ಕಬ್ಬಿಣದ ಪ್ಲೇಟ್ ತಲೆಯ ಮೇಲೆ ಬಿದ್ದು ಕಾರ್ಮಿಕ ಸಾವು
ಧಾರವಾಡ ತಾಲೂಕಿನ ಅಳ್ನಾವರ ಪಟ್ಟಣದ ಹರಿಕೃಷ್ಣ ಸಾ ಮಿಲ್ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ತಲೆಯ ಮೇಲೆ ಕಬ್ಬಿಣದ ಪ್ಲೇಟ್ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಧಾರವಾಡ: ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಆಕಸ್ಮಿಕವಾಗಿ ಕಬ್ಬಿಣದ ಪ್ಲೇಟ್ ತಲೆಯ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಅಳ್ನಾವರ ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಯನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ತಿಮ್ಮಾಪೂರ ಗ್ರಾಮದ ನಿವಾಸಿ 44 ವರ್ಷದ ಹಸನಸಾಬ ಪಠಾಣ ಎಂದು ಗುರುತಿಸಲಾಗಿದೆ.
ಮಾಹಿತಿ ಪ್ರಕಾರ, ಹಸನಸಾಬ ಪಠಾಣ ಅವರು ಅಳ್ನಾವರ ಪಟ್ಟಣದ ಹರಿಕೃಷ್ಣ ಸಾ ಮಿಲ್ (Saw Mill) ಆವರಣದಲ್ಲಿ ನಡೆಯುತ್ತಿದ್ದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕಟ್ಟಡದ ಕೆಲಸದಲ್ಲಿ ನಿರತರಾಗಿದ್ದಾಗ, ಮೇಲ್ಭಾಗದಿಂದ ಭಾರವಾದ ಕಬ್ಬಿಣದ ಪ್ಲೇಟ್ ಆಕಸ್ಮಿಕವಾಗಿ ಜಾರಿ ನೇರವಾಗಿ ಅವರ ತಲೆಯ ಮೇಲೆ ಬಿದ್ದಿದೆ ಎನ್ನಲಾಗಿದೆ. ಕಬ್ಬಿಣದ ಪ್ಲೇಟ್ ಬಿದ್ದ ರಭಸಕ್ಕೆ ಹಸನಸಾಬ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು, ಸ್ಥಳದಲ್ಲೇ ರಕ್ತ ಸ್ರಾವವಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆ ನಡೆದ ತಕ್ಷಣವೇ ಅಲ್ಲಿದ್ದ ಸಹ ಕಾರ್ಮಿಕರು ಹಾಗೂ ಸ್ಥಳೀಯರು ಗಾಯಾಳು ಹಸನಸಾಬ ನನ್ನು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ನಿಗಾ ಘಟಕದಲ್ಲಿ (ICU) ವೈದ್ಯರು ಸತತ ಚಿಕಿತ್ಸೆ ನೀಡಿದರಾದರೂ, ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಹಸನಸಾಬ ಮೃತ ಪಟ್ಟಿದ್ದಾರೆ. ಇದೀಗ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ.
ದುಡಿಮೆಗಾಗಿ ಹಳಿಯಾಳ ತಾಲೂಕಿನ ತಿಮ್ಮಾಪೂರದಿಂದ ಅಳ್ನಾವರಕ್ಕೆ ಬಂದು ಕೆಲಸ ಮಾಡುತ್ತಿದ್ದ ಕುಟುಂಬದ ಆಧಾರ ಸ್ತಂಭವನ್ನು ಕಳೆದು ಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕಟ್ಟಡ ನಿರ್ಮಾಣ ಸ್ಥಳದಲ್ಲಿ ಸುರಕ್ಷತಾ ಕ್ರಮಗಳ ಕೊರತೆಯೇ ಈ ದುರ್ಘಟನೆಗೆ ಕಾರಣವೇ ಎಂಬ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.
ಇದೀಗ ಗುತ್ತಿಗೆದಾರರು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಕಾರ್ಮಿಕರಿಗೆ ಹೆಲ್ಮೆಟ್ ಸೇರಿದಂತೆ ಅಗತ್ಯ ಸುರಕ್ಷತಾ ಸಾಧನಗಳನ್ನು ಒದಗಿಸದೇ ನಿರ್ಲಕ್ಷಿಸಿರುವುದೇ ಈ ದುರಂತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಳ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.