ಮಂಡ್ಯ: ಕುಟುಂಬದವರೊಂದಿಗೆ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾದ ಮಂಡ್ಯದ ಕೃಷಿ ಅಧಿಕಾರಿ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮಂಡ್ಯದ ರಾಜ್ಯ ಕೀಟನಾಶಕ ಪರಿವೀಕ್ಷಣಾ ಪ್ರಯೋಗಾಲಯದಲ್ಲಿ ಕೃಷಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರೇಶ್ ಎಂ.ಎಸ್. (48) ಅವರು ಮೃತಪಟ್ಟವರು.
ಚಂದ್ರೇಶ್ ಅವರು ಕುಟುಂಬದವರೊಂದಿಗೆ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಈ ವೇಳೆ ಸಕಲೇಶಪುರದ ಬಳಿ ಏಕಾಏಕಿ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾಗಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದು, ಚಿಕಿತ್ಸೆಗಾಗಿ ಕರೆದೊಯ್ಯುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಚಂದ್ರೇಶ್ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸಹೋದ್ಯೋಗಿಗಳಲ್ಲಿ ತೀವ್ರ ದುಃಖ ಆವರಿಸಿದೆ. ಕೃಷಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು ಎಂದು ತಿಳಿದುಬಂದಿದೆ.
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕೃಷಿ ಇಲಾಖೆ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳು ಚಂದ್ರೇಶ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದು, ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಮೃತ ಚಂದ್ರೇಶ್ ಅವರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕನಹಳ್ಳಿಯಲ್ಲಿ ನಾಳೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ಕುಟುಂಬದವರೊಂದಿಗೆ ಸಂತಸದ ಪ್ರಯಾಣಕ್ಕೆ ತೆರಳಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದ್ದು, ಚಂದ್ರೇಶ್ ಅವರ ಅಕಾಲಿಕ ನಿಧನ ಕುಟುಂಬಸ್ಥರಿಗೆ ಆಘಾತವನ್ನುಂಟು ಮಾಡಿದೆ.