SOCIAL MEDIA

Newsletter

PARTNER SITES
Select Language Select State

‘ಹೊಸ ವರ್ಷಕ್ಕೆ ಹೊಸ ಮುಖ್ಯಮಂತ್ರಿ’: ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಭವಿಷ್ಯ!

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಬೆಳಗಾವಿ ಅಧಿವೇಶನದ ವೇಳೆ ಶಾಸಕರ ಸಹಿ ಸಂಗ್ರಹ ನಡೆಯಲಿದ್ದು, ಹೊಸ ವರ್ಷದ ವೇಳೆಗೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ, ಸಿಎಂ ಸ್ಥಾನದಿಂದ ಡಿ.ಕೆ.ಶಿವಕುಮಾರ್ ಅವರನ್ನ ಕೆಳಗಿಳಿಸಲು ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, ಬರ ಪರಿಹಾರ ಮತ್ತು ಹಾಲಿನ ದರ ಏರಿಕೆ ವಿಚಾರವಾಗಿಯೂ ಸರ್ಕಾರವನ್ನ ಟೀಕಿಸಿದ್ದಾರೆ.

Written By Puttaraj K Alur
Published: Nov 13, 2026, 17:55 IST | Updated: Nov 13, 2026, 18:15 IST
Image Credit: B Sriramulu
Join

Congress Leadership Crisis: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಹೊಸ ವರ್ಷದ ವೇಳೆಗೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಶಾಸಕರ ಸಹಿ ಸಂಗ್ರಹ ನಡೆಯಲಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೊಸ ಬಾಂಬ್‌ ಸಿಡಿಸಿದ್ದಾರೆ. ಗದಗದಲ್ಲಿ ರೈತರೊಂದಿಗೆ ದೀಪಾವಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ರಾಜಕೀಯ ಬೆಳವಣಿಗೆಗಳ ಕುರಿತು ಹಲವು ಆರೋಪಗಳನ್ನ ಮಾಡಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಸಹಿ ಸಂಗ್ರಹ?

ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಕುರಿತು ಕಾಂಗ್ರೆಸ್‌ನಲ್ಲಿ ಚರ್ಚೆ ನಡೆಯುತ್ತಿದೆ ಎಂದು ಶ್ರೀರಾಮುಲು ಹೇಳಿದ್ದಾರೆ. ತಮ್ಮ ಬಳಿ ಇರುವ ಮಾಹಿತಿಯ ಪ್ರಕಾರ, ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಶಾಸಕರಿಂದ ಸಹಿ ಸಂಗ್ರಹಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಹೊಸ ವರ್ಷ ಆರಂಭವಾಗುವ ವೇಳೆಗೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕೆಲವು ಶಾಸಕರು ಸಹಿ ಸಂಗ್ರಹಿಸುತ್ತಿದ್ದಾರೆಂಬ ಮಾಹಿತಿ ತಮಗೆ ಲಭ್ಯವಾಗಿದೆ ಎಂದು ಹೇಳಿದ್ದಾರೆ.  

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರಾ?

ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆಂದು ಶ್ರೀರಾಮುಲು ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನ ಬಿಟ್ಟುಕೊಟ್ಟು ತಪ್ಪು ಮಾಡಿದೆ ಎಂದು ಸಿದ್ದರಾಮಯ್ಯ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆಂಬ ಮಾಹಿತಿಯೂ ಇದೆ ಎಂದು ಅವರು ತಿಳಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ದೆಹಲಿ ಪ್ರವಾಸ ಮುಗಿಸಿ ವಾಪಸಾದ ಬಳಿಕ ಸಿದ್ದರಾಮಯ್ಯರನ್ನ ಭೇಟಿಯಾಗಿರುವುದನ್ನೂ ಶ್ರೀರಾಮುಲು ಪ್ರಸ್ತಾಪಿಸಿದ್ದಾರೆ. ರಾಹುಲ್ ಗಾಂಧಿ ಕೂಡ ಅಸಮಾಧಾನಗೊಂಡಿದ್ದಾರೆಂಬ ವಿಚಾರ ತಿಳಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ದಾರೆಂದು ಅವರು ಆರೋಪಿಸಿದ್ದಾರೆ. ಈ ಬೆಳವಣಿಗೆಗಳನ್ನ ಉಲ್ಲೇಖಿಸಿದ ಶ್ರೀರಾಮುಲು, ಕಾಂಗ್ರೆಸ್‌ನೊಳಗೆ ನಾಯಕತ್ವದ ವಿಚಾರವಾಗಿ ಗೊಂದಲ ಮುಂದುವರಿದಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಾಸಕರಿಗೆ ಅನುದಾನ ನೀಡುತ್ತಿರುವುದೇಕೆ?

ಡಿ.ಕೆ.ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ನಡೆಯುತ್ತಿದೆ ಎಂಬುದು ತಿಳಿದಿರುವುದರಿಂದ ಶಾಸಕರಿಗೆ ಅನುದಾನ ನೀಡುವ ಮೂಲಕ ಅವರನ್ನ ಸಮಾಧಾನಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಶ್ರೀರಾಮುಲು ಆರೋಪಿಸಿದ್ದಾರೆ. ಸಹಿ ಸಂಗ್ರಹದ ವಿಚಾರ ಸರ್ಕಾರದ ಗಮನಕ್ಕೆ ಬಂದಿರುವುದರಿಂದ ಹೊಸ ರಾಜಕೀಯ ತಂತ್ರಗಳನ್ನ ಅನುಸರಿಸಲಾಗುತ್ತಿದೆ ಎಂದೂ ದೂರಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯ ಕುರಿತು ರಾಜ್ಯದ ಜನರೇ ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದ ಅವರು, ಕಾಂಗ್ರೆಸ್‌ನ ಆಂತರಿಕ ಬೆಳವಣಿಗೆಗಳ ಬಗ್ಗೆ ಟೀಕೆ ಮಾಡಿದ್ದಾರೆ.

ಬರ ಪರಿಹಾರ ಹಣದ ವಿಚಾರದಲ್ಲೂ ಸರ್ಕಾರಕ್ಕೆ ಟೀಕೆ

ರಾಜ್ಯ ಸರ್ಕಾರದ ಬರ ಪರಿಹಾರ ಕ್ರಮಗಳನ್ನೂ ಶ್ರೀರಾಮುಲು ಪ್ರಶ್ನಿಸಿದ್ದಾರೆ. ಬರಗಾಲ ಘೋಷಣೆ ಮಾಡಿದ ಬಳಿಕ ರೈತರಿಗೆ ₹2,500 ನೀಡುವುದಾಗಿ ಹೇಳಿ ಕೇವಲ ₹1,500 ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಉಳಿದ ₹1,000 ಹಣದ ಕುರಿತು ಪ್ರಶ್ನಿಸಿದಾಗ, ಅದನ್ನೂ ನೀಡುವುದಾಗಿ ಸರ್ಕಾರ ಹೇಳುತ್ತಿದೆ ಎಂದು ಟೀಕಿಸಿದ್ದಾರೆ. ಅಧಿಕಾರವನ್ನ ಉಳಿಸಿಕೊಳ್ಳುವ ಉದ್ದೇಶದಿಂದ ಸರ್ಕಾರ ಇಂತಹ ನಡೆ ಅನುಸರಿಸುತ್ತಿದೆ ಎಂಬುದು ಅವರ ಆರೋಪವಾಗಿದೆ. ರೈತರಿಗೆ ನೀಡಬೇಕಾದ ಪರಿಹಾರ ಮೊತ್ತದ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿಲುವು ತಳೆಯಬೇಕೆಂದು ಅವರು ಹೇಳಿದ್ದಾರೆ.

ಹಾಲಿನ ದರ ಏರಿಕೆ, ಎಥೆನಾಲ್ ಬಗ್ಗೆ ಶ್ರೀರಾಮುಲು ಹೇಳಿದ್ದೇನು?

ಹಾಲಿನ ದರ ಹೆಚ್ಚಳದ ವಿಚಾರವನ್ನೂ ಶ್ರೀರಾಮುಲು ತಮ್ಮ ಮಾತಿನಲ್ಲಿ ಉಲ್ಲೇಖಿಸಿದ್ದಾರೆ. ಹಾಲಿನ ದರ ಏರಿಕೆಯಾದಾಗ ಸಬ್ಸಿಡಿ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಆದರೆ ಸರ್ಕಾರದ ಬಳಿ ಹಣವಿಲ್ಲ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಅವರು ಟೀಕಿಸಿದ್ದಾರೆ. ಇದೇ ವೇಳೆ ರಾಜ್ಯದ ಪ್ರಮುಖ ವಿಚಾರಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಎಥೆನಾಲ್ ವಿಷಯವನ್ನ ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿದ್ದಾರೆ.

ಒಟ್ನಲ್ಲಿ ಬೆಳಗಾವಿ ಅಧಿವೇಶನದ ವೇಳೆ ಶಾಸಕರ ಸಹಿ ಸಂಗ್ರಹ ನಡೆಯಲಿದೆ, ಹೊಸ ವರ್ಷದ ವೇಳೆಗೆ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂಬ ಶ್ರೀರಾಮುಲು ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಆದರೆ ಅವರು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕತ್ವದಿಂದ ಅಧಿಕೃತ ಪ್ರತಿಕ್ರಿಯೆ ಇದುವರೆಗೂ ಬಂದಿಲ್ಲ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ZEENEWS TRENDING STORIES