ಬೆಲೆ ಏರಿಕೆಯನ್ನು ಡೈವರ್ಟ್ ಮಾಡಲು ಎಥೆನಾಲ್ ವಿಚಾರ ಮುನ್ನೆಲೆಗೆ: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಗಮನ ಬೇರೆಡೆಗೆ ತಿರುಗಿಸಲು ಎಥೆನಾಲ್ ವಿಚಾರವನ್ನು ಮುನ್ನೆಲೆಗೆ ತರಲಾಗಿದೆ ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.
ಬೆಲೆ ಏರಿಕೆಯನ್ನು ಡೈವರ್ಟ್ ಮಾಡಲು ಎಥೆನಾಲ್ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು ಮೈಸೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಬಗ್ಗೆಯೂ ಮಾಹಿತಿ ನೀಡಿದರು.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಎಥೆನಾಲ್ ವಿಚಾರ ಮುಂದಕ್ಕೆ ತಂದಿದ್ದಾರೆ. ಈ ಬಗ್ಗೆ ಸೂಕ್ತ ದಾಖಲೆಗಳಿದ್ದರೆ ಕೊಡಲಿ, ಸುಮ್ಮನೆ ಆರೋಪಗಳನ್ನು ಮಾಡಬಾರದು. ಎಥೆನಾಲ್ ಬಳಕೆಯಿಂದ ವಾಹನಗಳ ಕಾರ್ಯಕ್ಷಮತೆ ಹಾಳಾಗುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ವಿಶ್ವದ ಮೊದಲ ತಾರಾಲಯ:
ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಿರುವ ತಾರಾಲಯ ಉದ್ಘಾಟನೆ ಮಾಡಲಿದ್ದಾರೆ. ಇದು ವಿಶ್ವದ ಮೊದಲ ತಾರಾಲಯ ಆಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ಅನುದಾನ ನೀಡಿದ್ದಾರೆ. ನೂತನ ತಾರಾಲಯದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆಯಲು ಅನುಕೂಲವಾಗಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವೆ ಸಂಘರ್ಷ:
ಮೈಸೂರು ಅರಮನೆ ಒಡೆತನದ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವೆ ಸಂಘರ್ಷ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಈ ಬಗ್ಗೆ ಈಗಾಗಲೇ ತಾಯಿಯವರು ಮಾತನಾಡಿದ್ದಾರೆ. ಈ ವಿಚಾರ ನ್ಯಾಯಾಲಯದ ಸುಪರ್ದಿಯಲ್ಲಿದೆ ಹಾಗಾಗಿ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ಕಾನೂನಾತ್ಮಕವಾಗಿಯೇ ಎಲ್ಲವೂ ಬಗೆಹರಿಯಲಿದೆ ಎಂದರು.
ಮೈಸೂರು ಅರಮನೆಯನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಲು ಕಾರ್ಯಾಂಗದ ದುರ್ಬಳಕೆ ಮಾಡಿಕೊಳ್ಳುವ ಯತ್ನಗಳು ನಡೆದಿವೆ. ನ್ಯಾಯಾಲಯದ ಮೂಲಕ ನ್ಯಾಯ ಸಿಗುವ ವಿಶ್ವಾಸವಿದೆ. ಈ ಬಾರಿಯ ದಸರಾದಲ್ಲಿ ಆಗಿರುವ ಕೆಲ ಲೋಪಗಳನ್ನು ಮುಂದಿನ ದಸರಾದಲ್ಲಿ ಸರಿಪಡಿಸಿಕೊಳ್ಳುವ ಅಗತ್ಯವಿದೆ. ಈ ಬಾರಿಯ ದಸರಾ ಮುಗಿದು ಹೋಗಿದೆ.
ಹಾಗಾಗಿ ಲೋಪಗಳ ಬಗ್ಗೆ ಚರ್ಚೆ ಮುಂದುವರಿಸುವ ಅಗತ್ಯವಿಲ್ಲ. ಅರಮನೆ ಆವರಣದ ಭದ್ರತೆಯನ್ನು ಹೊರಗಿನವರಿಗೆ ವಹಿಸಿದ್ದರಿಂದ ಜೆಟ್ಟಿಕಾಳಗಕ್ಕೆ ಅಡಚಣೆ ಆಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಸುದ್ದಿಗೋಷ್ಠಿ ವೇಳೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೊಂದಿಗೆ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ, ಎಂಎಲ್ಸಿ., ರಘು ಕೌಟಿಲ್ಯ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ಮಾಜಿ ಮೇಯರ್ ಸಂದೇಶ್ ಸ್ವಾಮಿ, ಬಿಜೆಪಿ ವಕ್ತಾರ ಮೋಹನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.