10ರವರೆಗೆ ಸರ್ಕಾರಕ್ಕೆ ಗಡುವು ನೀಡುವುದಾಗಿ ಹೇಳಿದರು.

ಗಂಡಸ್ತನದ ಬಗ್ಗೆ ಮಾತನಾಡಿದ ಎಚ್.ಕೆ.ಪಾಟೀಲ್

ಇದೇ ವೇಳೆ ನಾನು ಅಷ್ಟು ಅಶಕ್ತನಲ್ಲ. ಮೂರು ದಿನದಲ್ಲಿ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಿಸುವ ಪ್ರಯತ್ನ ಮಾಡುತ್ತೇನೆ. ಅಕ್ಟೋಬರ್ 2ರೊಳಗೆ ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಪ್ರಯತ್ನ ಮಾಡುತ್ತೇನೆ. ಗಂಡಸ್ತನ ತೋರಿಸುವುದರ ಜೊತೆಗೆ ಗದಗ ತಾಲೂಕು ಬರಪೀಡಿತ ಎಂದು ಘೋಷಣೆ ಮಾಡಿಸಿಕೊಳ್ಳಲು ಅರ್ಹವಾಗಿಲ್ಲವೆಂದು ಯಾರಾದರೂ ಹೇಳಿ, ರೈತರಿಗೆ ಟೋಪಿ ಹಾಕಲು ಪ್ರಯತ್ನಿಸಿದರೆ, ನಿಮ್ಮ ಆದೇಶದಂತೆ ನಾನು ರಾಜೀನಾಮೆ ಕೊಡುತ್ತೇನೆ. ಅಂತಾ ಎಂದು ಎಚ್.ಕೆ.ಪಾಟೀಲ್ ರೈತರ ಎದುರು ಘೋಷಿಸಿದರು. ಗದಗ ತಾಲೂಕನ್ನ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲವೆಂದು ಅವರು ಸ್ಪಷ್ಟಪಡಿಸಿದರು.

ಅಕ್ಟೋಬರ್ 10ರೊಳಗೆ ಗದಗ ತಾಲೂಕನ್ನ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್.ಕೆ.ಪಾಟೀಲ್ ಬಹಿರಂಗವಾಗಿ ಘೋಷಿಸಿದರು. ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ.

ಉತ್ತರ ಕರ್ನಾಟಕದ ಒಟ್ಟು 73 ತಾಲೂಕುಗಳ ಪೈಕಿ 27 ತಾಲೂಕುಗಳನ್ನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಎಚ್.ಕೆ.ಪಾಟೀಲ್ ಆರೋಪಿಸಿದರು. ಉತ್ತರ ಕರ್ನಾಟಕದ ಉಳಿದ 27 ತಾಲೂಕುಗಳನ್ನೂ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಅವರು ಸರ್ಕಾರವನ್ನ ಒತ್ತಾಯಿಸಿದರು.

ಇದೇ ವೇಳೆ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ಗದಗ ತಾಲೂಕನ್ನ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ಗದಗದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ರೈತರ ಬೆಳೆ ನಷ್ಟ ಮತ್ತು ಮಳೆ ಕೊರತೆಯನ್ನ ಪರಿಗಣಿಸಿ ತಕ್ಷಣ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ. ಇದೀಗ ಎಚ್.ಕೆ.ಪಾಟೀಲ್ ಅವರ ರಾಜೀನಾಮೆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಸರ್ಕಾರದ ಮುಂದಿನ ನಿರ್ಧಾರ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES