SOCIAL MEDIA

Newsletter

PARTNER SITES
Select Language Select State

ಅ.23ಕ್ಕೆ ಮಂಡ್ಯದಲ್ಲಿ ಅನ್ನದಾತರ ರಣಕಹಳೆ! ಬೆಂಗಳೂರು–ಮೈಸೂರು ಹೆದ್ದಾರಿ ಬಂದ್‌ಗೆ ಕರೆ!

ಕಬ್ಬು ಬೆಳೆಗಾರರಿಗೆ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ನ್ಯಾಯಯುತ ಬೆಲೆ ಸಿಗುತ್ತಿಲ್ಲವೆಂಬುದು ರೈತರ ಪ್ರಮುಖ ಆರೋಪವಾಗಿದೆ. ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ರೈತ ಸಂಘ ಆಗ್ರಹಿಸಿದೆ. ಕಬ್ಬಿನ ಬೆಲೆ ನಿಗದಿಗೆ ಸಂಬಂಧಿಸಿದ ವಿಚಾರವನ್ನ ಕೇಂದ್ರ ಸರ್ಕಾರದ ಗಮನಕ್ಕೆ ತಂದಿರುವುದಾಗಿ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

Written By Puttaraj K Alur
Published: Oct 19, 2026, 04:17 PM IST | Updated: Oct 19, 2026, 04:40 PM IST
Image Credit: Mandya Farmers Protest
Join

Farmers Protest: ಕಬ್ಬಿಗೆ ಸೂಕ್ತ ಬೆಲೆ ನಿಗದಿ, ಬಾಕಿ ಹಣ ಪಾವತಿ ಹಾಗೂ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಅಕ್ಟೋಬರ್ 23ರಂದು ಮಂಡ್ಯದಲ್ಲಿ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ನೀಡಿದೆ. ಮಂಡ್ಯ ತಾಲೂಕಿನ ಗಣಂಗೂರು ಟೋಲ್ ಬಳಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ರೈತರ ಬೇಡಿಕೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನ ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನೂ ರೈತ ಸಂಘ ನೀಡಿದೆ. ಮಂಡ್ಯದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ, ಕಬ್ಬು ಬೆಳೆಗಾರರ ಸಮಸ್ಯೆಗಳು, ಸಕ್ಕರೆ ಕಾರ್ಖಾನೆಗಳಿಂದ ಬರಬೇಕಿರುವ ಬಾಕಿ ಹಣ ಹಾಗೂ ರೈತರ ಸಾಲ ಮನ್ನಾ ವಿಚಾರವಾಗಿ ಸರ್ಕಾರಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಟನ್ ಕಬ್ಬಿಗೆ ₹5,500 ನೀಡಲು ಆಗ್ರಹ

ಕಬ್ಬು ಬೆಳೆಗಾರರಿಗೆ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ನ್ಯಾಯಯುತ ಬೆಲೆ ಸಿಗುತ್ತಿಲ್ಲವೆಂಬುದು ರೈತರ ಪ್ರಮುಖ ಆರೋಪವಾಗಿದೆ. ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ರೈತ ಸಂಘ ಆಗ್ರಹಿಸಿದೆ. ಕಬ್ಬಿನ ಬೆಲೆ ನಿಗದಿಗೆ ಸಂಬಂಧಿಸಿದ ವಿಚಾರವನ್ನ ಕೇಂದ್ರ ಸರ್ಕಾರದ ಗಮನಕ್ಕೆ ತಂದಿರುವುದಾಗಿ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ. ಕಬ್ಬು ಬೆಳೆಯಲು ಬೀಜ, ಗೊಬ್ಬರ, ಔಷಧ, ನೀರಾವರಿ, ಕಾರ್ಮಿಕರ ಕೂಲಿ ಸೇರಿದಂತೆ ಹಲವು ವೆಚ್ಚಗಳನ್ನ ರೈತರು ಭರಿಸಬೇಕಾಗುತ್ತದೆ. ಆದರೆ ಇಷ್ಟೆಲ್ಲಾ ಖರ್ಚು ಮಾಡಿದರೂ ನಿರೀಕ್ಷಿತ ಆದಾಯ ದೊರೆಯದಿದ್ದರೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಾರೆ. ಹೀಗಾಗಿ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಿ ರೈತರ ಹಿತ ಕಾಪಾಡಬೇಕು ಎಂಬುದು ಸಂಘದ ಒತ್ತಾಯವಾಗಿದೆ.

ಸಕ್ಕರೆ ಕಾರ್ಖಾನೆಗಳ ಬಾಕಿ ಹಣದ ಸಮಸ್ಯೆ

ರಾಜ್ಯದಲ್ಲಿನ ಸಕ್ಕರೆ ಕಾರ್ಖಾನೆಗಳ ಮೇಲೆ ಸರ್ಕಾರಕ್ಕೆ ಸಂಪೂರ್ಣ ನಿಯಂತ್ರಣವಿಲ್ಲವೆಂದು ಬಡಗಲಪುರ ನಾಗೇಂದ್ರ ಆರೋಪಿಸಿದ್ದಾರೆ. ಸಕ್ಕರೆ ಕಾರ್ಖಾನೆಗಳು ವಿವಿಧ ರಾಜಕೀಯ ಪಕ್ಷಗಳ ನಾಯಕರ ಒಡೆತನದಲ್ಲಿರುವುದರಿಂದ ಅವುಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲವೆಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಕೆಲವು ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸಬೇಕಾದ ಹಣವನ್ನ ಬಾಕಿ ಉಳಿಸಿಕೊಂಡಿವೆ ಎಂದು ಅವರು ದೂರಿದ್ದಾರೆ. ಕಬ್ಬು ಪೂರೈಸಿದ ರೈತರಿಗೆ ಸಕಾಲದಲ್ಲಿ ಹಣ ಪಾವತಿಯಾಗದಿದ್ದರೆ ಮುಂದಿನ ಬೆಳೆಗಾಗಿ ಬಂಡವಾಳ ಹೊಂದಿಸುವುದು ಕಷ್ಟವಾಗುತ್ತದೆ. ಸಾಲ ಮಾಡಿ ಕೃಷಿ ನಡೆಸುವ ರೈತರು ಮತ್ತಷ್ಟು ಆರ್ಥಿಕ ಒತ್ತಡಕ್ಕೆ ಒಳಗಾಗುತ್ತಾರೆ. ಆದ್ದರಿಂದ ಕಾರ್ಖಾನೆಗಳಿಂದ ಬರಬೇಕಿರುವ ಬಾಕಿ ಹಣವನ್ನ ತಕ್ಷಣ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘ ಒತ್ತಾಯಿಸಿದೆ.

ತಮಿಳುನಾಡಿನ ಮಾದರಿಯಲ್ಲೂ ಪರಿಹಾರಕ್ಕೆ ಒತ್ತಾಯ

ಕಬ್ಬಿನ ಬೆಲೆ ಮತ್ತು ರೈತರಿಗೆ ದೊರೆಯುವ ಹೆಚ್ಚುವರಿ ಹಣದ ವಿಚಾರದಲ್ಲಿ ತಮಿಳುನಾಡಿನ ಉದಾಹರಣೆಯನ್ನ ಪ್ರಸ್ತಾಪಿಸಿದ ಬಡಗಲಪುರ ನಾಗೇಂದ್ರ, ಅಲ್ಲಿ 9 ಪಾಯಿಂಟ್ ರಿಕವರಿ ಆಧಾರದ ಮೇಲೆ ರೈತರಿಗೆ ಟನ್ ಕಬ್ಬಿಗೆ ₹800 ಹೆಚ್ಚುವರಿ ಹಣ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಕರ್ನಾಟಕದಲ್ಲಿಯೂ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ಹಾಗೂ ಸೂಕ್ತ ಪರಿಹಾರ ದೊರೆಯಬೇಕು ಎಂಬುದು ರೈತ ಸಂಘದ ಬೇಡಿಕೆಯಾಗಿದೆ. ಕಬ್ಬಿನ ಬೆಲೆ ನಿಗದಿ ಮತ್ತು ಹೆಚ್ಚುವರಿ ಪಾವತಿಯ ಕುರಿತು ಸರ್ಕಾರಗಳು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.  

ರೈತರ ಸಾಲ ಮನ್ನಾಕ್ಕೂ ಪಟ್ಟು

ಕಬ್ಬಿನ ಬೆಲೆ ಹೆಚ್ಚಳದ ಜೊತೆಗೆ ರೈತರ ಸಾಲ ಮನ್ನಾ ಮಾಡಬೇಕೆಂಬ ಬೇಡಿಕೆಯನ್ನೂ ರೈತ ಸಂಘ ಮುಂದಿಟ್ಟಿದೆ. ಕೃಷಿ ವೆಚ್ಚ ಏರಿಕೆ, ಬೆಳೆಗಳಿಗೆ ಸೂಕ್ತ ಬೆಲೆ ಸಿಗದಿರುವುದು ಹಾಗೂ ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಹಣ ಪಾವತಿಯಾಗದಿರುವುದು ರೈತರ ಸಂಕಷ್ಟವನ್ನ ಹೆಚ್ಚಿಸಿದೆ ಎಂದು ಸಂಘದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ರೈತರ ಆರ್ಥಿಕ ಪರಿಸ್ಥಿತಿಯನ್ನ ಸುಧಾರಿಸಲು ಸಾಲ ಮನ್ನಾ ಸೇರಿದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳಬೇಕೆಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನ ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗಿ

ಅಕ್ಟೋಬರ್ 23ರಂದು ಗಣಂಗೂರು ಟೋಲ್ ಬಳಿ ನಡೆಯಲಿರುವ ಹೆದ್ದಾರಿ ತಡೆ ಪ್ರತಿಭಟನೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸಲಿದ್ದಾರೆಂದು ಸಂಘದ ಮುಖಂಡರು ತಿಳಿಸಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆಗಳನ್ನ ಸರ್ಕಾರಗಳ ಗಮನಕ್ಕೆ ತಂದು ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಹಕ್ಕೊತ್ತಾಯಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ ನೀಡಿದೆ.

ಒಟ್ನಲ್ಲಿ ಕಬ್ಬಿನ ಬೆಲೆ ಏರಿಕೆ, ಕಾರ್ಖಾನೆಗಳಿಂದ ಬಾಕಿ ಹಣ ಪಾವತಿ ಮತ್ತು ರೈತರ ಸಾಲ ಮನ್ನಾ ಎಂಬ ಮೂರು ಪ್ರಮುಖ ಬೇಡಿಕೆಗಳನ್ನ ಮುಂದಿಟ್ಟುಕೊಂಡು ಮಂಡ್ಯದಲ್ಲಿ ರೈತರು ಬೀದಿಗಿಳಿಯಲು ಸಜ್ಜಾಗಿದ್ದಾರೆ. ಅಕ್ಟೋಬರ್ 23ರ ಹೆದ್ದಾರಿ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು–ಮೈಸೂರು ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಸಂಚಾರ ವ್ಯತ್ಯಯದ ಸಾಧ್ಯತೆಯನ್ನ ಗಮನದಲ್ಲಿಟ್ಟುಕೊಂಡು ಪ್ರಯಾಣ ಯೋಜಿಸಬೇಕಿದೆ.  

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES