SOCIAL MEDIA

Newsletter

PARTNER SITES
Select Language Select State

ರಾಯಚೂರಿನಲ್ಲಿ ಘೋರ ದುರಂತ: ಪತ್ನಿ, ಇಬ್ಬರು ಮಕ್ಕಳನ್ನ ಕೊಂ*ದು ರೈಲಿಗೆ ತಲೆಕೊಟ್ಟ ತಂದೆ!

ಆನ್‌ಲೈನ್ ಗೇಮಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ಕಳೆದುಕೊಂಡು ಸಾಲದ ಸುಳಿಗೆ ಸಿಲುಕಿದ್ದ ವಿಷ್ಣು ರೆಡ್ಡಿ (45), ರಾಯಚೂರಿನ ಜಲಾಲನಗರದ ಮನೆಯಲ್ಲಿ ಪತ್ನಿ ಅರುಣಾ (36), ಮಗ ಶ್ಲೋಕ (10) ಹಾಗೂ ಮಗಳು ಖುಷಿ (7) ಅವರನ್ನ ಉಸಿರುಗಟ್ಟಿಸಿ ಕೊ*ಲೆ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಚಿಕ್ಕಸುಗೂರು ಸಮೀಪ ರೈಲು ಹಳಿಗೆ ತಲೆಕೊಟ್ಟು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆತ್ಮಹ*ತ್ಯೆಗೂ ಮುನ್ನ ಮಗನಿಗೆ ಕರೆ ಮಾಡಿ ಕೃತ್ಯದ ಬಗ್ಗೆ ತಿಳಿಸಿದ್ದರೆನ್ನಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

Written By Puttaraj K Alur
Published: Nov 01, 2026, 07:03 PM IST | Updated: Nov 01, 2026, 08:06 PM IST
Image Credit: Raichur Tragedy
Join

Raichur Tragedy: ಆನ್‌ಲೈನ್ ಗೇಮಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ಕಳೆದುಕೊಂಡು ಸಾಲದ ಸುಳಿಗೆ ಸಿಲುಕಿದ್ದ ವ್ಯಕ್ತಿಯೊಬ್ಬರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಉಸಿರುಗಟ್ಟಿಸಿ ಕೊ*ಲೆ ಮಾಡಿ, ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಜಲಾಲನಗರದ ಮನೆಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿದ್ದು, ಸ್ವಲ್ಪ ಸಮಯದ ಬಳಿಕ ನಾಪತ್ತೆಯಾಗಿದ್ದ ತಂದೆಯೂ ರೈಲು ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ರಾಯಚೂರಿನ ಜಲಾಲನಗರದಲ್ಲಿ ಈ ಘಟನೆ ನಡೆದಿದ್ದು, ಅರುಣಾ (36), ಪುತ್ರ ಶ್ಲೋಕ (10) ಹಾಗೂ ಪುತ್ರಿ ಖುಷಿ (7) ಮೃತಪಟ್ಟವರು. ಮನೆಯಲ್ಲಿ ಮೂವರ ಮೃತದೇಹಗಳು ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಷ್ಣು ರೆಡ್ಡಿ ಎಂಬುವವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಉಸಿರುಗಟ್ಟಿಸಿ ಕೊ*ಲೆ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಅವರು ಮನೆಯಿಂದ ನಾಪತ್ತೆಯಾಗಿದ್ದರು. ಪ್ರಕರಣದ ಕುರಿತು ಮಾರ್ಕೆಟ್ ಯಾರ್ಡ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದರು. ಮೃತದೇಹಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿತ್ತು.

ಇತ್ತ ನಾಪತ್ತೆಯಾಗಿದ್ದ ವಿಷ್ಣು ರೆಡ್ಡಿ ಅವರು ರಾಯಚೂರು ತಾಲ್ಲೂಕಿನ ಚಿಕ್ಕಸುಗೂರು ಸಮೀಪದ ರೈಲು ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರೈಲಿಗೆ ತಲೆಕೊಟ್ಟು ಅವರು ಆತ್ಮಹ*ತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಈ ಮಾಹಿತಿ ತಿಳಿದ ರೈಲ್ವೆ ಪೊಲೀಸರು ಹಾಗೂ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ತೆಲಂಗಾಣದ ನಾರಾಯಣಪುರ ಮೂಲದ ವಿಷ್ಣು ರೆಡ್ಡಿ ಆನ್‌ಲೈನ್ ಗೇಮಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ಹಣವನ್ನ ಕಳೆದುಕೊಂಡಿದ್ದರು. ಈ ನಷ್ಟವನ್ನ ಭರಿಸಲು ಸಾಲವನ್ನೂ ಮಾಡಿಕೊಂಡಿದ್ದರು ಎನ್ನಲಾಗಿದೆ. ಆರ್ಥಿಕ ಸಂಕಷ್ಟವೇ ಈ ದುರಂತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಘಟನೆಯ ಹಿಂದಿನ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.

ಇನ್ನೊಂದು ಪ್ರಮುಖ ಮಾಹಿತಿಯಂತೆ, ಆತ್ಮಹ*ತ್ಯೆ ಮಾಡಿಕೊಳ್ಳುವ ಮುನ್ನ ವಿಷ್ಣು ರೆಡ್ಡಿ ಅವರು ತಮ್ಮ ಮಗನಿಗೆ ದೂರವಾಣಿ ಕರೆ ಮಾಡಿದ್ದರು ಎನ್ನಲಾಗಿದೆ. ಆ ಸಂದರ್ಭದಲ್ಲಿ ಪತ್ನಿ ಮತ್ತು ಮಕ್ಕಳನ್ನ ತಾನೇ ಕೊ*ಲೆ ಮಾಡಿರುವುದಾಗಿ ಹೇಳಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ದೂರವಾಣಿ ಸಂಭಾಷಣೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಡಿವೈಎಸ್ಪಿ ಶಾಂತವೀರ ಅವರ ನೇತೃತ್ವದಲ್ಲಿ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಮನೆಯಲ್ಲಿನ ಪರಿಸ್ಥಿತಿ, ಮೃತದೇಹಗಳ ಸ್ಥಿತಿ ಹಾಗೂ ಕುಟುಂಬದ ಹಿನ್ನೆಲೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಯುತ್ತಿದೆ. ರೈಲು ಹಳಿಯಲ್ಲಿ ವಿಷ್ಣು ರೆಡ್ಡಿ ಅವರ ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಪೊಲೀಸರು ಮತ್ತು ಗ್ರಾಮೀಣ ಠಾಣೆಯ ಪೊಲೀಸರು ಕೂಡ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ನಾಲ್ವರ ಮೃತದೇಹಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಾವಿನ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಯು ಗಿರಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಕುಟುಂಬದ ನಾಲ್ವರ ಸಾವಿಗೆ ಸಂಬಂಧಿಸಿದಂತೆ ಅಧಿಕೃತ ತನಿಖಾ ವರದಿಯಿಂದ ಹೆಚ್ಚಿನ ವಿವರಗಳು ಬಹಿರಂಗವಾಗಬೇಕಿದೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES