SOCIAL MEDIA

Newsletter

PARTNER SITES
Select Language Select State

ಸಾಂಸೃತಿಕ ನಗರಿಯಲ್ಲಿ ಕಸದ ರಾಶಿ ಸ್ಥಳಕ್ಕೆ ಹಠಾತ್ ಭೇಟಿ ನೀಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಹಲವು ವರ್ಷಗಳಿಂದ ಲಲಿತಾದ್ರಿಪುರದಲ್ಲಿ ರಾಶಿ ರಾಶಿ ಬಿದ್ದಿದ್ದ ನೂರಾರು ಟನ್ ತ್ಯಾಜ್ಯವನ್ನು ಪಾಲಿಕೆ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ತೆರವುಗೊಳಿಸಲಾಗಿದೆ. ಮತ್ತೆ ಕಸ ಸುರಿಯುವುದನ್ನು ತಡೆಯಲು ಸಿಸಿಟಿವಿ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ.

Written By Yashaswini V
Published: Oct 23, 2026, 05:00 PM IST | Updated: Oct 23, 2026, 05:03 PM IST
Join

ಮೈಸೂರು: ಮೈಸೂರಿನ ಲಲಿತಾದ್ರಿಪುರದಲ್ಲಿ ಹಲವಾರು ವರ್ಷಗಳಿಂದ ರಾಶಿಯಾಗಿ ಬಿದ್ದಿದ್ದ ನೂರಾರು ಟನ್ ಕಸ ಹಾಗೂ ತ್ಯಾಜ್ಯವನ್ನು ತೆರವುಗೊಳಿಸಿ, ಪ್ರದೇಶವನ್ನು ಸ್ವಚ್ಛಗೊಳಿಸಲಾಗಿದೆ. ಈ ಹಿಂದೆ ಕಸದ ರಾಶಿ ಬಿದ್ದಿದ್ದ ಸ್ಥಳಕ್ಕೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹಠಾತ್ ಭೇಟಿ ನೀಡಿ ಪರಿಶೀಲಿಸಿ, ಕಟ್ಟುನಿಟ್ಟಿನ ಸೂಚನೆ ನೀಡಿದ್ದರಿಂದ ಎಚ್ಚೆತ್ತುಕೊಂಡ ಮೈಸೂರು ಮಹಾನಗರ ಪಾಲಿಕೆ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ.

ಇಂದು ಮತ್ತೊಮ್ಮೆ ಆ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸ್ವಚ್ಛತಾ ಕಾರ್ಯವನ್ನು ಖುದ್ದಾಗಿ ಪರಿಶೀಲಿಸಿದರು. ಈ ಪ್ರದೇಶದಲ್ಲಿ ಮತ್ತೆ ಕಸದ ರಾಶಿ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸುವುದರ ಜೊತೆಗೆ ರಸ್ತೆಯ ಸೌಂದರ್ಯೀಕರಣಕ್ಕೂ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಲಲಿತಾದ್ರಿಪುರದ ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಗೂ ತ್ಯಾಜ್ಯ ಸುರಿಯುತ್ತಿದ್ದ ಪರಿಣಾಮ ಹಲವಾರು ವರ್ಷಗಳಿಂದ ಈ ಪ್ರದೇಶದಲ್ಲಿ ನೂರಾರು ಟನ್ ಕಸ ಸಂಗ್ರಹವಾಗಿತ್ತು. ಕಸದ ರಾಶಿಯಿಂದ ಹಾಳಾಗಿದ್ದ ಪ್ರದೇಶದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಸಾರ್ವಜನಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿ, ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದ್ದರು.

ಈ ವಿಚಾರ ಗಮನಕ್ಕೆ ಬಂದ ತಕ್ಷಣ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕಸದ ರಾಶಿ ಬಿದ್ದಿದ್ದ ಸ್ಥಳಕ್ಕೆ ಹಠಾತ್ ಭೇಟಿ ನೀಡಿ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದ್ದರು. ರಸ್ತೆಯ ಇಕ್ಕೆಲಗಳಲ್ಲಿ ಸಂಗ್ರಹವಾಗಿದ್ದ ಕಸ ಹಾಗೂ ತ್ಯಾಜ್ಯವನ್ನು ತಕ್ಷಣವೇ ತೆರವುಗೊಳಿಸಿ, ಪ್ರದೇಶವನ್ನು ಸಂಪೂರ್ಣ ಸ್ವಚ್ಛಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

ಸಚಿವರ ಸೂಚನೆಯಂತೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಹಲವಾರು ವರ್ಷಗಳಿಂದ ಸಂಗ್ರಹವಾಗಿದ್ದ ನೂರಾರು ಟನ್ ಕಸ ಹಾಗೂ ತ್ಯಾಜ್ಯವನ್ನು ತೆರವುಗೊಳಿಸಿ ಸ್ವಚ್ಛತಾ ಕಾರ್ಯ ಪೂರ್ಣಗೊಳಿಸಿದ್ದಾರೆ. ಈ ಮೂಲಕ ದೀರ್ಘಕಾಲದಿಂದ ಸಾರ್ವಜನಿಕರ ಗಮನ ಸೆಳೆದಿದ್ದ ತ್ಯಾಜ್ಯ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗಿದೆ.

ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ಸಿಸಿಟಿವಿ ಅಳವಡಿಕೆ: 
ಸ್ವಚ್ಛಗೊಳಿಸಿರುವ ಪ್ರದೇಶದಲ್ಲಿ ಮತ್ತೆ ಕಸ ಹಾಗೂ ತ್ಯಾಜ್ಯ ಸುರಿಯುವುದನ್ನು ತಡೆಗಟ್ಟಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಪ್ರದೇಶದಲ್ಲಿ ಮತ್ತೆ ಕಸದ ರಾಶಿ ಸೃಷ್ಟಿಯಾಗದಂತೆ ಆಲನಹಳ್ಳಿ ಗ್ರಾಮ ಪಂಚಾಯಿತಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಮೈಸೂರು ಮಹಾನಗರ ಪಾಲಿಕೆ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಂಬಂಧಪಟ್ಟ ಎಲ್ಲ ಸ್ಥಳೀಯ ಸಂಸ್ಥೆಗಳು ನಿರಂತರ ನಿಗಾ ವಹಿಸಿ, ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಸ್ವಚ್ಛಗೊಂಡ ಪ್ರದೇಶದ ಸೌಂದರ್ಯೀಕರಣಕ್ಕೆ ಸೂಚನೆ: 
ಸ್ವಚ್ಛತಾ ಕಾರ್ಯವನ್ನು ಪರಿಶೀಲಿಸಿದ ಸಚಿವರು, ಈ ಪ್ರದೇಶವನ್ನು ಮತ್ತಷ್ಟು ಸುಂದರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಸ್ತೆಯ ಬದಿಯಲ್ಲಿ ಪಾದಚಾರಿ ಮಾರ್ಗ ನಿರ್ಮಿಸಬೇಕು. ರಸ್ತೆಯ ಇಕ್ಕೆಲಗಳಲ್ಲಿ ಅಲಂಕಾರಿಕ ಗಿಡಗಳನ್ನು ನೆಟ್ಟು ಹಸಿರು ವಾತಾವರಣ ನಿರ್ಮಿಸಬೇಕು. ಇಡೀ ಪ್ರದೇಶವನ್ನು ಆಕರ್ಷಕವಾಗಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು  ಅಧಿಕಾರಿಗಳಿಗೆ ಸೂಚಿಸಿದರು.

ಮತ್ತೆ ಕಸ ಸುರಿದರೆ ನಿರ್ದಾಕ್ಷಿಣ್ಯ ಕ್ರಮ: 
ಈ ಪ್ರದೇಶದಲ್ಲಿ ಮತ್ತೆ ಕಸ ಹಾಗೂ ತ್ಯಾಜ್ಯ ಸುರಿಯುವುದನ್ನು ತಡೆಗಟ್ಟಲು ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ವತಿಯಿಂದ ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಬೇಕು. ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ಪ್ರದೇಶದ ಸ್ವಚ್ಛತೆಯನ್ನು ನಿರಂತರವಾಗಿ ಕಾಪಾಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಜಾಗೃತಿ ಮೂಡಿಸಿದ ನಂತರವೂ ಯಾರಾದರೂ ಈ ಪ್ರದೇಶಕ್ಕೆ ಕಸ ಹಾಗೂ ತ್ಯಾಜ್ಯವನ್ನು ತಂದು ಸುರಿದರೆ ಅಂತಹವರನ್ನು ಗುರುತಿಸಿ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವುದರ ಜೊತೆಗೆ ಅಗತ್ಯವಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಲಲಿತಾದ್ರಿಪುರದಲ್ಲಿ ಕೈಗೊಂಡಿರುವ ಸ್ವಚ್ಛತಾ ಕಾರ್ಯದ ಫಲಿತಾಂಶ ಶಾಶ್ವತವಾಗಿರಬೇಕು. ಈ ಪ್ರದೇಶದಲ್ಲಿ ಮತ್ತೆ ಕಸದ ರಾಶಿ ಸೃಷ್ಟಿಯಾಗದಂತೆ ನಿಗಾ ವಹಿಸಬೇಕು. ಸ್ವಚ್ಛತೆ ಹಾಗೂ ನೈರ್ಮಲ್ಯವನ್ನು ನಿರಂತರವಾಗಿ ಕಾಪಾಡಿಕೊಳ್ಳಲು  ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES