SOCIAL MEDIA

Newsletter

PARTNER SITES
Select Language Select State

KSRTC ಬಸ್ ಅಡ್ಡಗಟ್ಟಿ 'ಅಲ್ಲಾಹು ಅಕ್ಬರ್' ಘೋಷಣೆ ಕೂಗಿದ ಯುವಕ; ಸಾರ್ವಜನಿಕರಲ್ಲಿ ಆತಂಕ!

ಮಂಡ್ಯದ ಮಹಾವೀರ ವೃತ್ತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸನ್ನ ಅಡ್ಡಗಟ್ಟಿ 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗಿ ಪರಾರಿಯಾಗಿದ್ದ ಹಾಲಹಳ್ಳಿಯ ಉಮರ್ ಫಾರೂಕ್‌ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಕಲಹ ಹಾಗೂ ಮಾನಸಿಕ ಸಮಸ್ಯೆಯಿಂದ ಆತ ಈ ರೀತಿ ವರ್ತಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಆತನನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಪೊಲೀಸರು ನಿರ್ಧರಿಸಿದ್ದು, ವರದಿ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Written By Puttaraj K Alur
Published: Nov 21, 2026, 14:25 IST | Updated: Nov 21, 2026, 14:44 IST
Image Credit: Mandya News
Join

Mandya News: ಮಂಡ್ಯದ ಜನನಿಬಿಡ ಮಹಾವೀರ ವೃತ್ತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸನ್ನ ಅಡ್ಡಗಟ್ಟಿ 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗಿದ ಯುವಕನನ್ನ ಮಂಡ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನ ಪತ್ತೆಹಚ್ಚಿ ವಿಚಾರಣೆ ಕೈಗೊಂಡಿದ್ದಾರೆ. ಕೌಟುಂಬಿಕ ಕಲಹ ಹಾಗೂ ಮಾನಸಿಕ ಸಮಸ್ಯೆಯಿಂದ ಯುವಕ ಈ ರೀತಿ ವರ್ತಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮಂಡ್ಯ ನಗರದ ಪ್ರಮುಖ ಸಂಚಾರ ಕೇಂದ್ರಗಳಲ್ಲಿ ಒಂದಾದ ಮಹಾವೀರ ವೃತ್ತದಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಟ್ರಾಫಿಕ್‌ನಲ್ಲಿ ನಿಂತಿತ್ತು. ಇದೇ ವೇಳೆ ಬೈಕ್‌ನಲ್ಲಿ ಬಂದ ಯುವಕ ಏಕಾಏಕಿ ಬಸ್ಸಿನ ಮುಂಭಾಗಕ್ಕೆ ತೆರಳಿ ತನ್ನ ವಾಹನವನ್ನ ಅಡ್ಡಲಾಗಿ ನಿಲ್ಲಿಸಿದ್ದಾನೆ. ಬಳಿಕ ಬಸ್ಸಿನ ಎದುರು ನಿಂತು ಜೋರಾಗಿ 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ.

ಜನನಿಬಿಡ ರಸ್ತೆಯಲ್ಲಿ ನಡೆದ ಈ ಅನಿರೀಕ್ಷಿತ ಘಟನೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು, ಚಾಲಕ ಮತ್ತು ನಿರ್ವಾಹಕರು ಸೇರಿದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ಕೆಲಕಾಲ ಆತಂಕಕ್ಕೊಳಗಾಗಿದ್ದಾರೆ. ಘೋಷಣೆ ಕೂಗಿದ ಬಳಿಕ ಯುವಕ ತನ್ನ ಬೈಕ್ ಹತ್ತಿ ಅಲ್ಲಿಂದ ವೇಗವಾಗಿ ತೆರಳಿದ್ದಾನೆ. ಈ ಸಂಪೂರ್ಣ ಘಟನೆಯ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಂಡ್ಯ ಪೊಲೀಸರು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಆರೋಪಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಬೈಕ್‌ನ ನೋಂದಣಿ ಸಂಖ್ಯೆಯನ್ನ ಆಧರಿಸಿ ಯುವಕನ ಗುರುತು ಪತ್ತೆಹಚ್ಚಿದ್ದಾರೆ. ಬಳಿಕ ಆತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪೊಲೀಸರ ವಶದಲ್ಲಿರುವ ಯುವಕನನ್ನ ಮಂಡ್ಯ ತಾಲೂಕಿನ ಹಾಲಹಳ್ಳಿ ಗ್ರಾಮದ ನಿವಾಸಿ ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾ ರಾಣಿ, ಯುವಕನನ್ನ ವಶಕ್ಕೆ ಪಡೆದು ಪ್ರಾಥಮಿಕ ವಿಚಾರಣೆ ನಡೆಸಿರುವುದಾಗಿ ತಿಳಿಸಿದ್ದಾರೆ.

 

 ವಿಚಾರಣೆ ಸಂದರ್ಭದಲ್ಲಿ ಉಮರ್ ಫಾರೂಕ್ ಅಸಹಜವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ ಎನ್ನಲಾಗಿದೆ. ತನ್ನೊಳಗೆ ದೇವರು ಪ್ರವೇಶಿಸಿದ್ದರಿಂದ ಘೋಷಣೆ ಕೂಗಿದ್ದಾಗಿ ಆತ ಹೇಳಿಕೊಂಡಿದ್ದಾನೆಂದು ಎಸ್ಪಿ ಮಾಹಿತಿ ನೀಡಿದ್ದಾರೆ. ಈ ಹೇಳಿಕೆಯ ಹಿನ್ನೆಲೆಯಲ್ಲಿ ಆತನ ಮಾನಸಿಕ ಸ್ಥಿತಿಯ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

 

ಪ್ರಾಥಮಿಕ ತನಿಖೆಯಲ್ಲಿ ಆರೋಪಿಯ ವೈಯಕ್ತಿಕ ಹಾಗೂ ಕೌಟುಂಬಿಕ ವಿಚಾರಗಳ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಉಮರ್ ಫಾರೂಕ್ ತನ್ನ ಎರಡನೇ ಪತ್ನಿಯೊಂದಿಗೆ ಕೌಟುಂಬಿಕ ಕಲಹ ಹೊಂದಿದ್ದನು ಎನ್ನಲಾಗಿದೆ. ಈ ಸಂಬಂಧ ಆತನ ಪತ್ನಿ ಈ ಹಿಂದೆಯೇ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಕೌಟುಂಬಿಕ ಸಮಸ್ಯೆ ಮತ್ತು ಮಾನಸಿಕ ಒತ್ತಡದ ಹಿನ್ನೆಲೆಯಲ್ಲಿ ಆತ ಕಳೆದ ಕೆಲವು ದಿನಗಳಿಂದ ಅಸಹಜವಾಗಿ ವರ್ತಿಸುತ್ತಿದ್ದ ಎಂಬ ವಿಚಾರವೂ ಸ್ಥಳೀಯರು ಹಾಗೂ ಕುಟುಂಬಸ್ಥರ ವಿಚಾರಣೆಯಿಂದ ತಿಳಿದುಬಂದಿದೆ ಎಂದು ವರದಿಯಾಗಿದೆ.

ಸದ್ಯ ಆರೋಪಿಯ ಮಾನಸಿಕ ಆರೋಗ್ಯದ ಸ್ಥಿತಿಯನ್ನ ಖಚಿತಪಡಿಸಿಕೊಳ್ಳಲು ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಪೊಲೀಸರು ಮುಂದಾಗಿದ್ದಾರೆ. ವೈದ್ಯಕೀಯ ಪರೀಕ್ಷೆಯ ವರದಿ ಬಂದ ಬಳಿಕ ಹಾಗೂ ಪ್ರಕರಣದ ಕುರಿತು ಸಂಪೂರ್ಣ ತನಿಖೆ ನಡೆಸಿದ ನಂತರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಡಾ.ಶೋಭಾ ರಾಣಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯಾವುದೇ ಊಹಾಪೋಹಗಳು ಅಥವಾ ವದಂತಿಗಳನ್ನ ಹರಡದಂತೆ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಮನವಿ ಮಾಡಿದೆ. ಪ್ರಕರಣದ ನಿಜವಾದ ಹಿನ್ನೆಲೆ ಮತ್ತು ಆರೋಪಿಯ ಆರೋಗ್ಯದ ಸ್ಥಿತಿಯ ಕುರಿತು ವೈದ್ಯಕೀಯ ತಪಾಸಣೆ ಹಾಗೂ ತನಿಖೆಯ ನಂತರ ಹೆಚ್ಚಿನ ಸ್ಪಷ್ಟತೆ ದೊರೆಯಬೇಕಿದೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ZEENEWS TRENDING STORIES