SOCIAL MEDIA

Newsletter

PARTNER SITES
Select Language Select State

ಗದಗ: ಕುಡಿಯುವ ನೀರಿಗಾಗಿ ಬಿಜೆಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ; ನಗರಸಭೆಗೆ ಮುತ್ತಿಗೆ ಯತ್ನ

ಗದಗ-ಬೆಟಗೇರಿ ಅವಳಿ ನಗರಕ್ಕೆ 20ರಿಂದ 25 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡದಿರುವುದರಿಂದ ಸಾವಿರಾರು ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Written By Chetana Devarmani
Published: Sep 29, 2026, 05:11 PM IST | Updated: Sep 29, 2026, 05:13 PM IST
Join

ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬೃಹತ್ ಪ್ರತಿಭಟನೆ ನಡೆಸಿದರು. ಗದಗ ನಗರದ ಹುಯಿಲಗೋಳ ನಾರಾಯಣರಾವ್ ವೃತ್ತದಿಂದ ನಗರಸಭೆವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ ಕಾರ್ಯಕರ್ತರು, ಖಾಲಿ ಕೊಡಗಳನ್ನು ಹಿಡಿದು ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಗದಗ ಶಾಸಕ ಎಚ್.ಕೆ. ಪಾಟೀಲ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ನಾರಾಯಣರಾವ್ ವೃತ್ತದಲ್ಲಿ ಸರ್ಕಾರ ಹಾಗೂ ಶಾಸಕರ ವಿರುದ್ಧ ಹೋಮ-ಹವನ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ‘ನೀರು ಕೊಡಿ, ಇಲ್ಲವೇ ಕುರ್ಚಿ ಬಿಡಿ’ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಹಲವು ವರ್ಷಗಳಿಂದ ಅಧಿಕಾರದಲ್ಲಿದ್ದರೂ ಅವಳಿ ನಗರದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿದರು.

ಗದಗ-ಬೆಟಗೇರಿ ಅವಳಿ ನಗರಕ್ಕೆ 20ರಿಂದ 25 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡದಿರುವುದರಿಂದ ಸಾವಿರಾರು ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘ಭಾಷಣದಿಂದ ನೀರಿನ ದಾಹ ತೀರದು, ಅವಳಿ ನಗರಕ್ಕೆ 24/7 ನೀರು ಪೂರೈಸಿ’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬರ ಘೋಷಣೆಯ ಸಂದರ್ಭದಲ್ಲಿ ಗಂಡಸ್ತನದ ಬಗ್ಗೆ ಮಾತನಾಡುವುದಷ್ಟೇ ಸಾಲದು, ಜನರಿಗೆ ಸಮರ್ಪಕವಾಗಿ ನೀರು ಪೂರೈಸುವ ಮೂಲಕ ಅದನ್ನು ತೋರಿಸಬೇಕು ಎಂದು ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕರು ನೀಡಿದ್ದ ಭರವಸೆಗಳು ಈಡೇರಿಲ್ಲ ಎಂದು ಆರೋಪಿಸಿದ ಅವರು, ಒಂದು ವಾರದೊಳಗೆ ನೀರಿನ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಗದಗದಿಂದ ಹುಲಕೋಟಿಯಲ್ಲಿರುವ ಎಚ್.ಕೆ. ಪಾಟೀಲ ಅವರ ನಿವಾಸದವರೆಗೆ ಪಾದಯಾತ್ರೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆ ಬಳಿಕ ಬಿಜೆಪಿ ಕಾರ್ಯಕರ್ತರು ನಗರಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ನಗರಸಭೆಯ ಮುಖ್ಯ ಗೇಟ್ ಬಳಿ ಬ್ಯಾರಿಕೇಡ್‌ಗಳನ್ನು ತಳ್ಳಿದ ಪ್ರತಿಭಟನಾಕಾರರು, ಗೇಟ್ ಹತ್ತಿ ಕಚೇರಿಯೊಳಗೆ ಪ್ರವೇಶಿಸಲು ಪ್ರಯತ್ನಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಹೈಡ್ರಾಮಾ ನಡೆಯಿತು. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಬಳಿಕ ಸ್ಥಳಕ್ಕೆ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ನೀರಿನ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಒತ್ತಾಯಿಸಿದರು. ಜಿಲ್ಲಾಧಿಕಾರಿಯವರ ನಿವೃತ್ತಿಗೂ ಮುನ್ನವೇ ಅವಳಿ ನಗರದ ಜನರಿಗೆ ಸಮರ್ಪಕ ಕುಡಿಯುವ ನೀರು ಕೊಡಿಸಿ ಎಂದು ಪ್ರತಿಭಟನಾಕಾರರು ವ್ಯಂಗ್ಯವಾಗಿ ಆಗ್ರಹಿಸಿದರು. ನೀರಿನ ಸಮಸ್ಯೆ ಬಗೆಹರಿಸುವಂತೆ ಸರ್ಕಾರ ಹಾಗೂ ಜಿಲ್ಲಾಡಳಿತದ ಮೇಲೆ ಒತ್ತಡ ಹೇರಲು ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಬಿಜೆಪಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES