ಕಬ್ಬು ಬೆಳೆಗಾರರ ಬೇಡಿಕೆಗೆ ಸ್ಪಂದಿಸದಿದ್ದರೆ ಅಕ್ಟೋಬರ್ 27ರಂದು ಕರ್ನಾಟಕ ಬಂದ್: ಚೂನಪ್ಪ ಪೂಜಾರಿ ಎಚ್ಚರಿಕೆ
ಅಕ್ಟೋಬರ್ 26 ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಸಿಗದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಅವರು ತಿಳಿಸಿದ್ದಾರೆ.
ಬೆಳಗಾವಿ: ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಕ್ಟೋಬರ್ 27 ರಂದು ಕರ್ನಾಟಕ ಬಂದ್‌ಗೆ ಕರೆ ನೀಡುವ ಎಚ್ಚರಿಕೆಯನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ನೀಡಿದ್ದಾರೆ. ಅಕ್ಟೋಬರ್ 26 ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಸಿಗದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಅವರು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚೂನಪ್ಪ ಪೂಜಾರಿ, ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಸಭೆಯಲ್ಲಿ ಬೇಡಿಕೆಗಳು ಈಡೇರುವ ಭರವಸೆ ಇದೆ. ಆದರೆ ಸಭೆಯಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದನೆ ಸಿಗದಿದ್ದರೆ ಅನಿವಾರ್ಯವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿ ಟನ್ ಕಬ್ಬಿಗೆ ₹4,500 ದರಕ್ಕೆ ಆಗ್ರಹ
ಕಬ್ಬು ಬೆಳೆಗಾರರ ಪರವಾಗಿ ರಾಜ್ಯ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಮಂಡಿಸಲಾಗುವುದು ಎಂದು ಚೂನಪ್ಪ ಪೂಜಾರಿ ಹೇಳಿದರು. ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹4,500 ದರ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ರೈತರ ಪ್ರಮುಖ ಆಗ್ರಹವಾಗಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ಎಸ್‌ಎಪಿ (ರಾಜ್ಯ ಸಲಹಾ ಬೆಲೆ) ಮೂಲಕ ಪ್ರತಿ ಟನ್‌ಗೆ ಕನಿಷ್ಠ ₹1,000 ಹೆಚ್ಚುವರಿ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರವೂ ಕಬ್ಬಿಗೆ ಸಂಬಂಧಿಸಿದ ಎಂಎಸ್‌ಪಿ ಹೆಚ್ಚಳದ ಕುರಿತು ಕ್ರಮ ಕೈಗೊಳ್ಳಬೇಕು. ಕೇಂದ್ರ ಸಚಿವರು ತಕ್ಷಣವೇ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಕರೆದು ರೈತರ ಸಮಸ್ಯೆಗಳ ಕುರಿತು ಚರ್ಚಿಸಬೇಕು ಎಂದು ಅವರು ಆಗ್ರಹಿಸಿದರು.
ತೂಕದ ಮೋಸ ತಡೆಯಲು ₹500 ಕೋಟಿ ಮೀಸಲಿಡಲು ಒತ್ತಾಯ
ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ತೂಕ ಮಾಡುವ ಸಂದರ್ಭದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ಆರೋಪವನ್ನು ಪ್ರಸ್ತಾಪಿಸಿದ ಚೂನಪ್ಪ ಪೂಜಾರಿ, ತೂಕದ ವ್ಯತ್ಯಾಸ ಮತ್ತು ಅಕ್ರಮಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಈ ಉದ್ದೇಶಕ್ಕಾಗಿ ₹500 ಕೋಟಿ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಅಲ್ಲದೆ, ಬೆಳಗಾವಿಯ ಸಕ್ಕರೆ ಆಯುಕ್ತರ ಕಚೇರಿಗೆ ಆಯುಕ್ತರನ್ನು ನೇಮಕ ಮಾಡಬೇಕು. ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯಲ್ಲಿ ಮುಖ್ಯಮಂತ್ರಿ ಗಂಭೀರ ನಿರ್ಧಾರ ಗಳನ್ನು ಕೈಗೊಂಡು ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ರೈತರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ಅಕ್ಟೋಬರ್ 25 ರಿಂದ ಗುರ್ಲಾಪುರದಲ್ಲಿ ಸಾಂಕೇತಿಕ ಪ್ರತಿಭಟನೆ ಆರಂಭಿಸಲಾಗುವುದು ಎಂದು ಚೂನಪ್ಪ ಪೂಜಾರಿ ತಿಳಿಸಿದರು. ಅಕ್ಟೋಬರ್ 26 ರಂದು ನಡೆಯಲಿರುವ ಮುಖ್ಯಮಂತ್ರಿ ನೇತೃತ್ವದ ಸಭೆಯ ಫಲಿತಾಂಶ ವನ್ನು ಆಧರಿಸಿ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು ಎಂದರು.
ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಸ್ಪಂದನೆ ದೊರೆತರೆ ಸಮಸ್ಯೆ ಪರಿಹಾರವಾಗುವ ನಿರೀಕ್ಷೆಯಿದೆ. ಇಲ್ಲದಿದ್ದರೆ ಅಕ್ಟೋಬರ್ 27 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು ಎಂದು ಅವರು ಸ್ಪಷ್ಟ ಪಡಿಸಿದರು. ಕಬ್ಬಿನ ಬೆಲೆ ನಿಗದಿ, ಹೆಚ್ಚುವರಿ ಬೆಂಬಲ ಮತ್ತು ತೂಕದ ಅಕ್ರಮ ತಡೆಗೆ ಸಂಬಂಧಿಸಿದ ಬೇಡಿಕೆಗಳು ಈಗ ರೈತ ಸಂಘಟನೆಯ ಪ್ರಮುಖ ಒತ್ತಾಯಗಳಾಗಿವೆ. ಸರ್ಕಾರದ ಸಭೆಯಲ್ಲಿ ಈ ವಿಚಾರಗಳ ಕುರಿತು ಯಾವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.